ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮ ಪರಿಶೀಲಿಸಿದ ಜಿಲ್ಲಾಧಿಕಾರಿ

Last Updated 16 ಜುಲೈ 2020, 15:28 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಕೋವಿಡ್‌ 19 ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲಿಸುವ ದಿಸೆಯಲ್ಲಿ ಗುರುವಾರ ಜಿಲ್ಲಾಧಿಕಾರಿ ಆರ್.ಲತಾ ಅವರು ವಿವಿಧೆಡೆ ಭೇಟಿ ನೀಡಿದರು.

ಕೋವಿಡ್‌ ಪ್ರಕರಣಗಳು ವರದಿಯಾದ ಬಾಗೇಪಲ್ಲಿ ತಾಲ್ಲೂಕಿನ ದೇವರ ಗುಡಿಪಲ್ಲಿ, ಮಿಟ್ಟೇಮರಿ, ಚಿಂತಾಮಣಿ ತಾಲ್ಲೂಕಿನ ಕುರುಟಹಳ್ಳಿ, ಚಿಕ್ಕಬಳ್ಳಾಪುರ ತಾಲ್ಲೂಕಿನ ದಿಬ್ಬೂರು ಹಾಗೂ ತಿಪ್ಪೇನಹಳ್ಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಸ್ಥಳೀಯರಿಂದ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಮಾಹಿತಿ ಪಡೆದರು.

ಈ ವೇಳೆ ಮಾತನಾಡಿದ ಅವರು, ‘ಸಾರ್ವಜನಿಕರು ಸರ್ಕಾರ ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಪಾಲಿಸುವ ಜತೆಗೆ ಅನಗತ್ಯವಾಗಿ ಹೊರಗೆ ಸುತ್ತಾಡುವುದು ನಿಲ್ಲಿಸಬೇಕು. ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು. ಚಿಕ್ಕ ಮಕ್ಕಳು, ವೃದ್ಧರ ಬಗ್ಗೆ ಕಾಳಜಿ ಮಾಡಬೇಕು’ ಎಂದು ತಿಳಿಸಿದರು.

‘ಹೊರ ಜಿಲ್ಲೆಗಳಿಂದ ಜಿಲ್ಲೆಗೆ ವಾಪಾಸಾಗಿರುವವರು ಕಡ್ಡಾಯವಾಗಿ ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಳ್ಳಬೇಕು. ವರದಿ ಬರುವವರೆಗೂ ಕ್ವಾರಂಟೈನ್‌ಗೆ ಒಳಗಾಗಬೇಕು. ಇತರ ಜಿಲ್ಲೆಗಳಿಗೆ ಹೋಲಿಸಿದರೆ ನಮ್ಮ ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಪ್ರಮಾಣ ಕಡಿಮೆ ಇದೆ. ಆದರೆ ಸೋಂಕು ಹಳ್ಳಿಗಳಿಗೆ ಹಬ್ಬುತ್ತಿರುವುದು ಆತಂಕದ ಸಂಗತಿ’ ಎಂದು ಕಳವಳ ವ್ಯಕ್ತಪಡಿಸಿದರು.

‘ಕೋವಿಡ್‌ ಪೀಡಿತ ಪ್ರದೇಶಗಳಲ್ಲಿ ಯಾರೂ ಮನೆಯಿಂದ ಹೊರಗೆ ಬರದೆ ಕೊರೊನಾ ಸೋಂಕು ನಿಯಂತ್ರಣಕ್ಕೆ ಸಹಕಾರ ನೀಡಬೇಕು. ಒಂದು ವೇಳೆ ಯಾರಾದರೂ ಅನಾವಶ್ಯಕವಾಗಿ ಮನೆಯಿಂದ ಹೊರಗೆ ಬಂದರೆ ದಂಡ ವಿಧಿಸುವ ಜತೆಗೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ನಗರದದ ಮಾದರಿಯಲ್ಲಿಯೇ ಪ್ರತಿಯೊಂದು ಗ್ರಾಮದಲ್ಲಿಯೂ ಗ್ರಾಮ ಮಟ್ಟದ ಕಾರ್ಯಪಡೆ ರಚನೆ ಮಾಡಿದ್ದು, ಅವು ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿವೆ ಎಂಬುದನ್ನು ಗಮನಿಸುತ್ತಿದ್ದೇವೆ. ಹಳ್ಳಿಗಳಲ್ಲಿ ಸೋಂಕಿನ ಸರಪಳಿ ತುಂಡರಿಸುವುದು ನಮ್ಮ ಮೊದಲ ಆದ್ಯತೆಯಾಗಬೇಕು. ಆ ಮೂಲಕ ಕೋವಿಡ್ ನಿಯಂತ್ರಿಸಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ‘ಸ್ಥಳಿಯ ಮಟ್ಟದ ಕಾರ್ಯಪಡೆ ಸಮಿತಿಗಳು ಹಾಗೂ ಸ್ವಯಂ ಸೇವಕರು ಹಳ್ಳಿಗಳಲ್ಲಿ ಖುದ್ದಾಗಿ ಭೇಟಿ ನೀಡಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ತಂಡಗಳಾಗಿ ವಿಂಗಡಣೆ ಮಾಡಿಕೊಂಡು ಕಾರ್ಯನಿರ್ವಹಿಸಬೇಕು’ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಚಿಂತಾಮಣಿ ತಹಶೀಲ್ದಾರ್ ಹನುಮಂತರಾಯಪ್ಪ, ಚಿಕ್ಕಬಳ್ಳಾಪುರ ತಹಶೀಲ್ದಾರ್ ನಾಗಪ್ರಶಾಂತ್, ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್, ಬಾಗೇಪಲ್ಲಿ ತಹಶೀಲ್ದಾರ್ ನಾಗರಾಜು, ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಸ್ವಾಮಿ, ಕೋವಿಡ್ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಉದ್ಯೋಗಾಧಿಕಾರಿ ಎಂ.ಪ್ರಸಾದ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT