ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ಸಮಸ್ಯೆಗೆ ಸ್ಪಂದಿಸದ ಬಿಜೆಪಿ: ಬಸವರಾಜ ಹೊರಟ್ಟಿ ಆರೋಪ

ಆಡಳಿತ ಪಕ್ಷದ ವಿರುದ್ಧ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಆರೋಪ
Last Updated 26 ಅಕ್ಟೋಬರ್ 2020, 15:14 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಶಿಕ್ಷಕರ ಸಮಸ್ಯೆ ಪರಿಹರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸಮಸ್ಯೆ ಪರಿಹಾರಕ್ಕೆ ಶಿಕ್ಷಕರು ಹಲವು ಬಾರಿ ಮನವಿ ಸಲ್ಲಿಸಿದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಬಿಜೆಪಿ, ಕಾಂಗ್ರೆಸ್‍ ದುರಾಡಳಿತದಿಂದ ಬೇಸತ್ತಿರುವ ಮತದಾರರು ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಲಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಪದವೀಧರರ ಬೆಂಬಲ ಬಿಜೆಪಿಗಿದೆ, ಕಾಂಗ್ರೆಸ್‍ಗಿದೆ ಎಂಬುದು ಹಿಂದಿನ ಕಾಲದ ಮಾತಾಗಿದೆ. ಎರಡೂ ಪಕ್ಷದವರು ಶಿಕ್ಷಣ ಇಲಾಖೆಯ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸುವಲ್ಲಿ ವಿಫಲವಾಗಿದ್ದಾರೆ. ಬಿಜೆಪಿ ಸರ್ಕಾರದ ಬೇಜವಾಬ್ದಾರಿಯಿಂದ ಖಾಸಗಿ ಶಾಲಾ ಶಿಕ್ಷಕರು ಬೀದಿ ಪಾಲಾಗಿದ್ದಾರೆ’ ಎಂದು ಆರೋಪಿಸಿದರು.

‘ಬಿಜೆಪಿಯಲ್ಲಿ ಒಳಗಿನವರು, ಹೊರಗಿನವರ ನಡುವೆ ಆಂತರಿಕ ಕಚ್ಚಾಟ ಆರಂಭವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಿಸಲು ಬಿಜೆಪಿ ಕೇಂದ್ರ ನಾಯಕರಿಗೆ ಒಲವಿದೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ ಪರೋಕ್ಷವಾಗಿ ಅವರ ವರಿಷ್ಠರ ನಿರ್ಧಾರ ಹೇಳಿದ್ದಾರೆ. ಬಿಜೆಪಿ ವರಿಷ್ಠರಿಗೆ ಧೈರ್ಯವಿದ್ದರೆ ಯತ್ನಾಳ ಅವರ ವಿರುದ್ಧ ಕ್ರಮ ಜರುಗಿಸಲಿ’ ಎಂದು ಸವಾಲು ಹಾಕಿದರು.

‘ಬಿಜೆಪಿಯಲ್ಲಿ ಸ್ವಲ್ಪವೂ ಶಿಸ್ತಿಲ್ಲ. ಬಿಜೆಪಿಯ ಯಾವುದೇ ನಾಯಕರಿಗೆ ಯತ್ನಾಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ಧೈರ್ಯವಿಲ್ಲ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ಬಿಜೆಪಿ ಸರ್ಕಾರವಲ್ಲ. ಬದಲಿಗೆ ಜೆಸಿಬಿ ಸರ್ಕಾರ. ಇದೊಂದು ಪರ್ಸೆಂಟೇಜ್ ಸರ್ಕಾರ. ಸಚಿವರ ನಡುವೆ ಹೊಂದಾಣಿಕೆಯಿಲ್ಲ. ಇದರಿಂದ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ. ಸರ್ಕಾರ ಜನರ ಹಿತ ಕಡೆಗಣಿಸಿ ದುರಾಡಳಿತ ನಡೆಸುತ್ತಿದೆ’ ಎಂದು ಟೀಕಿಸಿದರು.

‘ಇನ್ನೊಬ್ಬರಿಗೆ ಮಾದರಿಯಾಗಿರುವ ಶಿಕ್ಷಕರು, ಪದವೀಧರರು ಯಾವುದೇ ಆಮಿಷಗಳಿಗೆ ಒಳಗಾಗದೇ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವ ಅರ್ಹ ಅಭ್ಯರ್ಥಿಗೆ ಮತವನ್ನು ನೀಡಬೇಕಿದೆ. ಸಮಸ್ಯೆ ಬಗೆಹರಿಸಲು ಪ್ರಾಮಾಣಿಕವಾಗಿ ಶ್ರಮಿಸಿದ ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ತೂಪಲ್ಲಿ ಅವರನ್ನು ಈ ಚುನಾವಣೆಯಲ್ಲಿ ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು. .

ಅಭ್ಯರ್ಥಿ ಆರ್.ಚೌಡರೆಡ್ಡಿ ತೂಪಲ್ಲಿ ಮಾತನಾಡಿ, ‘ಶಿಕ್ಷಕರು, ಪದವೀಧರರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕಳೆದ ಆರು ವರ್ಷಗಳಲ್ಲಿ ವಿಧಾನ ಪರಿಷತ್‌ನಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದೇನೆ. ಮತ್ತೊಮ್ಮೆ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು’ ಎಂದು ಹೇಳಿದರು.

ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಮುನೇಗೌಡ, ತಾಲ್ಲುಕ ಘಟಕದ ಅಧ್ಯಕ್ಷ ಮುನಿರಾಜು, ನಗರಸಭೆ ಸದಸ್ಯೆ ವೀಣಾ, ಮಾಜಿ ಸದಸ್ಯ ಕಿಸಾನ್‍ ಕೃಷ್ಣಪ್ಪ, ರವಿಕುಮಾರ್, ಬಂಡ್ಲು ಶ್ರೀನಿವಾಸ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT