ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆಂಗಿ, ಚಿಕನ್‌ಗುನ್ಯ: ಜಾಗೃತಿ ಮೂಡಿಸಿ

ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ಸಲಹೆ
Last Updated 29 ಮೇ 2020, 16:30 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಡೆಂಗಿ ಮತ್ತು ಚಿಕನ್‍ಗುನ್ಯ ರೋಗಗಳನ್ನು ತಡೆಗಟ್ಟಲು ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಜತೆಗೆ ಆರೋಗ್ಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡೆಂಗಿ ಮತ್ತು ಚಿಕನ್‍ಗುನ್ಯ ನಿಯಂತ್ರಿಸುವ ಬಗ್ಗೆ ಶುಕ್ರವಾರ ಹಮ್ಮಿಕೊಂಡಿದ್ದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಪ್ರದೇಶಗಳಲ್ಲಿನ ಮನೆಗೆಳಿಗೆ ಭೆಟಿ ನೀಡಿ ಸೊಳ್ಳೆಗಳ ನಿಯಂತ್ರಣ ಬಗ್ಗೆ ಅರಿವು ಮೂಡಿಸಬೇಕು. ಮಳೆಗಾಲ ಆರಂಭವಾಗಿರುವುದರಿಂದ ಚರಂಡಿ ಮತ್ತು ರಸ್ತೆಗಳಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

‘ಸೊಳ್ಳೆ ಉತ್ಪತ್ತಿ ನಿಯಂತ್ರಣಗೊಳಿಸುವ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ನಗರದ ವಿವಿಧ ಕಡೆ ನೀರಿನ ಸಂಗ್ರಹಣ ಕೇಂದ್ರಗಳ ಸ್ವಚ್ಚತೆ ಹಾಗೂ ನೀರಿನ ಪೈಪ್ ಗಳ ವ್ಯವಸ್ಥೆ ನಿಯಮಿತವಾಗಿ ಪರಿಶೀಲಿಸಿ ಸೊಳ್ಳೆಗಳ ಉತ್ಪತ್ತಿ ನಿಯಂತ್ರಣ ಮಾಡಬೇಕು’ ಎಂದು ತಿಳಿಸಿದರು.

‘ವೈಯಕ್ತಿಕ ರಕ್ಷಣೆ ಮತ್ತು ಪರಿಸರ ಬಗ್ಗೆ ತಿಳುವಳಿಕೆ ಮೂಡಿಸಬೇಕು. ಹೆಚ್ಚಾಗಿ ನೀರು ನಿಲ್ಲುವ ಕಡೆ ಲಾರ್ವಾ ಮೀನುಗಳನ್ನು ಬಿಡಬೇಕು. ಗ್ರಾಮ ಪಂಚಾಯಿತಿ ವತಿಯಿಂದ ಗಾಮದ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು’ ಎಂದು ಹೇಳಿದರು.

‘ಗ್ರಾಮಗಳಲ್ಲಿ ಮಳೆ ನೀರು ನಿಂತಿರುವ ಗುಂಡಿಗಳನ್ನು ಮುಚ್ಚಿಸಬೇಕು. ಮಳೆ ನೀರು ಸಂಗ್ರಹಣೆಯಾಗುವ ಟೈರು, ಒಡೆದ ಮಡಕೆ, ತೆಂಗಿನ ಚಿಪ್ಪುಗಳನ್ನು ವಿಲೇವಾರಿ ಮಾಡಬೇಕು. ಆರೋಗ್ಯ ಇಲಾಖೆ ಸಿಬ್ಬಂದಿ ಕೈಗೊಳ್ಳುವ ಲಾರ್ವಾ ಸಮೀಕ್ಷೆ ಹಾಗೂ ಲಾರ್ವಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು’ ಎಂದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಬಿ.ಎಂ.ಯೋಗೆಶ್ ಗೌಡ ಮಾತನಾಡಿ, ‘ಡೆಂಗಿ ಜ್ವರ ರೋಗಕ್ಕೆ ತುತ್ತಾದವರಿಗೆ ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ತೀವ್ರ ನೋವು, ಕೀಲು ನೋವು ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುತ್ತವೆ. ಈ ರೀತಿಯ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

‘ಸೊಳ್ಳೆಗಳ ನಿಯಂತ್ರಣದಿಂದ ಮಾತ್ರ ಡೆಂಗಿ ಜ್ವರ, ಮಲೇರಿಯಾ ರೋಗಗಳನ್ನು ತಡೆಗಟ್ಟಬಹುದು. ಆದ್ದರಿಂದ ತೆರೆದ ನೀರಿನ ತೊಟ್ಟಿ, ಡ್ರಂ, ಬ್ಯಾರಲ್, ಏರ್ ಕೂಲರ್‌ಗಳನ್ನು ವಾರಕ್ಕೊಮ್ಮೆ ತಪ್ಪದೇ ಖಾಲಿ ಮಾಡಿ ಒಣಗಿಸಿ ಮತ್ತೆ ನೀರು ಭರ್ತಿ ಮಾಡಿಕೊಳ್ಳಬೇಕು. ಮಣ್ಣಿನ ಮಡಿಕೆ, ಚರಂಡಿ ಟೈರ್‌ಗಳಲ್ಲಿ ನೀರು ನಿಲ್ಲದಂತೆ ನಾಗರಿಕರು ಎಚ್ಚರವಹಿಸಬೇಕು’ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಎಚ್.ನರಸಿಂಹಯ್ಯ, ಜಿಲ್ಲಾ ಆಸ್ಪತ್ರೆ ನಿವಾಸಿ ವೈದ್ಯಾಧಿಕಾರಿ ಡಾ.ರಮೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT