ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಡ್ಲಘಟ್ಟದಲ್ಲಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರ

Published 15 ಏಪ್ರಿಲ್ 2024, 13:36 IST
Last Updated 15 ಏಪ್ರಿಲ್ 2024, 13:36 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಜನರ ಹಿತ ಮುಖ್ಯವಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಬ್ಬರಿಗೂ ಅವರವರ ಕುರ್ಚಿ ಉಳಿಸಿಕೊಳ್ಳುವುದು ಮುಖ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಟೀಕಿಸಿದರು.

ಸೋಮವಾರ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಲ್ಲೇಶ್‌ಬಾಬು ಪರ ಪ್ರಚಾರದಲ್ಲಿ ಭಾಗವಹಿಸಿ  ಮಾತನಾಡಿದರು.

ರೈತರ ಬಗ್ಗೆ ಕಾಳಜಿ ಇದ್ದಿದ್ದರೆ ಸರಿಯಾದ ಸಮಯಕ್ಕೆ ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಮೊರೆ ಇಡುತ್ತಿದ್ದರು. ಇಲ್ಲವೇ ತಮ್ಮ ಬೊಕ್ಕಸದಿಂದ ರೈತರಿಗೆ ಬರ ಪರಿಹಾರದ ಹಣ ನೀಡುತ್ತಿದ್ದರು. ಅದು ಬಿಟ್ಟು ಕೇಂದ್ರದತ್ತ ಬೊಟ್ಟು ಮಾಡಿ ರೈತರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅಧಿಕಾರದ ಕುರ್ಚಿ ಉಳಿಸಿಕೊಳ್ಳುವುದು ಬಿಟ್ಟು ಬೇರೆ ಯಾವುದೇ ಅಜೆಂಡಾ ಇಲ್ಲವೇ ಇಲ್ಲ. ದೇಶವನ್ನು ಜಗತ್ತೀನ ಮುಂಚೂಣಿ ರಾಷ್ಟ್ರವನ್ನಾಗಿಸಬೇಕಿದೆ. ಇದಕ್ಕಾಗಿ ಬಿಜೆಪಿಯನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ಶಾಸಕ ಬಿ.ಎನ್.ರವಿಕುಮಾರ್ ಮಾತನಾಡಿ, ಜಗತ್ತಿನಲ್ಲಿ ದೇಶ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಂಡು ಮುಂಚೂಣಿ ಸ್ಥಾನಕ್ಕೇರಲು ನರೇಂದ್ರ ಮೋದಿ ಅವರಂತ ಧೀಮಂತ ನಾಯಕರಿಂದ ಮಾತ್ರ ಸಾಧ್ಯ. ಅವರು ಮೂರನೇ ಬಾರಿಗೆ ಪ್ರಧಾನಿ ಆಗಬೇಕೆಂದು ಹೇಳಿದರು.

ಮಲ್ಲೇಶ್‌ ಬಾಬು ಅವರು ರಾಜಕೀಯ ಹಿನ್ನಲೆಯುಳ್ಳವರು. ಈ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಹಾಗೂ ಜನರ ನಾಡಿಮಿಡಿತ ಬಲ್ಲ ಸರಳ ಸಜ್ಜನಿಕೆಯ ವ್ಯಕ್ತಿ. ಅವರ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.

ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ಮಾತನಾಡಿ, ಈ ಕ್ಷೇತ್ರದ ಮತದಾರರು ಕಾಂಗ್ರೆಸ್‌ ಗ್ಯಾರಂಟಿಗಳಿಗೆ ಒಮ್ಮೆ ಯಾಮಾರಿದ್ದು ಸಾಕಾಗಿದೆ. ಮತ್ತೆ ಮರುಳಾಗಬಾರದು. ಈ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಪ್ರತಿ ಮನೆ ಮನೆಗೂ ಭೇಟಿ ಮಾಡಿ ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

ಸಂಸದ ಎಸ್.ಮುನಿಸ್ವಾಮಿ, ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಮಾಜಿ ಶಾಸಕ ಎಂ.ರಾಜಣ್ಣ, ಅಭ್ಯರ್ಥಿ ಮಲ್ಲೇಶ್‌ಬಾಬು ಅವರ ತಾಯಿ ಮಂಗಮ್ಮ ಮುನಿಸ್ವಾಮಿ ಮಾತನಾಡಿದರು.

ಜೆಡಿಎಸ್ ಅಧ್ಯಕ್ಷ ಡಿ.ಬಿ.ವೆಂಕಟೇಶ್, ಬಿಜೆಪಿ ಅಧ್ಯಕ್ಷ ಸೀಕಲ್ ಆನಂದಗೌಡ, ಮುಖಂಡರಾದ ಬಂಕ್ ಮುನಿಯಪ್ಪ, ಅಪ್ಪೇಗೌಡನಹಳ್ಳಿ ಲಕ್ಷ್ಮಿನಾರಾಯಣರೆಡ್ಡಿ, ಕಂಬದಹಳ್ಳಿ ಸುರೇಂದ್ರಗೌಡ, ಬಿ.ನಾರಾಯಣಸ್ವಾಮಿ, ತಾದೂರು ರಘು, ಪಾಪಿರೆಡ್ಡಿ, ಹುಜಗೂರು ರಾಮಯ್ಯ, ಸದಾಶಿವ, ನಂಜಪ್ಪ, ನರೇಶ್, ಡಿ.ಎಂ.ಜಗದೀಶ್ವರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT