ಭಾನುವಾರ, ಸೆಪ್ಟೆಂಬರ್ 19, 2021
24 °C
75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಸಚಿವ ಡಾ.ಕೆ.ಸುಧಾಕರ್ ವಿಶ್ವಾಸ

ಕೈಗಾರಿಕಾ ವಲಯವಾಗಿ ಜಿಲ್ಲೆ ಅಭಿವೃದ್ಧಿ; ಸಚಿವ ಡಾ.ಕೆ.ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಬೆಂಗಳೂರು ಮತ್ತು ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪವಿರುವ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರವನ್ನು ಕೈಗಾರಿಕಾ ವಲಯವಾಗಿ ಅಭಿವೃದ್ಧಿಗೊಳಿಸಬೇಕು ಎನ್ನುವ ಕನಸು ಕಂಡಿದ್ದೇವೆ. ಆ ದಿಕ್ಕಿನಲ್ಲಿ ಪ್ರಯತ್ನಗಳು ನಡೆದಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ನಗರದ ಸರ್.ಎಂ.ವಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ 75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಆರೋಗ್ಯ ಮತ್ತು ಶಿಕ್ಷಣ ಕೇಂದ್ರವನ್ನಾಗಿ ಚಿಕ್ಕಬಳ್ಳಾಪುರವನ್ನು ರೂಪಿಬೇಕು ಎಂಬ ಕನಸು ಕಂಡಿದ್ದೇನೆ. ಅದರಂತೆ ಜಿಲ್ಲೆಯ ಸಮಗ್ರ ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಸಾಕಷ್ಟು ಅವಕಾಶಗಳು ಇವೆ. ಈ ದಿಸೆಯಲ್ಲಿ ಹಲವು ರೀತಿಯ ಕೈಗಾರಿಕೆಗಳ ಅಭಿವೃದ್ಧಿಗೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜವಳಿ ಪಾರ್ಕ್ ನಿರ್ಮಾಣ ಸಂಬಂಧ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಚಿಂತಾಮಣಿ ತಾಲ್ಲೂಕು ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ 2ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿಗಾಗಿ 414.25 ಮತ್ತು 3ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿಗಾಗಿ 1,489 ಎಕರೆ ಜಮೀನು ಗುರುತಿಸಲಾಗಿದೆ. ಕೆಐಎಡಿಬಿ ಯಿಂದ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಗೌರಿಬಿದನೂರು ತಾಲ್ಲೂಕು ಕುಡುಮಲಕುಂಟೆ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ 3ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿಗಾಗಿ 839 ಎಕರೆ ಜಮೀನನ್ನು ಗುರುತಿಸಿದ್ದು ಕೆಐಎಡಿ‌ಬಿಯಿಂದ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ವೃಷಭಾವತಿ ಯೋಜನೆ ಮೂಲಕ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ನೀರು ಹರಿಸಲು ಚಿಂತನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಗೌರಿಬಿದನೂರು, ಮಂಚೇನಹಲ್ಲಿ ಮತ್ತು ಬಾಗೇಪಲ್ಲಿ ತಾಲ್ಲೂಕಿಗಳಿಗೂ ನೀರು ಹರಿಸಲಾಗುವುದು ಎಂದು ಭರವಸೆ ನೀಡಿದರು.

ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ 34,207 ಫಲಾನುಭವಿಗಳಿಗೆ ಪಿಂಚಣಿಯನ್ನು ಕಳೆದ ಎರಡು ವರ್ಷಗಳಲ್ಲಿ ಮಂಜೂರು ಮಾಡಲಾಗಿದೆ. ಶೇ 94 ರಷ್ಟು ಫಲಾನುಭವಿಗಳ ಆಧಾರ್ ಜೋಡಣಾ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ಪಿಂಚಣಿ ಯೋಜನೆಯಡಿ ಜಿಲ್ಲೆಯಲ್ಲಿ ಯಾವೊಬ್ಬ ಅರ್ಹ ವ್ಯಕ್ತಿಯೂ ವಂಚಿತರಾಗಬಾರದು ಎಂಬ ಉದ್ದೇಶದಿಂದ ಕಂದಾಯ ಇಲಾಖೆ ಪಿಂಚಣಿ ಆಂದೋಲನ ಹಮ್ಮಿಕೊಂಡು ಜಿಲ್ಲೆಯ ಎಲ್ಲ ಅರ್ಹರಿಗೂ ಪಿಂಚಣಿ ಮಂಜೂರು ಮಾಡಲು ಅಗತ್ಯ ಕ್ರಮ ಕೈಗೊಂಡಿದೆ ಎಂದು ಹೇಳಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದ 30 ವಿದ್ಯಾರ್ಥಿಗಳಿಗೆ ಸಚಿವರು ಲ್ಯಾಪ್‍ಟಾಪ್ ಮತ್ತು ಅಭಿನಂದನಾ ಪತ್ರ ವಿತರಿಸಿದರು. 

ಸಂಸದ ಬಿ.ಎನ್.ಬಚ್ಚೇಗೌಡ, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜು, ನಗರಸಭೆ ಅಧ್ಯಕ್ಷ ಆನಂದರೆಡ್ಡಿ ಬಾಬು, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು