ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಂತಾಮಣಿ: ಡೆಂಗಿ, ಚಿಕೂನ್ ಗುನ್ಯಾ ನಿಯಂತ್ರಣಕ್ಕೆ ಸಲಹೆ

Published 19 ಮೇ 2024, 13:57 IST
Last Updated 19 ಮೇ 2024, 13:57 IST
ಅಕ್ಷರ ಗಾತ್ರ

ಚಿಂತಾಮಣಿ: ಡೆಂಗಿ ಹಾಗೂ ಚಿಕೂನ್ ಗುನ್ಯಾ ಈಡಿಸ್ ಎಂಬ ಸೊಳ್ಳೆಯಿಂದ ಬರುತ್ತದೆ. ಹಗಲು ಹೊತ್ತಿನಲ್ಲಿ ಕಚ್ಚುವ ಸೊಳ್ಳೆಯಿಂದ ಜ್ವರವು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಜ್ವರಪೀಡಿತರು ಕೂಡಲೇ ವೈದ್ಯರಲ್ಲಿಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ರಾಮಚಂದ್ರಾರೆಡ್ಡಿ ತಿಳಿಸಿದರು.

ತೀವ್ರ ಜ್ವರ, ವಿಪರೀತ ತಲೆ ನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು, ವಾಕರಿಕೆ, ವಾಂತಿ ಡೆಂಗಿ ಜ್ವರದ ಲಕ್ಷಣಗಳು. ರಕ್ತ ಪರೀಕ್ಷೆಯಿಂದ ಡೆಂಗಿ ಜ್ವರವನ್ನು ಪತ್ತೆ ಹಚ್ಚಬಹುದು. ಇಂತಹ ಲಕ್ಷಣಗಳು ಕಂಡುಬಂದರೆ ಚಿಕಿತ್ಸೆ ಪಡೆಯಬೇಕು. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರೆಯುತ್ತದೆ ಎಂದು ಅವರು ತಿಳಿಸಿದರು.

ಈ ಜ್ವರವನ್ನು ಹರಡುವ ಸೊಳ್ಳೆಗಳು ಮನೆಯಲ್ಲಿನ ಸ್ವಚ್ಛ ನೀರಿನ ಶೇಖರಣೆಯಲ್ಲಿ ಉತ್ಪತ್ತಿಯಾಗುತ್ತವೆ. ಮನೆಗಳಲ್ಲಿನ ತೊಟ್ಟಿ, ಬ್ಯಾರಲ್, ಡ್ರಮ್ ಗಳಲ್ಲಿನ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಸ್ವಚ್ಛಗೊಳಿಸಬೇಕು. ನಂತರ ಪುನ: ನೀರು ತುಂಬಿಸಿಕೊಳ್ಳಬೇಕು. ಮನೆಗಳಲ್ಲಿನ ನೀರಿನ ಶೇಖರಣೆಗಳನ್ನು ಮುಚ್ಚಿಡಬೇಕು. ಮನೆ, ಶಾಲೆ ಹಾಗೂ ಎಲ್ಲ ಸರ್ಕಾರಿ ಮತ್ತು ಖಾಸಗಿ ಕಚೇರಿ, ಸಂಸ್ಥೆಗಳ ಒಳಾಂಗಣ ಮತ್ತು ಹೊರಾಂಗಣಗಳಲ್ಲಿ ಘನತ್ರಾಜ್ಯ ವಸ್ತುಗಳನ್ನು ವಿಲೇವಾರಿ ಮಾಡಬೇಕು, ಜತೆಗೆ ಘನತ್ರಾಜ್ಯ ಸಂಗ್ರಹಣೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಾರ್ವಜನಿಕರಿಗೆ ಸೂಚಿಸಿದರು.

ಹಗಲು ಹೊತ್ತಿನಲ್ಲಿ ವಿಶ್ರಾಂತಿ ಪಡೆಯುವ ವೃದ್ಧರು, ಮಕ್ಕಳು, ಗರ್ಭಿಣಿಯರು ಸೊಳ್ಳೆಪರದೆ ಉಪಯೋಗಿಸಬೇಕು. ಡೆಂಗಿ, ಚಿಕೂನ್ ಗುನ್ಯಾ ರೋಗಿಗಳು ಸಹ ಸೊಳ್ಳೆ ಪರದೆಯನ್ನು ಬಳಸಬೇಕು. ಹಗಲು ಹೊತ್ತಿನಲ್ಲಿ ಸೊಳ್ಳೆ ಕಚ್ಚದಂತೆ ಮೈತುಂಬ ಬಟ್ಟೆ ಧರಿಸಬೇಕು. ಸೊಳ್ಳೆಪರದೆ, ಸೊಳ್ಳೆಬತ್ತಿ, ಮುಲಾಮು, ದ್ರಾವಣ ಬಳಸಬೇಕು.

ಡೆಂಗಿ ಮತ್ತು ಚಿಕುನ್ ಗುನ್ಯಾ ರೋಗದ ಬಗ್ಗೆ ಸಮೀಕ್ಷೆಗಾಗಿ ಬರುವ ಆರೋಗ್ಯ ಮತ್ತು ಆಶಾ ಕಾರ್ಯಕರ್ತೆಯರಿಗೆ ಸಹಕಾರ ನೀಡಬೇಕು. ಅವರು ನೀಡುವ ಸಲಹೆ, ಸೂಚನೆಗಳನ್ನು ಪಾಲಿಸಬೇಕು ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT