ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಸಾನ್ ಕ್ರೆಡಿಟ್ ಕಾರ್ಡ್ ತಲುಪಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಸೂಚನೆ
Last Updated 17 ಅಕ್ಟೋಬರ್ 2020, 13:34 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಜಿಲ್ಲೆಯಾದ್ಯಂತ ರೈತರಿಗೆ ಶೇಕಡಾ 100 ರಷ್ಟು ಕಿಸಾನ್ ಕ್ರೆಡಿಟ್ ಕಾರ್ಡ್‍ಗಳನ್ನು ವಿತರಣೆ ಮಾಡಬೇಕು. ಆ ಕಾರ್ಡ್‌ಗಳು ರೈತರಿಗೆ ಯಾವ ರೀತಿ ಉಪಯೋಗವಾಗುತ್ತಿವೆ ಎಂಬುದರ ಬಗ್ಗೆ ಪ್ರತಿ 15 ದಿನಗಳಿಗೊಮ್ಮೆ ಸಮರ್ಪಕ ಮಾಹಿತಿ ನೀಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಕಿಸಾನ್ ಕ್ರೆಡಿಟ್ ಕಾರ್ಡ್ ಸರಿಯಾದ ಸಮಯಕ್ಕೆ ರೈತರಿಗೆ ಸಿಕ್ಕಾಗ ಮಾತ್ರ ಬ್ಯಾಂಕ್‍ಗಳಲ್ಲಿ ಸಾಲ ಸಿಗಲು ಸಾಧ್ಯವಾಗುತ್ತದೆ. ಇದರಿಂದ ರೈತರು ಇನ್ನಷ್ಟು ಕೃಷಿ ಕಾರ್ಯಗಳನ್ನು ಮಾಡಲು ಸಹಕಾರಿಯಾಗುತ್ತದೆ ಆದ್ದರಿಂದ ತ್ವರಿತಗತಿಯಲ್ಲಿ ಕಿಸಾನ್ ಕಾರ್ಡನ್ನು ವಿತರಿಸಬೇಕು’ ಎಂದು ತಿಳಿಸಿದರು.

‘ಈವರೆಗೆ ಜಿಲ್ಲೆಯಲ್ಲಿ 80 ಸಾವಿರ ಕಿಸಾನ್ ಕ್ರೆಡಿಟ್ ಕಾರ್ಡ್‍ಗಳಿಗೆ ಶೇ 70 ರಷ್ಟು ಸಾಲ ವಿತರಿಸಲಾಗಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ 12 ಸಾವಿರ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಸಹಕಾರ ಕ್ಷೇತ್ರದಲ್ಲಿ 2,800 ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲವನ್ನು ಮಂಜೂರು ಮಾಡಲಾಗಿದೆ’ ಎಂದು ಹೇಳಿದರು.

‘ರೈತರಿಗೆ ಆದಷ್ಟು ಬೇಗ 2019-20ನೇ ಸಾಲಿನ ಬೆಳೆ ನಷ್ಟ ಪರಿಹಾರ ವಿಮೆ ವಿತರಿಸುವ ಮೂಲಕ ಕೃಷಿ ಚಟುವಟಿಕೆಗಳಿಗೆ ನೈತಿಕ ಬೆಂಬಲವನ್ನು ನೀಡಬೇಕು. ರೈತರ ಅನುಕೂಲಕ್ಕಾಗಿ ಪ್ರತಿ 15 ದಿನಗಳಿಗೊಮ್ಮೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ವರದಿ ನಿರ್ವಹಿಸಬೇಕು’ ಎಂದರು.

‘ಕೋವೀಡ್-19 ತುರ್ತು ಪರಿಸ್ಥಿಯಲ್ಲಿ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ವರ್ಗದವರು ಉತ್ತಮ ಗುಣಮಟ್ಟದ ಮಾಸ್ಕ್‌ಗಳನ್ನು ಧರಿಸುವ ಮೂಲಕ ತಮ್ಮ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು. ಕಚೇರಿ ಸಿಬ್ಬಂದಿಗೆ ಏನಾದರೂ ಕೋವಿಡ್‌ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಿಕೊಂಡು ಗುಣಮುಖವಾಗುವವರಿಗೂ ಮನೆಯಿಂದಲೇ ಕಾರ್ಯವನ್ನು ನಿರ್ವಹಿಸಬೇಕು’ ಎಂದು ತಿಳಿಸಿದರು.

‘ವೈದ್ಯರು, ನರ್ಸ್‍ಗಳು, ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ಪ್ರತಿ 15 ದಿನಗಳಿಗೊಮ್ಮೆ ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ’ ಎಂದು ಸೂಚಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರೂಪಾ ಮಾತನಾಡಿ, ‘ಜಿಲ್ಲೆಯಲ್ಲಿ ರೈತರಿಗೆ ರಸಗೊಬ್ಬರಗಳ ಕೊರತೆ ಇಲ್ಲ. ಈಗಾಗಲೇ ಶೇಕಡಾ 90 ಕ್ಕಿಂತ ಹೆಚ್ಚಿನ ಬಿತ್ತನೆ ಕಾರ್ಯಗಳು ಮುಗಿದಿದೆ’ ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಉಪ ವಿಭಾಗಾಧಿಕಾರಿ ಎ.ಎನ್.ರಘುನಂದನ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ನೋಮೇಶ್, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಗಿರಿಜಾ ಶಂಕರ್, ಲೀಡ್ ಬ್ಯಾಂಕ್ ಮ್ಯಾನೇಜರ್ ಬಸವರಾಜ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT