ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಆರ್.ಲತಾ

Last Updated 27 ಸೆಪ್ಟೆಂಬರ್ 2021, 15:05 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಉತ್ತೇಜಿಸುವ ದೃಷ್ಟಿಯಿಂದ ನಂದಿ ಬೆಟ್ಟ, ರಂಗಸ್ಥಳ, ಶ್ರೀನಿವಾಸ ಸಾಗರ ಹಾಗೂ ಇನ್ನಿತರ ಪ್ರವಾಸಿ ತಾಣಗಳನ್ನು ಒಳಗೊಂಡಂತೆ ಒಂದು ಪ್ರವಾಸಿ ಆವರ್ತಕ ನಿರ್ಮಿಸಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಸೋಮವಾರ ತಾಲ್ಲೂಕಿನ ಭೋಗನಂದೀಶ್ವರ ದೇವಸ್ಥಾನದ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲೆಯ ಪ್ರವಾಸಿ ತಾಣಗಳನ್ನು ಬಿಂಬಿಸುವ ಚಿತ್ರ ಬಿಡಿಸುವ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಇಡೀ ಒಂದು ದಿನ ಜಿಲ್ಲೆಯ ಪ್ರವಾಸಿ ತಾಣಗಳನ್ನು ಸಂದರ್ಶಿಸಲು ಅನುಕೂಲ ಕಲ್ಪಿಸುವ ಉದ್ದೇಶವನ್ನು ಹೊಂದಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲಾಗುವುದು. ನಂದಿ ಗಿರಿಧಾಮ ಸೇರಿದಂತೆ ಜಿಲ್ಲೆಯಲ್ಲಿ ಸಾಕಷ್ಟು ತಾಣಗಳಿದ್ದು ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ವಿಫುಲವಾದ ಅವಕಾಶಗಳಿವೆ ಎಂದರು.

ಕಂದವಾರ ಕೆರೆ ಬಳಿ ಕೆ.ಆರ್.ಎಸ್.ಬೃಂದಾವನ ಮಾದರಿಯಲ್ಲಿ ₹ 8.10 ಕೋಟಿ ವೆಚ್ಚದಲ್ಲಿ ಉದ್ಯಾನ ನಿರ್ಮಿಸಲಾಗುವುದು. ಶೀಘ್ರದಲ್ಲಿಯೇ ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಶಂಕುಸ್ಥಾಪನೆ ನೆರವೇರಿಸುವರು ಎಂದು ಹೇಳಿದರು.

ಶ್ರೀನಿವಾಸಾಗರದ ಬಳಿ ಉದ್ಯಾನ ನಿರ್ಮಿಸಲಾಗುವುದು. ಇದಕ್ಕೆ ಈಗಾಗಲೇ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ರಂಗಸ್ಥಳದಲ್ಲಿ 21 ಎಕರೆ ಜಾಗದಲ್ಲಿ ಪ್ರವಾಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಯೋಜನೆ ರೂಪಿಸಲಾಗಿದೆ. ಸದ್ಯದಲ್ಲೇ ಅನುಮೋದನೆಯೂ ದೊರಕಲಿದೆ. ಅಮಾನಿ ಗೋಪಾಲಕೃಷ್ಣ ಕೆರೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಯೋಜಿಸಲಾಗಿದೆ ಎಂದರು.

ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಜಿತೇಂದ್ರನಾಥ್ ಹಾಗೂ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT