ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಚನಕಾರರ ಆದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ

ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ಸಲಹೆ
Last Updated 25 ಫೆಬ್ರುವರಿ 2020, 13:41 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ತಮ್ಮ ನಡೆ, ನುಡಿಗಳಿಂದ ಸಮಾಜದಲ್ಲಿನ ಅಸ್ಪೃಶ್ಯತೆ ಹಾಗೂ ಮೂಢನಂಬಿಕೆಯನ್ನು ಹೊಗಲಾಡಿಸಲು ಶ್ರಮಿಸಿದ ಶರಣರು ಮತ್ತು ವಚನಕಾರರ ಆದರ್ಶಗಳು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ತಿಳಿಸಿದರು.
ನಗರದಲ್ಲಿ ಮಂಗಳವಾರ ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಖೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘12ನೇ ಶತಮಾನದ ವಚನಕಾರರ ವಚನಗಳು ನಮಗೆ ನಿಜ ಜೀವನದ ಸಂವಿಧಾನವಿದ್ದಂತೆ. ಯಾರಿಗೂ ಹೆದರದೆ, ಅಳುಕದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಿದ ವಚನಕಾರರು ತಮ್ಮ ವಚನಗಳ ಮೂಲಕ ಕಾಯಕ ತತ್ವ, ಸಮಾನತೆ, ಮಾನವಿಯತೆ, ಅನುಕಂಪ ಮುಂತಾದ ಉದಾತ್ತ ಸಂದೇಶಗಳನ್ನು ಸಮಾಜದಲ್ಲಿ ಪಸರಿಸುವ ಮೂಲಕ ಸಮಸಮಾಜ ನಿರ್ಮಿಸುವ ದಿಸೆಯಲ್ಲಿ ಬಹುದೊಡ್ಡ ಕೊಡುಗೆ ನೀಡಿದರು’ ಎಂದು ಹೇಳಿದರು.

‘ಚೌಡಯ್ಯ ಅವರು ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಲ್ಲ. ಇಡೀ ಸಮಾಜದ ಆಸ್ತಿಯಾಗಿದ್ದಾರೆ. ಇವತ್ತು ಗಂಗಾಮತ ಸಮುದಾಯ ಶೈಕ್ಷಣಿಕವಾಗಿ ಪ್ರಗತಿ ಕಾಣುವ ಮೂಲಕ ಉನ್ನತ ಸಾಧನೆ ಗಳಿಸಿ ಉನ್ನತ ಜೀವನ ನಡೆಸಲು ಮುಂದಾಗಬೇಕು. ಚೌಡಯ್ಯನವರು ಪ್ರತಿಪಾದಿಸಿದ ಮೌಲ್ಯಗಳನ್ನು ಯುವಜನರು ಬದುಕಿನಲ್ಲಿ ಮೈಗೂಡಿಸಿಕೊಂಡು ಪ್ರಜ್ಞಾವಂತ ನಾಗರಿಕರಾಗಿ ಉತ್ತಮ ಸಮಾಜ ನಿರ್ಮಿಸಲು ಶ್ರಮಿಸಬೇಕು’ ಎಂದರು.

ಶಿಡ್ಲಘಟ್ಟ ಅಕ್ಷರ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಮಾತನಾಡಿ, ‘ಸಮಾಜದ ಏಳಿಗೆಗೆ ಶಿಕ್ಷಣ ಅಗತ್ಯ. ಪಾಲಕರು ಮಕ್ಕಳಿಗೆ ಶಿಕ್ಷಣ ಕೊಡಿಸಲು ಆದ್ಯತೆ ನೀಡಬೇಕು. ಯುವಕರು ದುಶ್ಚಟಗಳಿಗೆ ಬಲಿಯಾಗಬಾರದು. ಒಳ್ಳೆಯ ಗುಣ ಬೆಳೆಸಿಕೊಳ್ಳಬೇಕು. ಮೂಲಸೌಕರ್ಯಗಳಿರದ ಹಿಂದಿನ ಕಾಲದಲ್ಲಿ ಗಂಗಾಮತಸ್ಥರು ದೋಣಿ ನಡೆಸುವ ಮೂಲಕ ನದಿ ಪಾತ್ರದ ಜನರ ಬದುಕಿನ ಸೇತುವೆಯಂತಾಗಿ ಸೇವೆ ಸಲ್ಲಿಸುತ್ತಿದ್ದರು. ಹೀಗಾಗಿಯೇ, ಅಂಬಿಗರು ನಂಬಿದವರ ಕೈಬಿಡುವುದಿಲ್ಲ ಎಂಬ ನಾಣ್ನುಡಿ ಇಂದಿಗೂ ಕೇಳಬಹುದಾಗಿದೆ’ ಎಂದು ಹೇಳಿದರು.

‘800 ವರ್ಷಗಳ ಹಿಂದೆ, 12ನೇ ಶತಮಾನದಲ್ಲಿ ಬಾಳಿದ ಅಂಬಿಗರ ಚೌಡಯ್ಯ ಅವರ ವಚನಗಳು ಸರ್ವಕಾಲಿಕ. ಅಂತಹವರ ವಚನಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಜೀವನ ಸಾರ್ಥಕವಾಗುತ್ತದೆ. ಅವರು ತಮ್ಮ ವಚನಗಳಲ್ಲಿ ಸತ್ಯವನ್ನು ಪ್ರತಿಪಾದಿಸಿ ಸಮಾಜಕ್ಕೆ ಒಳ್ಳೆ ಸಂದೇಶ ನೀಡಿದ್ದಾರೆ. ಅಂತಹ ಶರ­ಣರ ವಿಚಾರಗಳು ಮೈಗೂಡಿಸಿಕೊಂಡರೆ ಎಲ್ಲರಿಗೂ ಒಳ್ಳೆಯದಾಗುತ್ತದೆ. ಆಗ ಮಾತ್ರ ಇಂತಹ ಜಯಂತಿಗೆ ಗೌರವ ಸಲ್ಲಿಸಿದಂತಾಗುತ್ತದೆ’ಎಂದು ತಿಳಿಸಿದರು.

ಸಿ.ವಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಜಿ.ನರಸಿಂಹಯ್ಯ ಅವರು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಗಂಗಾಮತ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಪ್ರಮುಖ ಬೀದಿಗಳಲ್ಲಿ ಕಲಾತಂಡಗಳೊಂದಿಗೆ ಅಂಬಿಗರ ಚೌಡಯ್ಯ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು.

ತಹಶೀಲ್ದಾರ್ ಕೆ.ನರಸಿಂಹಮೂರ್ತಿ, ನಿವೃತ್ತ ಪ್ರಾಂಶುಪಾಲ ಬಿ.ವಿ ಕೃಷ್ಣಪ್ಪ, ಬೆಸ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಯರಾಮ್, ಸಮುದಾಯ ಮುಖಂಡರಾದ ಶೋಭಾ ಶ್ರೀನಿವಾಸ್, ದೀಪಾ ಆನಂದ್, ಜಗನ್ನಾಥ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT