ಬುಧವಾರ, ಜುಲೈ 6, 2022
22 °C
ಆತ್ಮ ರಕ್ಷಣಾ ಕಲೆಯ ಕೌಶಲ ತರಬೇತಿಗೆ ಸಚಿವ ಎಂ.ಟಿ.ಬಿ. ನಾಗರಾಜ್‌ ಚಾಲನೆ

ಹೆಣ್ಣು ಮಕ್ಕಳಿಗೆ ಓಬವ್ವ ಸ್ಫೂರ್ತಿಯಾಗಲಿ: ಎಂ.ಟಿ.ಬಿ. ನಾಗರಾಜ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದ ನಂದಿ ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ. ನಾಗರಾಜ್‌ ‘ಓಬವ್ವ ಆತ್ಮರಕ್ಷಣಾ ಕಲೆಯ ಕೌಶಲಗಳ ತರಬೇತಿ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ನಂತರ ಮಾತನಾಡಿದ ಅವರು, ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಕಿರುಕುಳ ಪ್ರಕರಣಗಳನ್ನು ಶೂನ್ಯಗೊಳಿಸುವ ನಿಟ್ಟಿನಲ್ಲಿ ಹೆಣ್ಣು ಮಕ್ಕಳ ಆತ್ಮರಕ್ಷಣೆಗಾಗಿ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಈ ತರಬೇತಿಯನ್ನು ಜಾರಿಗೊಳಿಸಿದೆ ಎಂದರು.

ವೀರ ಮಹಿಳೆ ಒನಕೆ ಓಬವ್ವ ಅವರು ತನ್ನ ಶಕ್ತಿ, ಸಾಮರ್ಥ್ಯ ಹಾಗೂ ಪರಾಕ್ರಮದಿಂದ ಚಿತ್ರದುರ್ಗ ಕೋಟೆ ಆಕ್ರಮಿಸಲು ಬಂದ ಹೈದರಾಲಿ ಸೈನ್ಯದ ನೂರಾರು ಸೈನಿಕರನ್ನು ಸದೆಬಡಿದರು. ಮದಕರಿ ನಾಯಕನ ಕೋಟೆಯನ್ನು ರಕ್ಷಿಸಿದರು ಎಂದು ಸ್ಮರಿಸಿದರು. 

ಇಂತಹ ಮಹಾನ್ ಮಹಿಳೆಯ ಹೆಸರಿನಲ್ಲಿ ಹೆಣ್ಣು ಮಕ್ಕಳ ರಕ್ಷಣಾ ಕೌಶಲ ಕಲೆಗಳ ತರಬೇತಿ ನೀಡುತ್ತಿರುವುದು ಹೆಮ್ಮೆಯ ಸಂಗತಿ. ವಿದ್ಯಾರ್ಥಿನಿಯರು ಓಬವ್ವ ಅವರನ್ನು ಸ್ಫೂರ್ತಿಯಾಗಿಸಿಕೊಂಡು ಮನೋಸ್ಥೈರ್ಯ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. 

ಸಮಾಜದಲ್ಲಿ ಹೆಣ್ಣು ಮಕ್ಕಳು ಒಂದಲ್ಲಾ ಒಂದು ರೀತಿ ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯ ಹಾಗೂ ವಸತಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಮೂರು ತಿಂಗಳು ಕರಾಟೆ ತರಬೇತಿಯನ್ನು ಸರ್ಕಾರದಿಂದ ನೀಡಲಾಗಿದೆ ಎಂದರು.

ತಮ್ಮನ್ನು ತಾವು ಸ್ವಯಂ ರಕ್ಷಣೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ಓಬವ್ವ ಆತ್ಮರಕ್ಷಣಾ ಕಲೆಯ ಕೌಶಲಗಳ ತರಬೇತಿ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ವಾರದಲ್ಲಿ ಮೂರು ದಿನಗಳ ಕಾಲ ಕರಾಟೆ ತರಬೇತಿ ನೀಡಲಾಗುತ್ತದೆ. ತರಬೇತಿ ಪಡೆದ ವಿದ್ಯಾರ್ಥಿನಿಯರು ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳುವ ಮೂಲಕ ಸಮಾಜದಲ್ಲಿ ಜವಾಬ್ದಾರಿಯುತ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರಾಟೆ ತರಬೇತುದಾರ ಗೋಪಾಲಕೃಷ್ಣ ಸಾರಥ್ಯದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಕರಾಟೆ ಪ್ರದರ್ಶಿಸಿದರು. 

ಜಿಲ್ಲಾಧಿಕಾರಿ ಆರ್. ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ. ಶಿವಶಂಕರ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಪ್ರೊ.ಕೋಡಿರಂಗಪ್ಪ, ನಗರಸಭೆ ಅಧ್ಯಕ್ಷ ಆನಂದರೆಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶಿವಕುಮಾರ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಅಶೋಕ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಯರಾಮ್ ರೆಡ್ಡಿ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು