ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ತಿದ್ದುಪಡಿ ಸುಗ್ರಿವಾಜ್ಞೆಗಳ ರದ್ದಿಗೆ ಆಗ್ರಹ

ನಗರದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರ ಪ್ರತಿಭಟನೆ
Last Updated 10 ಜೂನ್ 2020, 11:41 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಕೃಷಿಯನ್ನು ಕಾರ್ಪೊರೇಟ್ ಕಂಪನಿಗಳ ಮರ್ಜಿಗೆ ದೂಡುವ ರೈತ ವಿರೋಧಿ ಕ್ರಮಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ‘ಪ್ರಧಾನಿ ನರೇಂದ್ರ ಮೋದಿ ಅವರು ಜನ ವಿರೋಧಿ, ರೈತ, ಕೃಷಿ ಕೂಲಿ ಕಾರ್ಮಿಕರ ವಿರೋಧಿ ಧೋರಣೆ ಹೊಂದಿದ್ದಾರೆ. ಇತ್ತೀಚೆಗೆ ಕೇಂದ್ರ ಸರಕಾರ ರೈತ ವಿರೋಧಿಯಾದ ಅಗತ್ಯ ವಸ್ತುಗಳ ಕಾಯ್ದೆ ತಿದ್ದುಪಡಿಗೆ ಸುಗ್ರಿವಾಜ್ಞೆ ಹೊರಡಿಸುವ ತೀರ್ಮಾನವನ್ನು ಕೈಗೊಂಡಿರುವುದೇ ಅದಕ್ಕೆ ಸಾಕ್ಷಿ’ ಎಂದು ಹೇಳಿದರು.

‘ಲಾಕ್‍ಡೌನ್‍ನಿಂದಾಗಿ ರೈತರು, ಕೃಷಿ ಕೂಲಿಕಾರರು ಹಾಗೂ ಮೀನುಗಾರರು, ರೇಷ್ಮೆ ಬೆಳೆಗರರು ಸೇರಿದಂತೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಮೋದಿ ಹಾಗೂ ಕೇಂದ್ರ ಸಚಿವರು ಈ ಬಗ್ಗೆ ಚಕಾರ ಎತ್ತದೆ ಜಾಣ ಕುರುಡು ಪ್ರದರ್ಶನ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತರುತ್ತಿರುವ ಹಲವು ಕ್ರಮಗಳು ರೈತರು ಹಾಗೂ ಗ್ರಾಮೀಣ ಜನತೆ, ಗ್ರಾಹಕ ಸಮುದಾಯವನ್ನು ಅಶಕ್ತರನ್ನಾಗಿಸಿ, ಕಾರ್ಪೊರೇಟ್‌ ಮರ್ಜಿಗೆ ದೂಡುವ ಹುನ್ನಾರವನ್ನು ತೋರಿಸುತ್ತದೆ. ಕಷ್ಟ ಕಾಲದಲ್ಲಿ ರೈತರ ಸಾಲ ಮನ್ನಾ ಮಾಡುವ ಬದಲು ಕೃಷಿಕರನ್ನು ಲೂಟಿ ಮಾಡುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ ಮಾತನಾಡಿ, ‘ಕೃಷಿ ಉತ್ಪನ್ನ ಮಾರಾಟ ಹಾಗೂ ವಾಣಿಜ್ಯ (ಉತ್ತೇಜನ ಮತ್ತು ಬೆಂಬಲ) ಹಾಗೂ ಬೆಲೆ ಖಾತರಿ, ಕೃಷಿ ಸೇವೆಗಳ ಕುರಿತ ರೈತರ (ಸಶಕ್ತೀಕರಣ ಮತ್ತು ರಕ್ಷಣೆ) ಒಪ್ಪಂದದ ಸುಗ್ರಿವಾಜ್ಞೆಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿರುವುದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ’ ಎಂದು ಆಪಾದಿಸಿದರು.

‘ಈ ಎರಡು ಸುಗ್ರಿವಾಜ್ಞೆಗಳನ್ನು ಹಾಗೂ ಅಗತ್ಯ ವಸ್ತುಗಳ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ಪ್ರಧಾನಿ ನರೇಂದ್ರ ಮೋದಿ ಕೂಡಲೇ ರದ್ದುಪಡಿಸಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ರಾಷ್ಟ್ರವ್ಯಾಪಿ ಹೋರಾಟ ನಡೆಯಲಿವೆ’ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಕಾರ್ಯಕರ್ತರಾದ ಸಾವಿತ್ರಮ್ಮ, ಸೋಮು, ಮುನಿಯಪ್ಪ, ವೆಂಕಟರಾಯಪ್ಪ, ಸತೀಶ್, ನಾಗೇಶ್, ರಾಮಕೃಷ್ಣ, ಭಕ್ತರಹಳ್ಳಿ ಪ್ರತೀಶ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT