ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿಗೆ ಕಡಿವಾಣ

ಭ್ರಷ್ಟಾಚಾರ ಎಸಗುವವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ: ಶಾಸಕ
Published 1 ಜೂನ್ 2023, 15:24 IST
Last Updated 1 ಜೂನ್ 2023, 15:24 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಸರ್ಕಾರಿ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿಯು ಹೆಚ್ಚಾಗಿದ್ದು, ಇದಕ್ಕೆಲ್ಲ ಸಂಪೂರ್ಣ ಕಡಿವಾಣ ಹಾಕಲಾಗುವುದು’ ಎಂದು ಶಾಸಕ ಪ್ರದೀಪ್ ಈಶ್ವರ್ ಭರವಸೆ ನೀಡಿದರು. 

ನಗರದ ಮಿನಿ ವಿಧಾನಸೌಧದ ಶಾಸಕರ ಕಚೇರಿಯನ್ನು ಗುರುವಾರ ಉದ್ಘಾಟಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರಿ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿಯಿಂದ ಸಾರ್ವಜನಿಕರ ಕೆಲಸ ಕಾರ್ಯಗಳು ನಿರ್ದಿಷ್ಟ ಅವಧಿಯಲ್ಲಿ ಪೂರ್ಣಗೊಳ್ಳದೆ ವಿಳಂಬ ಆಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು. 

‘ದಲ್ಲಾಳಿಗಳ ಹಾವಳಿಯಿಂದ ಸರ್ಕಾರದ ಗುರಿ ತಲುಪಲು ಆಗುತ್ತಿಲ್ಲ ಎಂದು ಅಧಿಕಾರಿಗಳು ಆಳಲು ತೋಡಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರಿ ಕಚೇರಿಗಳಲ್ಲಿ ಪಕ್ಷಗಳ ಹೆಸರು ಹೇಳಿಕೊಂಡು ಓಡಾಡುವವರಿಗೆ ಹಾಗೂ ದಲ್ಲಾಳಿಗಳಿಗೆ ಕಡಿವಾಣ ಹಾಕಲಾಗುವುದು’ ಎಂದು ಹೇಳಿದರು.

ಹಿಂದೆ ಶಾಸಕರ ಕಚೇರಿಗೆ ಶಾಸಕ ಬಂದರೆ, ಅವರ ಬೆಂಬಲಿಗರು ಮತ್ತು ಪಕ್ಷದ ಮುಖಂಡರು ಮಾತ್ರ ಇರುತ್ತಿದ್ದರು. ಇದರಿಂದ ಜನ ಸಾಮಾನ್ಯರು ಶಾಸಕರಲ್ಲಿ ಸಮಸ್ಯೆ ಹೇಳಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ತಮ್ಮ ಅವಧಿಯಲ್ಲಿ ಈ ಪದ್ಧತಿಗೆ ತಿಲಾಂಜಲಿ ಇಡಲು ತೀರ್ಮಾನಿಸಿದ್ದು, ಪಕ್ಷದ ಕಾರ್ಯಕರ್ತರು ಸೇರಿದಂತೆ, ಯಾರೇ ಆಗಲಿ ಸಮಸ್ಯೆಗಳು ಇದ್ದರೆ ಮಾತ್ರ ಕಚೇರಿ ಬರಬೇಕು. ಇದರಿಂದ ಕಚೇರಿಯಲ್ಲಿ ಸಾಮಾನ್ಯರು ಸಮಸ್ಯೆ ಹೇಳಿಕೊಳ್ಳಲು ಮುಕ್ತ ಅವಕಾಶ ನೀಡಿದಂತಾಗುವುದು ಎಂದು ನುಡಿದರು.

ಕ್ಷೇತ್ರದಲ್ಲಿ ಯಾರೂ ಸಹ ಕಾನೂನು ಮೀರುವಂತಿಲ್ಲ. ಯಾರಿಗೂ ಮುಲಾಜು ನೋಡಲ್ಲ, ನ್ಯಾಯ ಸಿಗುವಂತೆ ಮಾಡುವುದೇ ತಮ್ಮ ಗುರಿಯಾಗಿದ್ದು, ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಸಂಪೂರ್ಣವಾಗಿ ಅಂಕುಶ ಹಾಕಲಾಗುತ್ತದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಕ್ಷೇತ್ರವನ್ನು ಮಾದರಿಯನ್ನಾಗಿಸಲು ಬೇಕಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ 10 ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಕೆಎಸ್‍ಆರ್‍ಟಿಸಿ ಬಸ್‍ಗಳಿಗೆ ಚಾಲನೆ ನೀಡಲಾಯಿತು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೇಶವರೆಡ್ಡಿ ಇದ್ದರು.

ಪಕ್ಷಕ್ಕೆ ದ್ರೋಹ ಬಗೆದವರಿಗೆ ಪಾಠ ವಿಧಾನಸಭಾ ಚುನಾವಣೆಯಲ್ಲಿ ಅವರ ಕಡೆ ಇದ್ದರೂ ನಿಮಗೆ ಬೆಂಬಲ ನೀಡಿದ್ದೇವೆ ಎಂದು ಹೇಳುತ್ತಿರುವ ಪಕ್ಷಾಂತರಗೊಂಡ ಸದಸ್ಯರ ಹೇಳಿಕೆಯನ್ನು ನಂಬಲು ಸಾಧ್ಯವಿಲ್ಲ ಶಾಸಕ ಪ್ರದೀಪ್ ಈಶ್ವರ್ ತಿಳಿಸಿದರು. ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ನಗರಸಭೆ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳಲು ಪಕ್ಷದ ವರಿಷ್ಠರನ್ನು ಒತ್ತಾಯಿಸಲಾಗುವುದು. ಮಾತೃ ಪಕ್ಷಕ್ಕೆ ದ್ರೋಹ ಬಗೆದವರಿಗೆ ಪಾಠ ಕಲಿಸಲಾಗುವುದು ಎಂದರು.

ಪ್ಲಾಸ್ಟಿಕ್: ಕಟ್ಟುನಿಟ್ಟಿನ ಕ್ರಮ ದೇಶದಲ್ಲಿ ಮೊದಲ ಬಾರಿ ರಾಜ್ಯದಲ್ಲಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಯನ್ನು ನಿಷಿದ್ಧಗೊಳಿಸಿ ಆದೇಶ ಹೊರಡಿಸಲಾಗಿತ್ತು. ಆದರೆ ಪ್ಲಾಸ್ಟಿಕ್ ನಿಷೇಧವು ಇತರೆ ರಾಜ್ಯಗಳಲ್ಲಿ ಕಟ್ಟುನಿಟ್ಟಾಗಿ ಜಾರಿಯಾಗಿದರೂ ರಾಜ್ಯದಲ್ಲಿ ಮಾತ್ರ ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಾಗಿಲ್ಲ. ನಾಳೆಯಿಂದಲೇ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಯನ್ನು ಕ್ಷೇತ್ರದಲ್ಲಿ ನಿಲ್ಲಿಸಲಾಗುತ್ತಿದ್ದು ಎಲ್ಲ ವರ್ತಕರು ಇದನ್ನು ತಪ್ಪದೆ ಕಡ್ಡಾಯವಾಗಿ ಪಾಲಿಸಬೇಕು ಎಂದು ಶಾಸಕ ಪ್ರದೀಪ್ ಈಶ್ವರ್ ಎಚ್ಚರಿಸಿದರು. ಜೀವ ಸಂಕುಲದ ಜೀವಕ್ಕೆ ಕುತ್ತು ತರುವ ಜೊತೆಗೆ ಪರಿಸರಕ್ಕೆ ಮಾರಕವಾದ ನಿಷೇಧಿತ ಪ್ಲಾಸ್ಟಿಕ್ ಅನ್ನು ಯಾರೂ ಬಳಸಬಾರದು. ಇದರ ಬಳಕೆಯಿಂದ ಈಗಾಗಲೇ ಹಲವರು ತಮಗೇ ಅರಿವಿಲ್ಲದಂತೆ ಹಠಾತ್ ಮರಣಕ್ಕೆ ತುತ್ತಾಗುತ್ತಿದ್ದಾರೆ. ವರ್ತಕರು ಪ್ಲಾಸ್ಟಿಕ್ ಉತ್ಪನ್ನಗಳ ಮಾರಾಟ ನಿಲ್ಲಿಸಬೇಕು. ಇಲ್ಲವಾದರೆ ಅಧಿಕಾರಿಗಳು ಕ್ರಮಕೈಗೊಂಡರೆ ತಾವು ಹೊಣೆಯಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT