ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಕ್ಕಳ ರಕ್ಷಣೆಗೆ ಕಾನೂನಿನ ಅರಿವು ಅಗತ್ಯ’

Last Updated 8 ಫೆಬ್ರುವರಿ 2020, 10:36 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಸಂಕಷ್ಟದಲ್ಲಿರುವ ಮಕ್ಕಳನ್ನು ಸಂರಕ್ಷಿಸಿ ಪುನರ್ವಸತಿ ಕಲ್ಪಿಸಿಕೊಡುವುದು ಮಕ್ಕಳ ರಕ್ಷಣಾ ಘಟಕದ ಮೂಲ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಮಕ್ಕಳ ರಕ್ಷಣಾ ಘಟಕದ ಕಾನೂನುಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಅಮರನಾರಾಯಣ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣ ಘಟಕ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲೆಯಾದ್ಯಂತ ಪೊಲೀಸ್‌ ಇಲಾಖೆಯ ಮಕ್ಕಳ ಕಲ್ಯಾಣ ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಮಕ್ಕಳ ರಕ್ಷಣೆಯ ಕಾನೂನುಗಳ ಬಗ್ಗೆ ಅರಿವು ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ದೌರ್ಜನ್ಯಕ್ಕೊಳಗಾದ ಮಹಿಳೆ ಮತ್ತು ಹೆಣ್ಣು ಮಕ್ಕಳು ಸಮಾಜದಲ್ಲಿ ತಮ್ಮನ್ನು ತಾವು ಗುರುತಿಸಿಕೊಳ್ಳಲು ಸಾಕಷ್ಟು ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ನೊಂದವರಿಗೆ ಸಾಂತ್ವನ ಹೇಳಿ ಅವರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ತಿಳಿಸಿದರು.

ದೇಶಾದ್ಯಂತ ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯವನ್ನು ತಡೆಯಲು ಪೋಕ್ಸೋ ಕಾಯ್ದೆಯನ್ನು ಜಾರಿ ಮಾಡಿದ್ದು, ಈ ಕಾಯ್ದೆಯು ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುತ್ತದೆ. ನೊಂದಹೆಣ್ಣು ಮಗುವಿಗೆ ಪುನರ್ವಸತಿಯನ್ನು ಕಲ್ಪಿಸಿಕೊಡುತ್ತದೆ. ಇಂತಹ ಕಾನೂನುಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

1 ನೇ ಅಪರ ಜಿಲ್ಲಾ ಸತ್ರನ್ಯಾಯಾಧೀಶ ಎಸ್.ನಟರಾಜ್ ಮಾತನಾಡಿ, ಈ ಕಾರ್ಯಗಾರದಲ್ಲಿ ಮಕ್ಕಳ ಪಾಲನೆ, ಪೋಷಣೆ ಹಾಗೂ ಪುನರ್ವಸತಿ ಕುರಿತು ಚರ್ಚೆ ಮಾಡಿ ಪರಿಹಾರಗಳನ್ನು ಒದಗಿಸಲಾಗುತ್ತದೆ. ಅಲ್ಲದೆ, ಮಕ್ಕಳ ರಕ್ಷಣಾ ಘಟಕವೊಂದೇ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗುವುದಿಲ್ಲ. ಬದಲಾಗಿ ಇತರೆ ಇಲಾಖೆಗಳು ಕೂಡ ಮಕ್ಕಳ ರಕ್ಷಣಾ ಘಟಕಕ್ಕೆ ಸಹಾಯ ಹಸ್ತವನ್ನು ನೀಡಿ ಸಹಕರಿಸಬೇಕು ಎಂದರು.

ಸಂಕಷ್ಟದಲ್ಲಿರುವ ಮಕ್ಕಳ ವಿಚಾರಣೆ ಹಂತದಲ್ಲಿ ಮಗುವಿನ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ವಿಚಾರಣೆ ನಡೆಸಬೇಕು. ಮಕ್ಕಳ ರಕ್ಷಣೆಗೆಂದೇ ಇರುವ ಪೋಕ್ಸೋ ಹಾಗೂ ಜೆಜೆ ಕಾಯ್ದೆಗಳನ್ನು ದುರುಪಯೋಗ ಮಾಡಬಾರದು ಎಂದರು.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಕೆ.ಎನ್.ರೂಪ ಮಾತನಾಡಿ, ಚಾರ್ಜ್‍ಶೀಟ್ ಬರೆಯುವಾಗ ಹಾಗೂ ತನಿಖೆ ಮಾಡುವಾಗುವ ಲೋಪದೋಷಗಳು ಆಗದಂತೆ ನೊಂದವರಿಗೆ ನ್ಯಾಯ ಒದಗಿಸಲು ಕಾಯ್ದೆಯಲ್ಲಿರುವ ಕಾನೂನುಗಳನ್ನು ಯಥಾವತ್ತಾಗಿ ಪಾಲಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಬಿ.ಫೌಜಿಯಾ ತರನ್ನುಮ್ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಣ್ಣು ಮಕ್ಕಳ ರಕ್ಷಣೆ ಮತ್ತು ಸಮಸ್ಯೆಗಳನ್ನು ಆಲಿಸಲು ಮಕ್ಕಳ ಗ್ರಾಮ ಸಭೆಗಳನ್ನು ಆಯೋಜಿಸಿದ್ದು, ಇಲ್ಲಿಯವರೆಗೂ 112 ಗ್ರಾಮಗಳಲ್ಲಿ ಗ್ರಾಮ ಸಭೆಯನ್ನು ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪನೆ ಮಾಡುವುದಕ್ಕೆ ಕ್ರಮ ವಹಿಸಲಾಗುತ್ತದೆ ಎಂದರು.

ಕಾರ್ಯಾಗಾರದಲ್ಲಿ 1ನೇ ಅಪರ ಜಿಲ್ಲಾ ಸತ್ರ ನ್ಯಾಯಾಧೀಶೆ ಬಿ.ಸಿ.ಭಾನುಮತಿ, ಹಿರಿಯ ಸಿವಿಲ್ ನ್ಯಾಯಾಧಿಶ ಎಚ್.ದೇವರಾಜು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಿ.ಕೆ.ಲಕ್ಷ್ಮೀದೇವಮ್ಮ, ಮಹಿಳಾ ಮತ್ತು ಮಕ್ಕಳಾ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಬಿ.ಎಂ.ಯೋಗೀಶ್ ಗೌಡ, ಜಿಲ್ಲಾ ಶಸ್ತ್ರ ಚಿಕಿತ್ಸ ತಜ್ಞರಾದ ಡಾ.ಅನಿಲ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ ಸೇರಿದಂತೆ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT