ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರವಾಸಿ ತಾಣ; ಧೂಮಪಾನ ನಿಷೇಧ ಫಲಕ ಕಡ್ಡಾಯ’

ರಾಷ್ಟ್ರೀಯ ತಂಬಾಕು ನಿಯಂತ್ರಣ ಪ್ರಗತಿ ಪರಿಶೀಲನಾ ಸಭೆ
Published 6 ಜುಲೈ 2023, 13:52 IST
Last Updated 6 ಜುಲೈ 2023, 13:52 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯ ಎಲ್ಲ ಶಾಲಾ, ಕಾಲೇಜು ಹಾಗೂ ವಿದ್ಯಾರ್ಥಿನಿಲಯಗಳ ಆವರಣ, ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ತಂಬಾಕು ಸೇವನೆ ಹಾಗೂ ಮಾರಾಟದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ತಿಳಿಸಿದರು.

ನಗರದಲ್ಲಿ ಗುರುವಾರ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ತಂಬಾಕು ಜೀವ ಕಸಿಯುವ ವ್ಯಸನವಾಗಿದೆ. ಜಿಲ್ಲೆಯನ್ನು ತಂಬಾಕು ಮುಕ್ತಗೊಳಿಸಲು ಶ್ರಮಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಾರ್ಯ ನಿರ್ವಹಿಸುತ್ತಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಪೊಲೀಸ್ ಠಾಣೆಗಳನ್ನು ತಂಬಾಕು ಮುಕ್ತವನ್ನಾಗಿಸಿ ವರದಿ ಸಲ್ಲಿಸಬೇಕು ಎಂದರು.

ಪ್ರವಾಸಿ ತಾಣಗಳಲ್ಲಿ ಕಡ್ಡಾಯವಾಗಿ ಧೂಮಪಾನ ನಿಷೇಧದ ಕುರಿತು ನಾಮಫಲಕಗಳನ್ನು ಅಳವಡಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪೌರಕಾರ್ಮಿಕರಿಗೆ ತಂಬಾಕು ಉತ್ಪನ್ನಗಳ ವ್ಯಸನದಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕು. ಹಳ್ಳಿಗಳಲ್ಲಿ ತಂಬಾಕಿನಿಂದ ಆಗುವ ಅನಾರೋಗ್ಯದ ಪರಿಣಾಮಗಳನ್ನು ಸೂಚಿಸುವ ಭಾವಚಿತ್ರ ಮತ್ತು ವಿವರಗಳ ನಾಮಫಲಕಗಳನ್ನು ಹಾಕಬೇಕು ಎಂದು ಹೇಳಿದರು.

ಬಾರ್ ಮತ್ತು ರೆಸ್ಟೊರೆಂಟ್‌ಗಳು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ವಲಯ ಪ್ರದೇಶ ಮಾಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದಲ್ಲಿ ಹೆಚ್ಚಿನ ದಂಡ ವಿಧಿಸಬೇಕು. ಪರವಾನಗಿ ನೀಡಿದ ಮದ್ಯದ ಅಂಗಡಿಗಳಲ್ಲಿ ಮಾತ್ರ ತಂಬಾಕು ಮಾರಾಟಕ್ಕೆ ಅವಕಾಶ ನೀಡಬೇಕು. ಉಲ್ಲಂಘನೆ ಮಾಡಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

2023ರ ಫೆಬ್ರುವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 14 ಕೋಟ್ಪಾ ದಾಳಿಗಳನ್ನು ನಡೆಸಿ 269 ಪ್ರಕರಣಗಳನ್ನು ದಾಖಲಿಸಲಾಗಿದೆ. ₹17,170 ದಂಡ ಸಂಗ್ರಹಿಸಲಾಗಿದೆ. ತಂಬಾಕು ಮುಕ್ತ ಗ್ರಾಮವನ್ನಾಗಿಸಲು ತಾಲ್ಲೂಕಿನ ಮುದ್ದೇನಹಳ್ಳಿ ಆಯ್ಕೆ ಮಾಡಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರಮೇಶ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ರವಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT