ಭಾನುವಾರ, ಆಗಸ್ಟ್ 14, 2022
21 °C
ಹೆದ್ದಾರಿ ತಡೆದು ರೈತರ ಹೋರಾಟಕ್ಕೆ ಬೆಂಬಲ ನೀಡಿದ ಕಾರ್ಯಕರ್ತರು

ಕೇಂದ್ರದ ದಮನಕಾರಿ ನೀತಿಗೆ ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಮೂರು ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕುತ್ತಿದೆ ಎಂದು ಆರೋಪಿಸಿ ರೈತ ಸಂಘದ ಪದಾಧಿಕಾರಿಗಳು ಬುಧವಾರ ನಗರ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ –7ರಲ್ಲಿ ರಸ್ತೆತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.

ಮಂಚನಬಲೆ ರಸ್ತೆಯ ಮೇಲ್ಸೇತುವೆ ಬಳಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ‘ತಮ್ಮ ವಿವಿಧ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಮುಂದಾದ ರೈತರನ್ನು ದೆಹಲಿ–ಉತ್ತರಪ್ರದೇಶ ಗಡಿಯನ್ನು ಮುಚ್ಚುವ ಮೂಲಕ ತಡೆದಿರುವುದು ಖಂಡನೀಯ’ ಎಂದು ಹೇಳಿದರು.

‘ಕೊರೆಯುವ ಚಳಿಯಲ್ಲಿ ಪ್ರತಿಭಟನೆ ಮುಂದುವರಿಸಿರುವ ರೈತರ ಮೇಲೆ ಕೇಂದ್ರ ಸರ್ಕಾರ ಜಲಫಿರಂಗಿ ಬಳಿಕ ಅಮಾನೀಯವಾಗಿ ವರ್ತಿಸುವ ಮೂಲಕ ರೈತ ವಿರೋಧಿ ಧೋರಣೆಯನ್ನು ಬಹಿರಂಗಪಡಿಸಿದೆ. ಇವತ್ತು ನಾವು ಪ್ರಜಾಪ್ರಭುತ್ವದಲ್ಲಿ ಇದ್ದೇವೆ ಎನ್ನುವುದರ ಮೇಲೆಯೇ ಅಪನಂಬಿಕೆಯಾಗಿದೆ’ ಎಂದು ತಿಳಿಸಿದರು.

‘ಕಾರ್ಪೋರೇಟ್‌ ಕುಳಗಳ ಹಿತ ಕಾಯುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲಕ್ಷಾಂತರ ರೈತರ ಹೋರಾಟಕ್ಕೆ ಸ್ಪಂದಿಸದೆ ಕುರುಡಾಗಿ ವರ್ತಿಸುತ್ತಿದ್ದಾರೆ. ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ನೀಡದೆ ಕೃಷಿಗೆ ಸಂಬಂಧಿತ ಎಲ್ಲ ಕ್ಷೇತ್ರಗಳ ಖಾಸಗೀಕರಣಕ್ಕೆ ಮುಂದಾಗಿ ದೇಶದ ಕೃಷಿ ಸಂಸ್ಕೃತಿ ನಾಶ ಮಾಡಲು ಹೊರಟಿದ್ದಾರೆ’ ಎಂದು ಆರೋಪಿಸಿದರು.

‘ಲಾಕ್‌ಡೌನ್‌ನಂತಹ ವಿಷಮ ಪರಿಸ್ಥಿತಿಯಲ್ಲಿ ಸರ್ಕಾರಗಳು ಕೃಷಿ ಕ್ಷೇತ್ರವನ್ನು ಕಳ್ಳರ ರೀತಿಯಲ್ಲಿ ಕಾರ್ಪೋರೆಟ್‌ ಕಂಪೆನಿಗಳಿಗೆ ಧಾರೆ ಎರೆದಿರುವುದು ಅತ್ಯಂತ ಅಮಾನವೀಯ ಕ್ರಮ. ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ, ಬಿತ್ತನೆ ಬೀಜ ಕಾಯ್ದೆ, ಕಾರ್ಮಿಕ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳ ತಿದ್ದುಪಡಿಯನ್ನು ಕೂಡಲೇ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.

‘ಇಡೀ ಜನಜೀವನದ ಮೇಲೆ ಪರಿಣಾಮ ಬೀರುವಂತಹ ತಿದ್ದುಪಡಿಗಳನ್ನು ಶಾಸನಸಭೆ, ಸಂಸತ್ತಿನಲ್ಲಿ ಚರ್ಚಿಸದೆ ಸುಗ್ರಿವಾಜ್ಞೆ ಮೂಲಕ ಕಾಯ್ದೆ ಜಾರಿಗೆ ಮುಂದಾಗುತ್ತಿರುವುದು ಜನರನ್ನು ವಂಚಿಸುವ ಕೆಲಸವಾಗಿದೆ. ಬಡ ರೈತರನ್ನು ಭೂಮಿಯಿಂದ ಒಕ್ಕಲೆಬ್ಬಿಸಿ ದಿವಾಳಿ ಮಾಡುವುದು ಇದರ ಹಿಂದಿನ ಸಂಚು’ ಎಂದು ಆರೋಪಿಸಿದರು.

‘ಕೇಂದ್ರ ಸರ್ಕಾರ ರೈತರ ನ್ಯಾಯಯುತ ಹೋರಾಟಕ್ಕೆ ಸ್ಪಂದಿಸಿ ಅನ್ನದಾತರ ಬೇಡಿಕೆಗಳನ್ನು ಈಡೇರಿಸಬೇಕು. ಒಂದೊಮ್ಮೆ ರೈತರ ಹೋರಾಟ ಹತ್ತಿಕ್ಕುವ ಕೆಲಸ ಮುಂದುವರಿಸಿದರೆ ರಾಷ್ಟ್ರ ವ್ಯಾಪಿ ಹೋರಾಟ ತೀವ್ರಗೊಳಿಸಲಾಗುತ್ತದೆ’ ಎಂದು ಹೇಳಿದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಮಾನಾಥ್, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಪದಾಧಿಕಾರಿಗಳಾದ ಮಲ್ಲಪ್ಪ, ಮುರಳಿ, ಲಕ್ಷ್ಮೀ ನಾರಾಯಣರೆಡ್ಡಿ, ಈಶ್ವರರೆಡ್ಡಿ, ತಾದೂರು ಮಂಜುನಾಥ್  ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.