ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವರಾಜ ಅರಸು ಆದರ್ಶ ಅನುಕರಣೀಯ

ಅರಸು ಅವರ 104ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ಅಭಿಮತ
Last Updated 20 ಆಗಸ್ಟ್ 2019, 11:34 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದ ಸಾಮಾಜಿಕ ಹರಿಕಾರ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ 104ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಒಬ್ಬ ಆದರ್ಶ ವ್ಯಕ್ತಿಯ ಆಶಯಗಳು ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗಬಾರದು. ಸಮಾಜದ ಕಟ್ಟಕಡೆಯ ವ್ಯಕ್ತಿ ಅಭಿವೃದ್ಧಿಗೆ ಪೂರಕವಾಗಿ ಪ್ರತಿಯೊಬ್ಬರೂ ಕೆಲಸ ಮಾಡಬೇಕು. ಆ ನಿಟ್ಟಿನಲ್ಲಿ ಅರಸು ಅವರು ಉಳುವವನಿಗೆ ಭೂಮಿ ಎಂಬ ಯೋಜನೆ ಮೂಲಕ ಮಾಡಿದ ಮಹದುಪಕಾರವನ್ನು ರೈತರು ಎಂದಿಗೂ ಮರೆಯಲಾರರು’ ಎಂದು ಹೇಳಿದರು.

‘ಹಿಂದುಳಿದ ವರ್ಗಗಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಿದ ಅರಸು ಅವರು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ವಸತಿ ನಿಲಯಗಳನ್ನು ಸ್ಥಾಪಿಸಿ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಿದರು. ಜೀತ ಹಾಗೂ ಮಲ ಹೊರುವ ಪದ್ದತಿಗಳನ್ನು ನಿಷೇಧಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಅರ್ಥ ಕಲ್ಪಿಸಿದರು. ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಜಾರಿಗೆ ತರುವ ಮೂಲಕ ಸಮಾಜಮುಖಿ ಕೆಲಸ ಮಾಡಿದ್ದರು’ ಎಂದು ಸ್ಮರಿಸಿದರು.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿ.ಅಶೋಕ್ ಮಾತನಾಡಿ, ‘20 ಅಂಶಗಳ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತರುವಲ್ಲಿ ಡಿ.ದೇವರಾಜ ಅರಸು ಅವರ ಪಾತ್ರ ಮುಖ್ಯವಾಗಿದೆ. ‘ಉಳುವವನೇ ಭೂಮಿ ಒಡೆಯ’ ಎಂಬ ಶಾಸನ ಜಾರಿ ತರುವ ಮೂಲಕ ಸಹಸ್ರಾರು ಭೂಹೀನ ಜನರನ್ನು ಭೂಒಡೆಯರನ್ನಾಗಿ ಮಾಡಿದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ’ ಎಂದು ತಿಳಿಸಿದರು.

‘ಅರಸು ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಭೂಸುಧಾರಣೆ ಕಾನೂನು, ಹಾವನೂರು ಆಯೋಗ ರಚನೆ, ಮಲ ಹೊರುವ ಪದ್ಧತಿ ನಿಷೇಧ, ಉಳುವವನೇ ಭೂಮಿಯ ಒಡೆಯ ಹೀಗೆ ಹತ್ತು ಹಲವು ಸಾಮಾಜಿಕ ಸುಧಾರಣಾ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು’ ಎಂದು ಹೇಳಿದರು.

‘ಕೃಷಿಕ ಕುಟುಂಬದಲ್ಲಿ ಹುಟ್ಟಿ ಕಾರ್ಮಿಕ ವರ್ಗದ ಶೋಷಣೆಯನ್ನು ಕಣ್ಣಾರೆ ನೋಡಿದ ಅರಸು ಅವರು, ಸಮಾಜದಲ್ಲಿನ ಅಸಮಾನತೆ, ತಾರತಮ್ಯ, ಶೋಷಣೆಗಳನ್ನು ತೊಡೆದು ಹಾಕುವ ನಿಲುವು ತಳೆದು, ತಮ್ಮ ಆಡಳಿತ ಅವಧಿಯಲ್ಲಿ ಬಡವರ ಏಳಿಗೆಗಾಗಿ ದುಡಿದರು’ ಎಂದು ಅಭಿಪ್ರಾಯಪಟ್ಟರು. ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಮಾಧುರಾವ್, ಜಿಲ್ಲಾ ವಾರ್ತಾಧಿಕಾರಿ ಎಂ.ಜುಂಜಣ್ಣ, ಉದ್ಯೋಗ ವಿನಿಮಯ ಅಧಿಕಾರಿ ಪ್ರಸಾದ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT