ಶುಕ್ರವಾರ, ಜೂನ್ 5, 2020
27 °C
ಜಿಲ್ಲೆಯಲ್ಲಿ ನಿಯಂತ್ರಣಕ್ಕೆ ಬರುತ್ತಿರುವ ಕೊರೊನಾ ವೈರಸ್‌ ಸೋಂಕು ಪ್ರಕರಣಗಳು

ಒಳ್ಳೆ ಸುದ್ದಿ: ಚಿಕ್ಕಬಳ್ಳಾಪುರದಲ್ಲಿ ಕೋವಿಡ್‌ನಿಂದ 8 ಜನ ಸಂಪೂರ್ಣ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ಜಿಲ್ಲೆಯಲ್ಲಿ ಕೋವಿಡ್‌–19 ಸೋಂಕಿತ 12 ಜನರ ಪೈಕಿ ಎಂಟು ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡಗಡೆ ಹೊಂದಿದ್ದಾರೆ’ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಈವರೆಗೆ ಒಟ್ಟು 12 ಕೊರೊನಾ ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 72 ವರ್ಷದ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಇತ್ತೀಚೆಗೆ ಗುಣಮುಖರಾಗಿದ್ದ ಮೂರು ಜನರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು. ಭಾನುವಾರ ಕೂಡ ಜಿಲ್ಲಾ ಆಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಐದು ಜನರನ್ನು ಬಿಡುಗಡೆಗೊಳಿಸಲಾಯಿತು’ ಎಂದು ತಿಳಿಸಿದರು.

‘ಸೋಂಕಿತರ ಪೈಕಿ ಇನ್ನುಳಿದ ಮೂರು ಜನರಲ್ಲಿ ಒಬ್ಬರು ಬೆಂಗಳೂರಿನ ರಾಜೀವ್‍ಗಾಂಧಿ ಎದೆರೋಗಗಳ ಆಸ್ಪತ್ರೆಯಲ್ಲಿ, ಇಬ್ಬರು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆ ಕೋವಿಡ್‌ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಸಹ ಆದಷ್ಟು ಬೇಗ ಬಿಡುಗಡೆಗೊಳಿಸಲಾಗುವುದು’ ಎಂದರು.

‘ಚೇತರಿಕೆ ಕಂಡಿರುವ ಎಂಟು ವ್ಯಕ್ತಿಗಳನ್ನು ಮುಂಜಾಗ್ರತಾ ಕ್ರಮವಾಗಿ ಅವರ ಮನೆಗಳಿಗೆ ಕಳುಹಿಸದೆ ಪ್ರತ್ಯೇಕವಾಗಿ ತಲಾ ನಾಲ್ಕು ಜನರಂತೆ ಗೌರಿಬಿದನೂರಿನ ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯ ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್‌ಗಳಲ್ಲಿ ಇರಿಸಿ, ನಿಗಾ ವಹಿಸಲಾಗಿದೆ. ಕೆಲ ದಿನ ಅವರ ಆರೋಗ್ಯದ ಸ್ಥಿರತೆ ಪರಿಶೀಲಿಸಿ ಬಳಿಕ ಮನೆಗಳಿಗೆ ಕಳುಹಿಸಲಾಗುತ್ತದೆ’ ಎಂದು ಹೇಳಿದರು.

‘ಕೊರೊನಾ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿರುವುದರಿಂದ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ, ಸಾರ್ವಜನಿಕರು ಜಾಗೃತಿಯಿಂದ ಇರಬೇಕು. ತಮ್ಮ ಆರೋಗ್ಯದ ಮೇಲೆ ನಿಗಾ ಇಟ್ಟಿರಬೇಕಾಗುತ್ತದೆ. ಜಿಲ್ಲೆಯಲ್ಲಿ ಏಪ್ರಿಲ್ 14 ರವರೆಗೆ ಲಾಕ್‍ಡೌನ್ ಇರುವುದರಿಂದ ಜನರು ಅನಾವಶ್ಯಕವಾಗಿ ಹೊರಗಡೆ ಬರಬಾರದು’ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಮಾತನಾಡಿ, ‘ಏಪ್ರಿಲ್ 14 ರವರೆಗೆ ಲಾಕ್‍ಡೌನ್ ಇರುವುದರಿಂದ ಜನರು ಕಾನೂನು ಪಾಲಿಸಬೇಕು. ಅನವಶ್ಯಕವಾಗಿ ತಿರುಗಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಜಿಲ್ಲೆಯಲ್ಲಿ ಈವರೆಗೆ ಸುಮಾರು 464 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಕೊರೊನಾ ವೈರೆಸ್ ಸೋಂಕು ತಡೆಗಟ್ಟುವಲ್ಲಿ ಪೊಲೀಸರಿಗೆ ಸಹಕರಿಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಬಿ.ಎಂ.ಯೋಗೇಶ್ ಗೌಡ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು