ಬಾಗೇಪಲ್ಲಿ: ಪಟ್ಟಣದ ಹೊರವಲಯದ ಟಿ.ಬಿ.ಕ್ರಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ನಿರ್ಮಾಣದಿಂದ ರಸ್ತೆಗಳು ಗುಂಡಿ ಬಿದ್ದಿದ್ದು, ಆ ಗುಂಡಿಗಳಲ್ಲಿ ಮಳೆ ಹಾಗೂ ಚರಂಡಿ ನೀರು ತುಂಬಿ ವಾಹನ ಸವಾರರು ಪರದಾಡುವಂತಾಗಿದೆ.
ರಾಷ್ಟ್ರೀಯ ಹೆದ್ದಾರಿ ರಸ್ತೆ 44 ಬೆಂಗಳೂರು ಹಾಗೂ ಆಂಧ್ರಪ್ರದೇಶದ ಕಡೆಯಿಂದ ಪಟ್ಟಣಕ್ಕೆ ಸಂಪರ್ಕಿಸುವ ರಸ್ತೆ ಇದಾಗಿದ್ದು, ಈ ರಸ್ತೆಯಲ್ಲಿ ಹೆಚ್ಚು ಗುಂಡಿಗಳು ಬಿದ್ದಿವೆ. ಇದರಿಂದ ರಸ್ತೆಗಳಲ್ಲಿ ನೀರು ಸರಾಗವಾಗಿ ಹರಿಯದೆ ಗುಂಡಿಗಳಲ್ಲಿ ತುಂಬಿ ರಸ್ತೆ ಕೆಸರುಗದ್ದೆಯಂತಾಗಿ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಈ ರಸ್ತೆ ಪಕ್ಕದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಇದ್ದು, ಮಾರುಕಟ್ಟೆಗೆ ದೂರದ ಪ್ರದೇಶಗಳಿಂದ ಲಾರಿ, ಟೆಂಪೋ, ಕ್ಯಾಂಟರ್ ಮುಂತಾದ ವಾಹನಗಳು ತರಕಾರಿ ಸಾಗಿಸಲು ಸಂಚರಿಸುತ್ತವೆ. ಈ ರಸ್ತೆಯಲ್ಲಿ ಸಂಚರಿಸಲು ಆಗದೆ ಕೆಲವರು ಬಿದ್ದು ಗಾಯ ಮಾಡಿಕೊಂಡಿದ್ದಾರೆ.
ಇಲ್ಲಿನ ನೀರು ಸರಾಗವಾಗಿ ಹರಿಯಬೇಕೆಂದು ಹಲವು ಬಾರಿ ಮನವಿ ಮಾಡಿದ್ದು, ಹಿಂದಿನ ಜಿಲ್ಲಾಧಿಕಾರಿ ಆರ್.ಲತಾ ಹಾಗೂ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ಸ್ಥಳ ಪರಿಶೀಲನೆ ಮಾಡಿದ್ದರು. ಆದರೆ, ಇದುವರಿಗೂ ಯಾವುದೇ ಗುಂಡಿ ಮುಚ್ಚಿಲ್ಲ. ನೀರು ಸರಾಗವಾಗಿ ಹರಿಯುವಂತಾಗಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ರಸ್ತೆ ಪಕ್ಕದಲ್ಲಿ ಚರಂಡಿ ನಿರ್ಮಾಣ ಮಾಡಬೇಕೆಂದು ನಿಯಮವಿದೆ. ಆದರೆ, ಲೋಕೋಪಯೋಗಿ ಇಲಾಖೆಯವರು ಈ ನಿಯಮವನ್ನು ಗಾಳಿಗೆ ತೂರಿದ್ದು, ರಸ್ತೆಯಲ್ಲಿ ಚರಂಡಿ ನಿರ್ಮಾಣ ಮಾಡದ ಕಾರಣ ಗುಂಡಿಗಳಲ್ಲಿ ನೀರು ನಿಂತು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಹಾಗಾಗಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು ಎಂದು ಟಿ.ಬಿ ಕ್ರಾಸ್ ನಿವಾಸಿ ಇಮ್ರಾನ್ ಒತ್ತಾಯಿಸಿದ್ದಾರೆ.
ಪಟ್ಟಣದ ಟಿ.ಬಿ.ಕ್ರಾಸ್ ರಸ್ತೆಯ ಗುಂಡಿಗಳಲ್ಲಿ ನೀರು ಸಂಗ್ರಹವಾಗಿದ್ದು ಸಂಚಾರಕ್ಕೆ ತೊಂದರೆ ಆಗಿದೆ ಎಂದು ಸಾರ್ವಜನಿಕರು ದೂರು ನೀಡಿದ್ದಾರೆ. ಕೆಲವೇ ದಿನಗಳಲ್ಲಿ ರಸ್ತೆಯನ್ನು ಸಿದ್ಧಪಡಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡುತ್ತೇವೆ. ಪ್ರದೀಪ್ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರಪ್ರದೀಪ್ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.