ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನ ಕೃತಜ್ಞತಾ ಸಭೆ: ಸೋಲಿನಿಂದ ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ

ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಧೈರ್ಯ ತುಂಬಿದ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ
Last Updated 14 ಡಿಸೆಂಬರ್ 2019, 11:00 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಆಗಿರುವ ಸೋಲು ಸ್ವಾಭಿಮಾನದ ಸೋಲು. ಈ ಸೋಲಿನಿಂದ ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ. ನಾವೆಲ್ಲಾ ಸದಾ ಕಾರ್ಯಕರ್ತರ ಜತೆ ಇರುತ್ತೇವೆ’ ಎಂದು ಗೌರಿಬಿದನೂರುಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಹೇಳಿದರು.

ನಗರದ ಶನಿವಾರ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ‘ಕೃತಜ್ಞತಾ ಸಭೆ’ಯಲ್ಲಿ ಮಾತನಾಡಿದ ಅವರು, ‘ಮುಂದಿನ ದಿನಗಳಲ್ಲಿ ನಗರಸಭೆ, ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ನಾವೆಲ್ಲರೂ ಪಕ್ಷವನ್ನು ಬಲಪಡಿಸಬೇಕು’ ಎಂದು ತಿಳಿಸಿದರು.

‘ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಧೋರಣೆಯಿಂದ ಬಿಜೆಪಿ ಅವಸಾನದ ಅಂಚಿಗೆ ಹೋಗುತ್ತಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ರಾಜಕಾರಣದಲ್ಲಿ ಅವಕಾಶವಾದಿಯಾಗಿ ಹಾಗೂ ಕಾಂಗ್ರೆಸ್‌ಗೆ ದ್ರೋಹ ಮಾಡಿದವರು ಉಪ ಚುನಾವಣೆಯಲ್ಲಿ ಹಣದ ಹೊಳೆಯನ್ನು ಹರಿಸಿದ್ದಾರೆ. ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಪಡಿಸುವ ಜತೆಗೆ ಭ್ರಷ್ಟಾಚಾರದ ವಿರುದ್ದ ನಮ್ಮ ಹೋರಾಟ ಮುಂದುವರೆಯುತ್ತದೆ’ ಎಂದರು.

ಚಿಕ್ಕಬಳ್ಳಾಪುರ ಕ್ಷೇತ್ರದ ಉಪ ಚುನಾವಣೆಯ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಎಂ.ಅಂಜನಪ್ಪ ಮಾತನಾಡಿ, ‘ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿರುವುದು ಕಾಂಗ್ರೆಸ್. ನಮ್ಮ ಪಕ್ಷಕ್ಕೆ 70 ವರ್ಷಗಳ ಇತಿಹಾಸವಿದೆ ಎನ್ನುವುದು ಕಾಂಗ್ರೆಸ್ ಕಾರ್ಯಕರ್ತರು ಮರೆಯಬಾರದು. ವೈವಿಧ್ಯಮಯ ಜಾತಿ, ಭಾಷೆ, ಧರ್ಮ, ಸಂಸ್ಕೃತಿಗಳಿಂದ ಕೂಡಿರುವ ಭಾರತದಲ್ಲಿ ಕಾಂಗ್ರೆಸ್‌ ಎಲ್ಲರನ್ನೂ ಒಟ್ಟುಗೂಡಿಸಿ ಸಾಮಾಜಿಕ ಸಮಾನತೆ ಹಾಗೂ ಬಡ ವರ್ಗಗಳ ಉನ್ನತಿಗೆ ಶ್ರಮಿಸಿದೆ’ ಎಂದು ಹೇಳಿದರು.

‘ಇವತ್ತು ಬಿಜೆಪಿ ಆಡಳಿತದಲ್ಲಿ ದೇಶದ ಜಿಡಿಪಿ ಶೇ 4.5ಕ್ಕೆ ಕುಸಿದು, ಕಳೆದ ಏಳು ವರ್ಷಗಳಲ್ಲಿಯೇ ಅತ್ಯಂತ ಕನಿಷ್ಠ ಮಟ್ಟಕ್ಕೆ ತಲುಪಿದೆ. ಯುಪಿಎ ಸರ್ಕಾರದಲ್ಲಿ ಶೇ 4.5ರಷ್ಟು ಇದ್ದ ಕೃಷಿ ಉತ್ಪಾದನೆ ಕೂಡ ಇವತ್ತು ಶೇ 2.5ಕ್ಕೆ ಕುಸಿದಿದೆ. ಹದಗೆಟ್ಟ ಆರ್ಥಿಕತೆ, ನಿರುದ್ಯೋಗ ಸಮಸ್ಯೆ ಉಲ್ಭಣ, ಬೆಲೆ ಏರಿಕೆಯಂತಹ ಸಮಸ್ಯೆಗಳನ್ನು ಬಗೆಹರಿಸಲಾಗದ ಕೇಂದ್ರ ಜನರ ಗಮನ ಬೇರೆಡೆ ಸೆಳೆಯುವ ತಂತ್ರದ ಭಾಗವಾಗಿ ಇತ್ತೀಚೆಗೆ ಸಂವಿಧಾನ ವಿರೋಧಿ ಕ್ರಮವಾದ ಪೌರತ್ವ ತಿದ್ದುಪಡಿ ಮಸೂದೆ ಜಾರಿಗೆ ಮುಂದಾಗಿದೆ’ ಎಂದು ಆರೋಪಿಸಿದರು.

ಮಾಜಿ ಶಾಸಕ ಎನ್.ಸಂಪಂಗಿ ಮಾತನಾಡಿ, ‘ರಾಜಕೀಯವನ್ನು ಸ್ಪರ್ಧಾಮನೋಭಾವದಿಂದ ತೆಗೆದುಕೊಳ್ಳಬೇಕು. ಸ್ಪರ್ಧೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಚುನಾವಣೆಯಲ್ಲಿ ಕೋಟಿಗಟ್ಟಲೇ ಖರ್ಚು ಮಾಡಿ ಗೆದ್ದವರಿಗೆ ಅಧಿಕಾರ ಹಿಡಿದ ಬಳಿಕ ಚುನಾವಣೆಯಲ್ಲಿ ಕಳೆದುಕೊಂಡ ಹಣ ಸಂಪಾದಿಸುವ ಮನೋಭಾವ ಬರುತ್ತದೇ ವಿನಾ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ಸತತ ಹೋರಾಟವಿದ್ದರೆ ಮುಂದೊಂದು ದಿನ ನಮಗೆ ಜಯ ಸಿಗುತ್ತದೆ. ಮುಂದಿನ ದಿನಗಳಲ್ಲಿ ನಡೆಯುವ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯಿತಿ ಚುನಾವಣೆಗಳೆಲ್ಲವೂ ಅಂಜನಪ್ಪ ಅವರ ನೇತೃತ್ವದಲ್ಲಿಯೇ ನಡೆಯಲಿವೆ’ ಎಂದು ತಿಳಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸುನಿಲ್ ಕುಮಾರ್, ಕೆಪಿಸಿಸಿ ಸದಸ್ಯ ಎಸ್.ಪಿ.ಶ್ರೀನಿವಾಸ್‌, ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್.ಪ್ರಕಾಶ್, ಮುಖಂಡರಾದ ಯಲುವಳ್ಳಿ ರಮೇಶ್, ಮುನೇಗೌಡ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT