ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್; ಅಪಾಯ ಭತ್ಯೆ ನೀಡಿ

ಅಂಗನವಾಡಿ ಕಾರ್ಯಕರ್ತೆಯರಿಂದ ಬೇಡಿಕೆ ದಿನ; ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ
Last Updated 12 ಜುಲೈ 2021, 15:03 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಅಖಿಲ ಭಾರತ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ಜು.12ರಂದು ದೇಶದಾದ್ಯಂತ ಬೇಡಿಕೆಯ ದಿನವನ್ನಾಗಿ ಆಚರಿಸಲು ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್ ಅವರಿಗೆ ಮನವಿ ಸಲ್ಲಿಸಿದರು.

ಕೋವಿಡ್‌ನಂತಹ ಸಾಂಕ್ರಾಮಿಕ ರೋಗದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಹೋರಾಡುತ್ತಿದ್ದಾರೆ. ಲಾಕ್‌ಡೌನ್ ಸಮಯದಲ್ಲಿ ಹಸಿವು ಮತ್ತು ಅಪೌಷ್ಟಿಕತೆ ವಿರುದ್ಧ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನಿರ್ಣಾಯಕ ರೀತಿಯಲ್ಲಿ ಕೆಲಸ ಮಾಡಿದರು. ಸಮುದಾಯ ಜಾಗೃತಿ, ಸಮೀಕ್ಷೆಗಳು, ವಾರ್ಡ್ ಮಟ್ಟದಲ್ಲಿ ಸಮಿತಿಗಳ ಭಾಗವಾಗಿ ಹೀಗೆ ವಿವಿಧ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಆದ್ದರಿಂದ ಸುರಕ್ಷಾ ಗೇರ್, ಅಪಾಯ ಭತ್ಯೆ ಮತ್ತು ವಿಮಾ ರಕ್ಷಣೆ ಒದಗಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಮತ್ತು ಆಹಾರ ಧಾನ್ಯದ ಅನುದಾನವನ್ನು ಪೋಷಣ್ ಟ್ರಾಕ್ಟರ್‌ ಅಪ್ಲಿಕೇಷನ್‌ನೊಂದಿಗೆ ತಕ್ಷಣವೇ ಜೋಡಿಸಬೇಕು. ವೇತನ ಕಡಿತ ಆದೇಶ ಹಿಂದಕ್ಕೆ ಪಡೆಯಬೇಕು. ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಪ್ರಮಾಣದ ಅಂಗನವಾಡಿ ಕೇಂದ್ರಗಳನ್ನಾಗಿ ಪರಿವರ್ತಿಸಬೇಕು. ಕಾರ್ಯಕರ್ತೆಯರಿಗೆ ಪೂರ್ಣ ಪ್ರಮಾಣದಲ್ಲಿ ಗೌರವಧನ ಪಾವತಿಸಬೇಕು ಎಂದರು.

ಐಸಿಡಿಎಸ್ ಹೊರತುಪಡಿಸಿ ಬೇರೆ ಯಾವುದೇ ಕೆಲಸಕ್ಕೆ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ನಿಯೋಜಿಸಬಾರದು. ವಯಸ್ಸಿನ ಮಿತಿ ಇಲ್ಲದೆ ಬಡ್ತಿ, ಬೇಸಿಗೆ ಮತ್ತು ಚಳಿಗಾಲದ ರಜೆ, ಪಿಂಚಣಿ ನೀಡದೆ ಕೆಲಸದಿಂದ ನಿವೃತ್ತಿಗೊಳಿಸಬಾರದು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಲಕ್ಷ್ಮಿದೇವಮ್ಮ ಮಾತನಾಡಿ, ಶಿಡ್ಲಘಟ್ಟ ತಾಲ್ಲೂಕಿನ ಸಿಪಿಡಿಒ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಅವರನ್ನು ಕೆಲಸಕ್ಕೆ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.

ಮೊಟ್ಟೆ ಹಣವನ್ನು ಸಕಾಲಕ್ಕೆ ಬಿಡುಗಡೆ ಮಾಡಬೇಕು. ಕಾರ್ಯಕರ್ತೆಯರಿಗೆ ಒಂದು ಮೊಟ್ಟೆಗೆ ₹ 5 ನೀಡಲಾಗುತ್ತಿದೆ. ಇದನ್ನು ಹೆಚ್ಚಿಸಬೇಕು. ನಮ್ಮ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಜಿಲ್ಲಾಧಿಕಾರಿ ಅವರು ಜು.17ರಂದು ಸಭೆ ಕರೆದಿದ್ದಾರೆ‘ ಎಂದು ಆಗ್ರಹಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಕಾಯಂಗೊಳಿಸಬೇಕು. ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಜಾರಿಗೊಳಿಸಬೇಕು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ರತ್ನಮ್ಮ, ಮುನಿಕೃಷ್ಣಮ್ಮ, ಸುಜಾತಾ, ಗೀತಾ, ಸೌಭಾಗ್ಯಮ್ಮ, ಸರೋಜ, ಅಶ್ವತ್ಥಮ್ಮ, ಸುಶೀಲಮ್ಮ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT