ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಣಾಮಕಾರಿ ಅನುಷ್ಠಾನ: ಅಧಿಕಾರಿಗಳಿಗೆ ಸೂಚನೆ

ಆರೋಗ್ಯ ಕರ್ನಾಟಕ ಆರೋಗ್ಯ ಯೋಜನೆ ತರಬೇತಿ
Last Updated 13 ಜೂನ್ 2018, 10:53 IST
ಅಕ್ಷರ ಗಾತ್ರ

ಯಾದಗಿರಿ: ‘ಎಲ್ಲಾ ಸಾಮಾಜಿಕ ಆರೋಗ್ಯ ವಿಮಾ ಯೋಜನೆಗಳನ್ನು ಒಂದೇ ಆರೋಗ್ಯ ಭರವಸೆಯ ಯೋಜನೆಯಡಿ ವಿಲೀನಗೊಳಿಸಿ ಜಾರಿಗೆ ತಂದಿರುವ ಆರೋಗ್ಯ ಕರ್ನಾಟಕ ಯೋಜನೆಯನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು’ ಎಂದು ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್‌ಎಂ) ರಾಜ್ಯ ನಿರ್ದೇಶಕ ಡಾ.ರತನ್ ಕೇಲಕರ್ ಸೂಚಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಿದ್ದ ಆರೋಗ್ಯ ಕರ್ನಾಟಕ ಯೋಜನೆ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಚಾಲ್ತಿಯಲ್ಲಿರುವ ಯಶಸ್ವಿನಿ, ವಾಜಪೇಯಿ ಆರೋಗ್ಯಶ್ರೀ, ರಾಜೀವ್ ಆರೋಗ್ಯ ಭಾಗ್ಯ, ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆ, ಮುಖ್ಯಮಂತ್ರಿ ಸಾಂತ್ವನ ಹರೀಶ್ ಯೋಜನೆ, ಇಂದಿರಾ ಸುರಕ್ಷಾ ಯೋಜನೆಗಳನ್ನು ಆರೋಗ್ಯ ಕರ್ನಾಟಕ ಯೋಜನೆಗೆ ವಿಲೀನಗೊಳಿಸಲಾಗಿದೆ’ ಎಂದು ತಿಳಿಸಿದರು.

‘ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ನಿರ್ವಹಿಸಲಾಗುವ 10 ಪ್ರಮುಖ ಆಸ್ಪತ್ರೆಗಳಲ್ಲಿ ಈಗಾಗಲೇ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಜೂನ್ 30 ರೊಳಗೆ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಜಾರಿಗೊಳಿಸಲಾಗುವುದು. ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಸೆಪ್ಟೆಂಬರ್, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಕ್ಟೋಬರ್, ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಡಿಸೆಂಬರ್ ಅಂತ್ಯದೊಳಗೆ ಅನುಷ್ಠಾನಗೊಳಿಸಲಾಗುವುದು’ ಎಂದು ವಿವರಿಸಿದರು.

‘ನೀತಿ ಆಯೋಗವು ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಸೇರಿದಂತೆ ವಿವಿಧ ಮಾನದಂಡಗಳನ್ನು ಇಟ್ಟುಕೊಂಡು ದೇಶದ ಹಿಂದುಳಿದ 115 ಜಿಲ್ಲೆಗಳನ್ನು ಮಹತ್ವಾಕಾಂಕ್ಷೆ ಜಿಲ್ಲೆಗಳೆಂದು ಗುರುತಿಸಿದೆ. ಅವುಗಳಲ್ಲಿ ರಾಜ್ಯದ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳು ಆಯ್ಕೆಯಾಗಿವೆ. ಸಾರ್ವಜನಿಕರ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಅವಶ್ಯವಿರುವ ಸೌಲಭ್ಯಗಳು ಬೇಕಾದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಪಡೆದುಕೊಳ್ಳಬೇಕು’ ಎಂದು ಸೂಚಿಸಿದರು.

‘ಗ್ರಾಮ ಸ್ವರಾಜ್ ಅಭಿಯಾನದಡಿ ಹಮ್ಮಿಕೊಳ್ಳುವ ಲಸಿಕಾ ಮತ್ತು ಇನ್ನಿತರ ಕಾರ್ಯಕ್ರಮಗಳನ್ನು ಜನರಿಗೆ ಪ್ರಾಮಾಣಿಕವಾಗಿ ತಲುಪಿಸಬೇಕು. ಸರ್ಕಾರಕ್ಕೆ ಕೇವಲ ಅಂಕಿ-ಸಂಖ್ಯೆ ಒದಗಿಸುವ ಕೆಲಸ ಮಾಡಿದರೆ ಯಾವುದೇ ಯೋಜನೆ ಯಶಸ್ಸು ಕಾಣುವುದಿಲ್ಲ. ಜತೆಗೆ ಜನರ ಆರೋಗ್ಯದ ಮಟ್ಟವೂ ವೃದ್ಧಿಸುವುದಿಲ್ಲ. ಆದ್ದರಿಂದ ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಇಚ್ಛಾಶಕ್ತಿಯಿಂದ ಕಾರ್ಯ ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.

‘ಖಾಸಗಿ ಆಸ್ಪತ್ರೆಗಳ ವೈದ್ಯರು ಆರೋಗ್ಯ ಕರ್ನಾಟಕ ಯೋಜನೆಯಡಿ ಸಾರ್ವಜನಿಕರಿಗೆ ಸೇವೆ ನೀಡಲು ಅವಕಾಶ ಇದೆ. ಈ ಹೊಸ ಯೋಜನೆಯ ಬಗ್ಗೆ ತಿಳಿದುಕೊಂಡು ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಸರ್ಕಾರದೊಂದಿಗೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.

ಈ ಮೊದಲು ಸುರಪುರ, ಶಹಾಪುರ ತಾಲ್ಲೂಕು ಆಸ್ಪತ್ರೆಗಳು ಹಾಗೂ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿರುವ ಖಾಲಿ ಹುದ್ದೆಗಳು, ಪ್ರತಿದಿನ ಆಸ್ಪತ್ರೆಗೆ ಭೇಟಿ ನೀಡುವ ಹೊರ ಮತ್ತು ಒಳರೋಗಿಗಳು, ಸಾರ್ವಜನಿಕರಿಗೆ ಒದಗಿಸುತ್ತಿರುವ ಸೌಲಭ್ಯಗಳ ಸಂಪೂರ್ಣ ಮಾಹಿತಿ ಪಡೆದುಕೊಂಡರು.

ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಸಂಜೀವ್‌ಕುಮಾರ್ ರಾಯಚೂರಕರ್ ಮಾತನಾಡಿ,‘ಜಿಲ್ಲಾಸ್ಪತ್ರೆಗೆ ಪ್ರತಿದಿನ 300ರಿಂದ 500 ಹೊರರೋಗಿಗಳು ಭೇಟಿ ನೀಡುತ್ತಾರೆ. 60ರಿಂದ 80 ಒಳರೋಗಿಗಳು ಆಸ್ಪತ್ರೆಯಲ್ಲಿ ದಾಖಲಾಗುತ್ತಾರೆ’ ಎಂದು ಸಭೆಯ ಗಮನಕ್ಕೆ ತಂದರು.

ರಾಷ್ಟ್ರೀಯ ಆರೋಗ್ಯ ಮಿಷನ್ ಜಿಲ್ಲಾ ನೋಡಲ್ ಅಧಿಕಾರಿ ಡಾ.ಶ್ರೀಕಾಂತ ಬಾಸೂರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಭಗವಂತ ಅನವಾರ ಇದ್ದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಗುರುರಾಜ ಹಿರೇಗೌಡ್ರು, ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಲಕ್ಷ್ಮೀಕಾಂತ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ವಿವೇಕಾನಂದ ಟೇಂಗೆ, ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಬಿ.ಪಾಟೀಲ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಂಕರ ಬಿರಾದಾರ, ಆರೋಗ್ಯ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT