ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ 65 ಲಕ್ಷ ಜನರಿಗೆ ಲಸಿಕೆ

ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್‌ ಹೇಳಿಕೆ
Last Updated 11 ಏಪ್ರಿಲ್ 2021, 7:19 IST
ಅಕ್ಷರ ಗಾತ್ರ

ಬಾಗೇಪಲ್ಲಿ: ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಿರುವುದರಿಂದ ಮುನ್ನಚ್ಚರಿಕೆ ಕ್ರಮ ಅನುಸರಿಸಬೇಕು. 45 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು. ರಾಜ್ಯದಲ್ಲಿ ಇಲ್ಲಿಯವರೆಗೆ 65 ಲಕ್ಷಕ್ಕೂ ಹೆಚ್ಚು ಜನರು ಲಸಿಕೆ ಪಡೆದಿದ್ದಾರೆ. ಜಿಲ್ಲೆಯಲ್ಲಿ ಶೇಕಡ 70ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಪ್ರತಿಪಾದಿಸಿದರು.

ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ-7ರ ಟೋಲ್ ಕೇಂದ್ರದ ಬಳಿ ಶನಿವಾರ ಹರೀಶ್ ಎಕ್ಸ್‌ಪೋರ್ಟ್‌ ಹಾಗೂ ಮಯೂರಿ ಪತ್ತಿನ ಸಹಕಾರ ಸಂಘ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ವಿಮೆಯನ್ನು ಪ್ರತಿಯೊಬ್ಬರು ಮಾಡಿಸಿಕೊಳ್ಳಬೇಕು. ಕೊರೊನಾ ಎಂಬ ಯುದ್ಧದ ಹೋರಾಟದಲ್ಲಿ ಜನರಿಗೆ ಆರೋಗ್ಯ ಕಲ್ಪಿಸುವ ಗುರಿಯಲ್ಲಿ ಗೆಲ್ಲುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪುರುಷರಿಗೆ ಇರುವಷ್ಟೇ ಅವಕಾಶಗಳನ್ನು ಮಹಿಳೆಯರಿಗೂ ಕಲ್ಪಿಸಿ ಅವರ ಆರ್ಥಿಕ ಚೈತನ್ಯದ ಜೊತೆಗೆ ನೆಮ್ಮದಿ, ಸ್ವಾಭಿಮಾನದ ಬದುಕನ್ನು ಕಲ್ಪಿಸಬೇಕಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಕಾರ್ಮಿಕ ಹಕ್ಕುಗಳನ್ನು ಕಲ್ಪಿಸಿದೆ. ಆದರೆ, ಕೆಲವರು ವಿನಾಕಾರಣ ಹೋರಾಟ ಮಾಡುತ್ತಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಉದ್ಯೋಗ ಸೃಷ್ಟಿ ಮಾಡಿ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುತ್ತವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನರಿಗೆ ಜನಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.

ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಬಾಲ್ಯವಿವಾಹ ಮಾಡದಂತೆ ಎಚ್ಚರವಹಿಸಬೇಕು. ಮಹಿಳೆಯರು ಕೌಶಲಾಭಿವೃದ್ಧಿ, ಆರೋಗ್ಯ, ಶಿಕ್ಷಣವನ್ನು ಕಡ್ಡಾಯವಾಗಿ ಪಡೆದರೆ ಆರ್ಥಿಕವಾಗಿ ಸದೃಢರಾಗಬಹುದು. ಡಿಸಿಸಿ ಬ್ಯಾಂಕ್‌ ನಿರ್ದೇಶಕ ವೆಂಕಟಶಿವಾರೆಡ್ಡಿ ಪುತ್ರ ಹರೀಶ್ ಅವರು ಮಯೂರಿ ಪತ್ತಿನ ಸಹಕಾರ ಸಂಘ ರಚಿಸಿ ₹ 2 ಕೋಟಿ ಠೇವಣಿ ಮಾಡಿ ಮಹಿಳೆಯರ ಕಲ್ಯಾಣ ಕಾರ್ಯಕ್ರಮಗಳನ್ನು ಮಾಡಿರುವುದು ಶ್ಲಾಘನೀಯ ಎಂದರು.

ಸಂಸದ ಬಿ.ಎನ್. ಬಚ್ಚೇಗೌಡ ಮಾತನಾಡಿ, ‘ಕಾರ್ಮಿಕ ಸಚಿವನಾಗಿ ಐದು ವರ್ಷ ಸೇವೆ ಮಾಡಿದ್ದೇನೆ. ಕಾರ್ಮಿಕರ ಕಲ್ಯಾಣ ಕಾರ್ಯಕ್ರಮ, ವೇತನವನ್ನು ಸಮರ್ಪಕವಾಗಿ ನೀಡಲು ಶ್ರಮಿಸಿದ್ದೇನೆ. 5 ಲಕ್ಷ ಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸಿದ್ದೇನೆ. ಬಾಗೇಪಲ್ಲಿಯಂತಹ ಹಿಂದುಳಿದ ಪ್ರದೇಶದಲ್ಲಿ ಗಾರ್ಮೆಂಟ್ಸ್‌ಗಳನ್ನು ತೆರೆದು, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಪತ್ರ ಬರೆಯುತ್ತೇನೆ’ ಎಂದು ತಿಳಿಸಿದರು.

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಆರೋಗ್ಯ ಸಚಿವ ಸುಧಾಕರ್ ಸೇವೆ ಅಭಿನಂದನೀಯ. ರಾಜ್ಯದಲ್ಲಿ ಲಸಿಕೆಯ ಕೊರತೆ ಇಲ್ಲ. ಜನರು ಮುಂಜಾಗ್ರತಾ ಕ್ರಮ ಪಾಲಿಸಬೇಕು. ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ, ಮಾಜಿ ಅಧ್ಯಕ್ಷ ಕೇಶವರೆಡ್ಡಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ವಿ. ವೆಂಕಟಶಿವಾರೆಡ್ಡಿ, ಸಮಾಜ ಸೇವಕ ಗುಂಜೂರು ಶ್ರೀನಿವಾಸರೆಡ್ಡಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಮಲಿಂಗಪ್ಪ, ಮಾರುಕಟ್ಟೆ ನಿಗಮದ ಅಧ್ಯಕ್ಷ ಕೆ.ವಿ. ನಾಗರಾಜ್, ಬಿಜೆಪಿ ಮಂಡಲ ಅಧ್ಯಕ್ಷ ಆರ್. ಪ್ರತಾಪ್, ಹರೀಶ್ ಎಕ್ಸ್‌ಪೋರ್ಟ್‌ ಮಾಲೀಕ ಎಸ್.ಎ. ಹರೀಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT