ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸ ವಿಂಗಡಣೆ ಘಟಕಗಳನ್ನು ನಿರ್ಮಿಸಿ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಡಾ.ಕೆ.ಸುಧಾಕರ್ ಸೂಚನೆ
Last Updated 20 ಸೆಪ್ಟೆಂಬರ್ 2019, 5:43 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ನಗರ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಂಗಡಣೆ ಘಟಕಗಳನ್ನು ಕಡ್ಡಾಯವಾಗಿ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಡಾ.ಕೆ.ಸುಧಾಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.


ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.


‘ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಪಣತೊಡಲಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ವಾರ್ಷಿಕವಾಗಿ ಉತ್ಪಾದನೆಯಾಗುವ 50 ಸಾವಿರ ಟನ್ ತ್ಯಾಜ್ಯವನ್ನು ಮೂಲದಲ್ಲೇ ಹಸಿ ಮತ್ತು ಒಣ ಕಸವಾಗಿ ವಿಂಗಡಿಸುವ ಕೆಲಸ ಮಾಡಬೇಕಿದೆ. ತ್ಯಾಜ್ಯವನ್ನು 35 ರೀತಿಯಲ್ಲಿ ವಿಂಗಡಿಸಿ ಸಮರ್ಪಕವಾಗಿ ವಿಲೇವಾರಿ ಮಾಡಲು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯಂತ್ರೋಪಕರಣಗಳನ್ನು ಅಳವಡಿಸಬೇಕು’ ಎಂದು ಹೇಳಿದರು.


‘ಎಲ್ಲಾ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕಸ ವಿಂಗಡಣೆ ಘಟಕಗಳನ್ನು ಶೀಘ್ರವಾಗಿ ಸ್ಥಾಪಿಸಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಇದರಿಂದ ರೈತರಿಗೆ ಉತ್ತಮ ರೀತಿಯ ಸಾವಯವ ಗೊಬ್ಬರವನ್ನು ಕೂಡ ನೀಡಬಹುದು. ಎಲ್ಲೆಡೆ ಸ್ವಚ್ಛತೆಯನ್ನು ಕಾಪಾಡಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹೆಚ್ಚು ಒತ್ತು ನೀಡಬೇಕು’ ಎಂದು ತಿಳಿಸಿದರು.


‘ಪರಿಸರವನ್ನು ಅತ್ಯಂತ ಗಂಭೀರವಾಗಿ, ಪ್ರೀತಿಯಿಂದ ಸಂರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ಪರಿಸರ ವೈಪರೀತ್ಯಗಳನ್ನು ಸರಿಪಡಿಸಲಿಕ್ಕೆ ಪರಿಸರ ಮತ್ತು ಜಲ ಮೂಲಗಳ ಸಂರಕ್ಷಣೆಗೆ ವೈಜ್ಞಾನಿಕವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಿಲ್ಲೆಯ ಸುತ್ತಮುತ್ತ ಇರುವ ಕಲ್ಯಾಣಿಗಳು, ಕೆರೆಗಳ ಸಂರಕ್ಷಣೆ ಮಾಡಬೇಕು. ಕಸ ವಿಂಗಡಣೆ ಕುರಿತ ಕಾರ್ಯಕ್ರಮಗಳನ್ನು ಆಯೋಜಿಸಿ ಜನರಿಗೆ ಹೆಚ್ಚಿನ ರೀತಿಯ ಅರಿವು ಮೂಡಿಸಬೇಕು’ ಎಂದರು.


‘ಬರ ಪೀಡಿತವಾಗುತ್ತಿರುವ ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಗೆ ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಬೇಕು. ನಗರ ಪ್ರದೇಶಗಳಲ್ಲಿ ಕೊರೆದಿರುವ ಸಾರ್ವಜನಿಕ ಕೊಳವೆ ಬಾವಿಗಳಿಗೆ ಕಡ್ಡಾಯವಾಗಿ ಇಂಗು ಗುಂಡಿಗಳ ನಿರ್ಮಾಣ ಮಾಡಬೇಕು. ಮಳೆ ನೀರು ಸಂಗ್ರಹಕ್ಕೆ ಒತ್ತು ನೀಡಬೇಕು. ಕೆರೆ, ಕಲ್ಯಾಣಿಗಳನ್ನು ಪುನಶ್ಚೇತನಗೊಳಿಸಿ ಬೇಲಿ ಹಾಕಿ ರಕ್ಷಿಸಬೇಕು’ ಎಂದು ಸೂಚನೆ ನೀಡಿದರು.


ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಫೌಜಿಯಾ ತರನ್ನುಮ್, ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ಉಪ ವಿಭಾಗಾಧಿಕಾರಿ ರಘುನಂದನ್, ನಗರ ಯೋಜನಾ ಕೋಶದ ಯೋಜನಾ ನಿರ್ದೇಶಕಿ ರೇಣುಕಾ, ಜಿಲ್ಲೆಯ ಪರಿಸರ ಅಧಿಕಾರಿ ಮಧುಸೂದನ್, ಸಹಾಯಕ ಅಧಿಕಾರಿ ವಿಜಯಾ ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT