ಬುಧವಾರ, ಡಿಸೆಂಬರ್ 2, 2020
23 °C

ಪಿಯು ಕಾಲೇಜು ತೆರೆಯಲು ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೌರಿಬಿದನೂರು: ‘ಕೋಟೆ ಶಾಲಾ ಆವರಣದಲ್ಲಿ ಬಾಲಕಿಯರ ಪದವಿಪೂರ್ವ ಕಾಲೇಜು ತೆರೆಯಲು ಪ್ರಯತ್ನ ಮಾಡಲಾಗುತ್ತಿದೆ. ಸರ್ಕಾರಿ ಪದವಿ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ವಿಭಾಗವನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭಿಸಲಾಗುವುದು’ ಎಂದು ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ಹೇಳಿದರು.

ನಗರದ ಕೋಟೆ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ಕನ್ನಡ ರಾಜ್ಯೋತ್ಸವದ ಸವಿನೆನಪಿನಲ್ಲಿ ನಿರ್ಮಿಸಲಾಗಿದ್ದ ಧ್ವಜ ಸ್ತಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರಲ್ಲಿರುವ ತಪ್ಪುಕಲ್ಪನೆಯನ್ನು ಹೋಗಲಾಡಿಸುವಲ್ಲಿ ಸರ್ಕಾರ ಹಾಗೂ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕಾಗಿದೆ’ ಎಂದರು.

ಕನ್ನಡ ನಾಡು, ನುಡಿಗಾಗಿ ಅನೇಕ ಕವಿಗಳು, ಸಾಹಿತಿಗಳು ಶ್ರಮಿಸಿದ್ದಾರೆ. ಪ್ರಸ್ತುತ ಕನ್ನಡ ಭಾಷೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಸದೃಢವಾದ ಹಾಗೂ ಪ್ರಾಮಾಣಿಕವಾದ ರಾಜಕೀಯ ಸಂಕಲ್ಪವೇ ಕನ್ನಡದ ಸಮಸ್ಯೆಗಳ ಪರಿಹಾರಕ್ಕೆ ಇರುವ ಪ್ರಬಲ ಸಾಧನ ಎಂದು ತಿಳಿಸಿದರು.

ಜಿಲ್ಲಾ ಕಸಾಪ ಅಧ್ಯಕ್ಷ ಕೈವಾರ ಎನ್. ಶ್ರೀನಿವಾಸ್ ಮಾತನಾಡಿ, ಇಡೀ ಜಿಲ್ಲೆಯಲ್ಲಿ ತಮ್ಮ ಅಧಿಕಾರಾವಧಿಯಲ್ಲಿ ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಭಾಷೆಯ ಅಭಿವೃದ್ಧಿಗಾಗಿ ಶ್ರಮಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ನೂತನವಾಗಿ ನಿರ್ಮಿಸಲಾಗಿದ್ದ ಶಾಲಾ ತರಗತಿ‌ ಕೊಠಡಿಗಳನ್ನು ಉದ್ಘಾಟಿಸಿದರು. ಎಸ್ಸೆಸ್ಸೆಲ್ಸಿಯ ಕನ್ನಡ ವಿಷಯದಲ್ಲಿ ಹೆಚ್ಚು ಅಂಕ ಪಡೆದ ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌‌ಟಾಪ್ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ವಿ. ರವೀಂದ್ರನಾಥ್, ನಗರಸಭೆ ಅಧ್ಯಕ್ಷೆ ಕೆ.ಎಂ. ಗಾಯತ್ರಿ ಬಸವರಾಜ್, ಉಪಾಧ್ಯಕ್ಷೆ ಭಾಗ್ಯಮ್ಮ, ನಗರಸಭೆ ಸದಸ್ಯ ರಾಜಕುಮಾರ್, ತಾ.ಪಂ. ಅಧ್ಯಕ್ಷ ಆರ್. ಲೋಕೇಶ್, ಉಪಾಧ್ಯಕ್ಷೆ ರತ್ನಮ್ಮ, ಬಿಇಒ ಕೆ.ವಿ. ಶ್ರೀನಿವಾಸ‌ಮೂರ್ತಿ, ಮುಖಂಡರಾದ ಎನ್.ಎನ್. ಪ್ರಕಾಶ್ ರೆಡ್ಡಿ, ಕೆ.ವಿ. ಪ್ರಕಾಶ್, ಟಿ. ನಂಜುಂಡಪ್ಪ, ಗೌರೀಶ್, ಗೋಪಿ, ಬಾಲಪ್ಪ, ಕಸಾಪ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು