ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ಯ ವಿವಾಹ: 3 ತಿಂಗಳಿಗೆ ಸಭೆ ಕಡ್ಡಾಯ

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ನಿರ್ದೇಶನ
Published 7 ಡಿಸೆಂಬರ್ 2023, 15:30 IST
Last Updated 7 ಡಿಸೆಂಬರ್ 2023, 15:30 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯಿತಿ ಹಾಗೂ ಗ್ರಾಮಮಟ್ಟದಲ್ಲಿ ಬಾಲ್ಯವಿವಾಹ ತಡೆಗಟ್ಟುವ ಸಮಿತಿಗಳು ಅಸ್ತಿತ್ವದಲ್ಲಿ ಇವೆ. ತಾಲ್ಲೂಕು ಮಟ್ಟದ ಸಮಿತಿಗಳ ಸಭೆಯನ್ನು ತಹಶೀಲ್ದಾರ್ ನೇತೃತ್ವದಲ್ಲಿ ಮೂರು ತಿಂಗಳಿಗೆ ಒಮ್ಮೆ ಕಡ್ಡಾಯವಾಗಿ ನಡೆಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ತಿಳಿಸಿದರು. 

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ಗುರುವಾರ ನಗರದಲ್ಲಿ ನಡೆದ ‘ಮಕ್ಕಳ ಹಕ್ಕುಗಳು ಮತ್ತು ಕಾನೂನು’ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿವರ್ಹಣಾಧಿಕಾರಿ, ತಹಶೀಲ್ದಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮತ್ತು ಇತರ ಇಲಾಖೆಗಳ ಅಧಿಕಾರಿಗಳು ಸಭೆ ನಡೆಸಿ, ತಮ್ಮ ಕಾರ್ಯವ್ಯಾಪ್ತಿಯ ಸ್ಥಿತಿ ಅರಿತು ಬಾಲ್ಯ ವಿವಾಹ ಪ್ರಯತ್ನಗಳನ್ನು ಪರಿಣಾಮಕಾರಿಯಾಗಿ ತಡೆಯಬೇಕು ಎಂದರು.

ಒಂದು ವೇಳೆ ಬಾಲ್ಯವಿವಾಹ ನಡೆದಿದ್ದರೆ ಅದಕ್ಕೆ ಪ್ರೋತ್ಸಾಹಿಸಿದ ಪೋಷಕರು, ಸಂಬಂಧಿಕರು, ಕಲ್ಯಾಣ ಮಂಟಪದ ಮಾಲೀಕರು, ಪುರೋಹಿತರನ್ನು ಕಾನೂನು ಕ್ರಮಕ್ಕೆ ಒಳಪಡಿಸಬೇಕು. ಅಂತಹ ಮಕ್ಕಳ ಪುನರ್ ವಸತಿಗೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಬಾಲ್ಯ ವಿವಾಹವಾದರೆ 20 ವರ್ಷ ಜೈಲು ಶಿಕ್ಷೆ ಎಂಬುದನ್ನು ಹೆಚ್ಚು ಪ್ರಚಾರಗೊಳಿಸಬೇಕು. ಬಾಲ್ಯವಿವಾಹಗಳನ್ನು ಪೂರ್ಣವಾಗಿ ನಿಯಂತ್ರಿಸಬೇಕು ಎಂದು ತಿಳಿಸಿದರು.

ಮಕ್ಕಳ ಸಂರಕ್ಷಣೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪೊಲೀಸ್, ಪಂಚಾಯತ್ ರಾಜ್, ಕಂದಾಯ, ಕಾರ್ಮಿಕ ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳ ಇಲಾಖೆಗಳು ಒಂದು ತಂಡದ ರೀತಿ ಸಮನ್ವಯವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಬಾಲ್ಯವಿವಾಹ ಆಗುವುದರಿಂದ ಅನೇಕ ಯುವಕರು ಹದಿಹರೆಯದಲ್ಲಿಯೇ ಜೈಲುಪಾಲಾಗಿದ್ದಾರೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಬಾಲ್ಯವಿವಾಹದ ಅನನುಕೂಲಗಳ ಬಗ್ಗೆ ಸಾರ್ವಜನಿಕರಲ್ಲಿ ತಿಳಿಸಿಕೊಡಬೇಕು. ಸಮಿತಿಗಳು ಗ್ರಾಮ ಮಟ್ಟದಿಂದಲೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಬಾಲ್ಯವಿವಾಹವನ್ನು ಸಂಪೂರ್ಣವಾಗಿ ತಪ್ಪಿಸಬಹುದು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ ಮಾತನಾಡಿ, ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ ಮಕ್ಕಳ ಹಕ್ಕುಗಳು ಮತ್ತು ಕಾನೂನು ರಕ್ಷಣೆ ಬಗ್ಗೆ ನಿರಂತರವಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧೀನದ 13 ಸಂಸ್ಥೆಗಳಿಂದ 180 ಮಕ್ಕಳನ್ನು ರಕ್ಷಿಸಿ ಪೋಷಿಸಲಾಗುತ್ತಿದೆ ಎಂದರು. 

293 ಮಕ್ಕಳಿಗೆ ಅನಾಥ ಮತ್ತು ಏಕಪೊಷಕ ಮಕ್ಕಳಿಗೆ ಸಹಾಯ ಧನ ನೀಡಲಾಗುತ್ತಿದೆ. ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ಜಿಲ್ಲೆಯ ಗಡಿಭಾಗದಲ್ಲಿ ದಾಖಲಾಗುತ್ತಿವೆ. ಇದನ್ನು ಸಂಪೂರ್ಣವಾಗಿ ನಿಯಂತ್ರಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಅರುಣಾ ಕುಮಾರಿ ಅವರು ಮಕ್ಕಳ ರಕ್ಷಣೆಗೆ ಇರುವ ಕಾಯ್ದೆಗಳು ಹಾಗೂ ಅವರ ಹಕ್ಕುಗಳ ಕುರಿತು ತಿಳಿಸಿಕೊಟ್ಟರು. 

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಮರಾಜ್ ಅರಸ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮಚಂದ್ರಪ್ಪ, ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

150 ಪೊಕ್ಸೊ ಪ್ರಕರಣ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಮಾತನಾಡಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ 150 ಪೊಕ್ಸೊ ಪ್ರಕರಣಗಳು ದಾಖಲಾಗಿವೆ. ನೊಂದು ಠಾಣೆಗೆ ಬಂದಾಗ ಪೊಲೀಸ್ ಸಿಬ್ಬಂದಿ ಸಮರ್ಪಕವಾಗಿ ಹಾಗೂ ತುರ್ತು ಸ್ಪಂದನಾ ಶೀಲರಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಇತರ ಇಲಾಖೆಗಳು ತಮ್ಮ ಜವಾಬ್ದಾರಿಗಳನ್ನು ಅರಿತು ನಡೆಯಬೇಕು. ಸಾರ್ವಜನಿಕರು ಸಹ ತಮ್ಮ ಜವಾಬ್ದಾರಿ ಅರಿತು ಮಕ್ಕಳ ರಕ್ಷಣೆಯಲ್ಲಿ ಸಾಮಾಜಿಕ ಬದ್ದತೆ ತೋರಬೇಕು. ಇಂದಿನ ಮಕ್ಕಳು ಮುಂದಿನ ಮಾನವ ಸಂಪನ್ಮೂಲ. ಈ ಸಂಪತ್ತು ಉತ್ತಮ ರೀತಿಯಲ್ಲಿ ಬೆಳವಣಿಗೆಯಾದರೆ ದೇಶದ ಅಭಿವೃದ್ಧಿ ಸಾಧ್ಯ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT