ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದಿ ಹೇರಿಕೆ ಕೈಬಿಡಲು ಆಗ್ರಹ

ಜಿಲ್ಲಾಡಳಿತ ಭವನದ ಎದುರು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಪ್ರತಿಭಟನೆ
Last Updated 14 ಸೆಪ್ಟೆಂಬರ್ 2020, 15:17 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಹಿಂದಿಯೇತರ ಭಾಷಿಕರ ಮೇಲೆ ಸಂವಿಧಾನ ಬಾಹಿರವಾಗಿ ಹಿಂದಿ ಭಾಷೆ ಹೇರುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆರ್.ಲೋಕೇಶ್, ‘ಕೇಂದ್ರ ಸರ್ಕಾರ ಕೇವಲ ಆಂಗ್ಲ ಹಾಗೂ ಹಿಂದಿ ಭಾಷೆ ಮಾತ್ರವೇ ತನ್ನ ಆಡಳಿತ ಭಾಷೆಗಳನ್ನಾಗಿ ಮಾಡಿಕೊಂಡಿರುವುದು ದೇಶದ ಇತರೆ ಭಾಷಿಕರಿಗೆ ಹಾಗೂ ಭಾಷೆಗಳಿಗೆ ಮಾಡುತ್ತಿರುವ ಘೋರ ಅನ್ಯಾಯ, ದ್ರೋಹ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಭಾರತ ಬಹು ಭಾಷೆ, ಧರ್ಮ ಹಾಗೂ ಸಂಸ್ಕೃತಿಯ ನೆಲೆವೀಡಾಗಿದೆ. ಬಹುತ್ವ ಉಳಿದರೆ ಮಾತ್ರ ದೇಶದ ಒಕ್ಕೂಟದ ವ್ಯವಸ್ಥೆ ಉಳಿಯಲು ಸಾಧ್ಯ. ಈ ಒಕ್ಕೂಟ ವ್ಯವಸ್ಥೆ ಮೂಲ ಮಂತ್ರವನ್ನೇ ಕೇಂದ್ರದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಡೆಗಣಿಸುತ್ತಿರುವುದು ಒಕ್ಕೂಟದ ವ್ಯವಸ್ಥೆಗೆ ದೊಡ್ಡ ಅಪಾಯ ತಂದೊಡ್ಡಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಹಿಂದಿ ಭಾಷೆಗೆ ಮಾತ್ರ ಇತರೆ ಭಾಷೆಗಳಿಗಿಂತ ಮೇಲಿನ ಸ್ಥಾನ ನೀಡಿ, ಸಂವಿಧಾನಿಕ ಸಂಸ್ಥೆಗಳ ಮೂಲಕವೇ ಎಲ್ಲ ಹಿಂದಿಯೇತರ ಜನಗಳ ಮೇಲೆ ಹೇರಿಕೆ ಮಾಡುತ್ತಿರುವುದನ್ನು ತಕ್ಷಣ ನಿಲ್ಲಿಸಬೇಕು. ಹಿಂದಿ ದಿವಸ, ಸಪ್ತಾಹ ಮತ್ತಿತರ ಅರ್ಥಹೀನ ಕಾರ್ಯಕ್ರಮಗಳನ್ನು ರದ್ದುಗೊಳಿಸಬೇಕು. ಎಲ್ಲಾ ಪ್ರಾದೇಶಿಕ ಭಾಷೆಗಳಿಗೂ ಸಮಾನ ಅವಕಾಶ ಗೌರವ ನೀಡಬೇಕು’ ಎಂದು ಆಗ್ರಹಿಸಿದರು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು. ಕರವೇ ಜಿಲ್ಲಾ ಘಟಕದ ಉಪಾಧ್ಯಕ್ಷ ದೇವರಾಜ್, ಕಾರ್ಯದರ್ಶಿ ಕೆಂಪರೆಡ್ಡಿ, ಸಂಘಟನಾ ಕಾರ್ಯದರ್ಶಿ ಮುನಿರಾಜು, ಮಹಿಳಾ ಘಟಕದ ಜಿಲ್ಲಾ ಘಟಕದ ಅಧ್ಯಕ್ಷೆ ಮಂಜುಳಾ, ಚಿಂತಾಮಣಿ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಎಂ.ನಾರಾಯಣಸ್ವಾಮಿ, ಚಿಕ್ಕಬಳ್ಳಾಪುರ ತಾಲ್ಲೂಕು ಘಟಕದ ಅಧ್ಯಕ್ಷ ವಿಜಯಕುಮಾರ್, ಚಿಂತಾಮಣಿ ನಗರ ಘಟಕದ ಅಧ್ಯಕ್ಷ ಶಬ್ಬೀರ್ ಅಹಮ್ಮದ್, ಅರುಣ, ಸರೋಜಾದೇವಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT