ಶುಕ್ರವಾರ, ಡಿಸೆಂಬರ್ 4, 2020
25 °C
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಡಳಿತ ಭವನದ ಎದುರು ಅಂಗನವಾಡಿ ನೌಕರರ ಪ್ರತಿಭಟನೆ

ಚಿಕ್ಕಬಳ್ಳಾಪುರ: ಕನಿಷ್ಠ ವೇತನಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಕಾಯಂಗೊಳಿಸಿ ₹21 ಸಾವಿರ ಕನಿಷ್ಠ ವೇತನ, ₹10 ಸಾವಿರ ನಿವೃತ್ತಿ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ನೌಕರರು ಸೋಮವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಜಿ.ಎಂ.ಲಕ್ಷ್ಮೀದೇವಮ್ಮ, ‘ಅಂಗನವಾಡಿ ನೌಕರರಿಗೆ ಸೇವಾ ಜ್ಯೇಷ್ಠತೆ ಆಧಾರದಲ್ಲಿ ತಿಂಗಳಿಗೆ ಕನಿಷ್ಠ ವೇತನ ನೀಡಬೇಕು. ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಮುಂದುವರಿಸಬೇಕು. ನಿವೃತ್ತಿ ಹೊಂದಿದ ನೌಕರರಿಗೆ ತಿಂಗಳಿಗೆ ಕನಿಷ್ಠ ₹10 ಸಾವಿರ ಪಿಂಚಣಿ ನೀಡಬೇಕು’ ಎಂದು ಒತ್ತಾಯಿಸಿದರು.

‘ನೂತನ ಶಿಕ್ಷಣ ನೀತಿಯಿಂದ ಅಂಗನವಾಡಿ ಕೇಂದ್ರಗಳನ್ನು ರಕ್ಷಿಸಬೇಕು. ಅಂಗನವಾಡಿ ಕೇಂದ್ರ ಗಳಲ್ಲಿ ಶಾಲಾ ಪೂರ್ವ ಶಿಕ್ಷಣವನ್ನು ಕಡ್ಡಾಯಗೊಳಿಸಬೇಕು. ಐಸಿಡಿಎಸ್ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸ ಬೇಕು. ಮೇಲ್ವಿಚಾರಕಿಯಾಗಿ ಮುಂಬಡ್ತಿ ಹೊಂದುವ ಹುದ್ದೆಗಳನ್ನು ಅಂಗನವಾಡಿ ನೌಕರರಿಗೆ ಕೊಡಬೇಕು’ ಎಂದು ಹೇಳಿದರು.

‘ಅನುಕಂಪದ ಆಧಾರದ ಕೆಲಸ ನೀಡುವ ಷರತ್ತನ್ನು ನೌಕರರ ಕುಟುಂಬದವರಿಗೆ ಎಂದು ಬದಲಾಯಿಸಬೇಕು. ಖಾಲಿ ಇರುವ ಸಹಾಯಕಿ ಮತ್ತು ಕಾರ್ಯಕರ್ತೆಯರ ಹುದ್ದೆಗಳನ್ನು ಭರ್ತಿ ಮಾಡಬೇಕು. ವಿವಿಧ ಯೋಜನೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಕಾಯಂ ಆಗಿ ನೇಮಕ ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾ ನಿಯಮಾವಳಿ ರಚಿಸಬೇಕು. ಕೇಂದ್ರ ಸರ್ಕಾರ ಕಡಿತ ಮಾಡಿರುವ ಅನುದಾನ ವಾಪಸ್ ನೀಡಬೇಕು’ ಎಂದರು.

‘ಜಿಲ್ಲೆಯ 255 ಕಾರ್ಯಕರ್ತೆಯರು, ಸಹಾಯಕರಿಗೆ ಎನ್‍ಪಿಎಸ್ ಕಾರ್ಡ್ ವಿತರಿಸಬೇಕು. ಶಿಡ್ಲಘಟ್ಟದಲ್ಲಿ ಕಾರ್ಯಕರ್ತೆಯರ ಆಯ್ಕೆಯಲ್ಲಿ ಅಕ್ರಮ ನಡೆದಿರುವ ಶಂಕೆ ಇದೆ. ಈ ಬಗ್ಗೆ ತನಿಖೆ ನಡೆಸಬೇಕು. ಅಂಗನವಾಡಿಗಳಿಗೆ ಅಗತ್ಯವಿರುವ ವಸ್ತುಗಳನ್ನು ಸಕಾಲದಲ್ಲಿ ವಿತರಿಸಬೇಕು. 3 ತಿಂಗಳಿಗೊಮ್ಮೆ ಕುಂದುಕೊರತೆ ಸಭೆ ನಡೆಸಬೇಕು. ಮುಚ್ಚಿರುವ ಕೇಂದ್ರಗಳನ್ನು ಮರು ‌ಆರಂಭಗೊಳಿಸಲು ಸರ್ಕಾರ ಕ್ರಮಕೈಗೊಳ್ಳಬೇಕು’ ಎಂದರು.

ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕೆ. ರತ್ನಮ್ಮ, ಕೆ.ಗೀತಾ, ಪಿ.ಎಂ. ಮುನಿರತ್ನಮ್ಮ, ಅಶ್ವತ್ಥಮ್ಮ, ಸೌಭಾಗ್ಯಮ್ಮ, ಗುಲ್ಜಾರ್, ಸುನಿತಾ, ಪದ್ಮಾವತಿಬಾಯಿ, ಭಾಗ್ಯಮ್ಮ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು