ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋರಾಟದ ಹಕ್ಕು ಕಸಿದ ಸರ್ಕಾರ : ಎಂ.ಪಿ.ಮುನಿವೆಂಕಟಪ್ಪ

Last Updated 19 ಡಿಸೆಂಬರ್ 2019, 13:44 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಕೇಂದ್ರ ಸರ್ಕಾರ ಜನವಿರೋಧಿ ಮತ್ತು ಸಂವಿಧಾನ ವಿರೋಧಿ ನೀತಿಗಳನ್ನು ಪ್ರಶ್ನಿಸಿ ಬೀದಿಗಿಳಿದು ಹೋರಾಟ ಮಾಡುವ ಹಕ್ಕನ್ನು ಕಸಿದುಕೊಳ್ಳಲು ಮುಂದಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪೊಲೀಸ್ ಇಲಾಖೆಯನ್ನು ಛೂ ಬಿಟ್ಟು ಹೋರಾಟಗಾರರನ್ನು ಹತ್ತಿಕ್ಕುವ ಕೆಲಸ ದೇಶದ್ಯಾಂತ ಮಾಡುತ್ತಿವೆ. ಇದು ಖಂಡನೀಯ’ ಎಂದು ಕೃಷಿ ಕೂಲಿಕಾರರ ಸಂಘದ ರಾಜ್ಯ ಸಮಿತಿಯ ಸದಸ್ಯ ಎಂ.ಪಿ.ಮುನಿವೆಂಕಟಪ್ಪ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಜಾರಿ ಮಾಡುತ್ತಿರುವ ನೀತಿಗಳು ಜನವಿರೋಧಿಯಾಗಿವೆ. ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿ ಮಾಡುವ ಮೂಲಕ ಕೇಂದ್ರ ಸರ್ಕಾರ ನಮ್ಮ ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ದಮನಗೊಳಿಸಲು ಮುಂದಾಗಿದೆ’ ಎಂದು ಆರೋಪಿಸಿದರು.

‘ಭಾರತ ವೈವಿಧ್ಯಮಯ ಬಹುಸಂಸ್ಕೃತಿ ಹೊಂದಿರುವ ದೇಶವಾಗಿದೆ. ಇಂತಹ ರಾಷ್ಟ್ರದಲ್ಲಿ ಬಿಜೆಪಿ, ಆರ್‍ಎಸ್‍ಎಸ್ ಭಾವನಾತ್ಮಕ ವಿಚಾರಗಳನ್ನು ಮುನ್ನೆಲೆಗೆ ತಂದು ಜನರ ಮನಸ್ಸನ್ನು ಒಡೆಯುವ ಕೆಲಸ ಮಾಡುತ್ತ, ದೇಶವನ್ನು ಹಿಂದೂ ರಾಷ್ಟ್ರ ಮಾಡಲು ಹೊರಟಿವೆ. ಕೇಂದ್ರದ ಬಿಜೆಪಿ ಸರ್ಕಾರ ಒಂದು ಧರ್ಮವನ್ನು ಪ್ರಧಾನವಾಗಿ ಇಟ್ಟುಕೊಂಡು ಜನರ ಮೇಲೆ ಬಲಪಂಥಿಯ ಉಗ್ರವಾದ ಹೇರಲು ಮುಂದಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಆರ್‍ಎಸ್‍ಎಸ್ ಅಣತಿಯಂತೆ ದೇಶವನ್ನು ಹಿಂದೂ ರಾಷ್ಟ್ರವನ್ನು ಮಾಡಲು ಹೊರಟಿರುವ ಬಿಜೆಪಿ ಸರ್ಕಾರ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಉದ್ದೇಶ ಪೂರ್ವಕವಾಗಿ ಜಾರಿ ಮಾಡಿದೆ. ದೇಶದಲ್ಲಿ 20 ಕೋಟಿಗೂ ಅಧಿಕ ಆದಿವಾಸಿಗಳು ವಾಸವಾಗಿದ್ದಾರೆ. ಮುಸ್ಲಿಮರು ಯಾವುದೇ ಭೂಮಿ ದಾಖಲೆ ಇಲ್ಲದೇ ದಶಕಗಳಿಂದ ಜೀವನ ನಡೆಸುತ್ತಿದ್ದಾರೆ. ಇವರೆಲ್ಲ ಇವತ್ತು ಹೇಗೆ ಪೌರತ್ವ ಸಾಬೀತುಪಡಿಸಲು ಸಾಧ್ಯ? ಕೇಂದ್ರ ಸರ್ಕಾರ ನಾಗರಿಕರು ಪೌರತ್ವ ಪಡೆಯುವ ಕಾನೂನನ್ನು ಬದಲಿಸಿರುವುದು ಸಂವಿಧಾನದ ವಿರೋಧಿ ನಡೆಯಾಗಿದೆ’ ಎಂದು ತಿಳಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ ಮಾತನಾಡಿ, ‘ಪೌರತ್ವ ತಿದ್ದುಪಡಿ ಮಸೂದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಸಂವಿಧಾನ ವಿರೋಧಿ ನೀತಿಗಳಾಗಿವೆ. ಇವು ದೇಶದ ಐಕ್ಯತೆ ಮತ್ತು ಸಮಗ್ರತೆಗೆ ಅಪಾಯಕಾರಿ ಹಾನಿ ಉಂಟು ಮಾಡಲಿವೆ. ಇವತ್ತು ರಾಜ್ಯ ಸರ್ಕಾರ ನಿಷೇಧಾಜ್ಞೆ ಜಾರಿಗೊಳಿಸುವ ಮೂಲಕ ಇವುಗಳ ವಿರುದ್ಧದ ಹೋರಾಟ ಹತ್ತಿಕ್ಕುವ ಕೆಲಸಕ್ಕೆ ಮುಂದಾಗಿದೆ. ಈ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ನಡೆಯಲಿದೆ’ ಎಂದು ಹೇಳಿದರು.

ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷೆ ಸಾವಿತ್ರಮ್ಮ, ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಮುಖಂಡ ನರಸಿಂಹಯ್ಯ, ಎಸ್‍ಎಫ್‍ಐ ರಾಜ್ಯ ಸಮಿತಿ ಸದಸ್ಯ ಸೋಮು, ಜಿಲ್ಲಾ ಸಮಿತಿ ಮುಖಂಡರಾದ ರಮೇಶ್, ಸತೀಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT