ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ಲ್ಯಾಪ್‌ಟ್ಯಾಪ್ ಶಿಕ್ಷಣಕ್ಕೆ ಸದ್ಭಳಕೆಯಾಗಲಿ: ಡಾ.ಕೆ.ಸುಧಾಕರ್

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜ್ಞಾನ ದೀಪ್ತಿ’ ಯೋಜನೆ ಅಡಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಣೆ
Last Updated 29 ಫೆಬ್ರುವರಿ 2020, 14:36 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡರೆ ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಲು ಸಾಧ್ಯವಿದೆ. ಸರ್ಕಾರ ನೀಡಿದ ಉಚಿತ ಲ್ಯಾಪ್‌ಟಾಪ್‌ಗಳನ್ನು ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಂಡು ವಿದ್ಯಾರ್ಜನೆ ಮಾಡಬೇಕು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ ನಗರದ ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ‘ಜ್ಞಾನ ದೀಪ್ತಿ’ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಆಧುನಿಕ ಯುಗದಲ್ಲಿ ತಂತ್ರಜ್ಞಾನದ ಸದುಪಯೋಗ ಹಾಗೂ ದುರುಪಯೋಗ ಎರಡು ಆಗುತ್ತದೆ. ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆಗಳ ಮೂಲಕ ಇದನ್ನು ಬಳಕೆ ಮಾಡಬೇಕು. ಇಂದು ಅಗತ್ಯಕ್ಕಿಂತ ಅಧಿಕ ಪಾಂಡಿತ್ಯ ಪಡೆಯಲು ತಂತ್ರಜ್ಞಾನದ ಸಲಕರಣೆಗಳು ಅವಶ್ಯಕ. ಅದಕ್ಕಾಗಿ ಸರ್ಕಾರ ಉಚಿತವಾಗಿ ಲ್ಯಾಪ್‌ಟಾಪ್‌ಗಳನ್ನು ವಿತರಿಸುತ್ತಿದೆ. ವಿದ್ಯಾರ್ಥಿಗಳು ಈ ಎಲ್ಲವುಗಳನ್ನು ಸದುದ್ದೇಶಕ್ಕೆ ಬಳಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಬೇಕು’ ಎಂದು ತಿಳಿಸಿದರು.

‘ಸಮಾಜವನ್ನು ಅಭಿವೃದ್ಧಿಯತ್ತ ಸಾಗುವಲ್ಲಿ ಹೆಣ್ಣು ಮಕ್ಕಳ ಪಾತ್ರ ಅಪಾರ. ಅವರ ಅಭಿವೃದ್ಧಿಗಾಗಿ ಶ್ರಮಿಸಿದರೇ ಇಡೀ ಸಮಾಜವು ಸುಸ್ಥಿರವಾಗಿ ಬೆಳವಣಿಗೆಯಾಗುತ್ತದೆ. ರಾಷ್ಟ್ರಪಿತ ಮಹಾತ್ಮಗಾಂಧಿ ಹಾಗೂ ಬಿ.ಆರ್.ಅಂಬೇಡ್ಕರ್ ಅವರು ಕೂಡ ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿದ್ದರು. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯಾರು ಶಿಕ್ಷಣದಿಂದ ವಂಚಿತರಾಗಬಾರದೆಂದು ಸರ್ವ ಶಿಕ್ಷಣ ಅಭಿಯಾನವನ್ನು ಆಯೋಜಿಸಿದೆ’ ಎಂದರು.

‘ವಿದ್ಯಾರ್ಥಿಗಳು ಕೂಡ ಶ್ರದ್ಧೆಯಿಂದ ಓದುವ ಅಭ್ಯಾಸವನ್ನು ಕರಗತ ಮಾಡಿಕೊಳ್ಳಬೇಕು. ಮುಂದಿನ ವರ್ಷದೊಳಗೆ ದ್ವಿತೀಯ ಹಾಗೂ ತೃತೀಯ ಹಂತದ ಎಲ್ಲಾ ಪದವಿ ವಿದ್ಯಾರ್ಥಿಗಳಿಗು ಕೂಡ ಉಚಿತವಾಗಿ ಲ್ಯಾಪ್‌ಟಾಪ್‌ ವಿತರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇನೆ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ 238 ವಿದ್ಯಾರ್ಥಿಗಳಿಗೆ ಹಾಗೂ ಪ್ರಥಮ ದರ್ಜೆ ಕಾಲೇಜಿನಲ್ಲಿ 439 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಯಿತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ, ವೆಂಕಟೇಶ್ ರಂಗನಾಥ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ. ರಾಮಸ್ವಾಮಿ, ನಗರಸಭೆ ಸದಸ್ಯರಾದ ಗಜೇಂದ್ರ, ಭಾರತಮ್ಮ, ಮುನಿರಾಜು, ಮುಖಂಡರಾದ ಮುನಿಕೃಷ್ಣ, ಕೇಶವಕುಮಾರ್, ಪದ್ಮಮ್ಮ, ಮರಳಕುಂಟೆ ಕೃಷ್ಣಮೂರ್ತಿ, ಪ್ರಸಾದ್, ದ್ಯಾವಣ್ಣ, ಪ್ರಾಂಶುಪಾಲರಾದ ಚಂದ್ರಯ್ಯ, ನಾಗರಾಜ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT