ಗುರುವಾರ , ಜನವರಿ 21, 2021
23 °C
ಬೋದಗೂರು ಕೆರೆ ಪುನಶ್ಚೇತನ ಆರಂಭ; ಸಂರಕ್ಷಣೆಗೆ ಜನಜಾಗೃತಿ

ಶಿಡ್ಲಘಟ್ಟ: ‘ನಮ್ಮೂರು ನಮ್ಮ ಕೆರೆ’ಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಡ್ಲಘಟ್ಟ: ‘ಕೆರೆಕಟ್ಟೆಗಳು ನಾಡಿನ ಜೀವನಾಡಿ. ರೈತಾಪಿ ಜನರ ಉಸಿರು. ಇವನ್ನು ಈಗಂತೂ ನಿರ್ಮಿಸಲು ಆಗದು. ಹಾಗಾಗಿ ಇರುವುದನ್ನು ಉಳಿಸಿಕೊಳ್ಳಲೇಬೇಕು. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡ ಕೆರೆಗಳ ಅಭಿವೃದ್ಧಿ ಕಾಮಗಾರಿಗಳಿಂದ ಜನರ ಆರ್ಥಿಕ ಅಭಿವೃದ್ಧಿ ಆಗುತ್ತಿದೆ’ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಜಶೇಖರ್ ತಿಳಿಸಿದರು.

ತಾಲ್ಲೂಕಿನ ಬೋದಗೂರು ಕೆರೆಯಲ್ಲಿ ಶುಕ್ರವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೋದಗೂರು ಕೆರೆ ಬಳಕೆದಾರರ ಸಂಘ ಹಾಗೂ ಆನೂರು ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿಯಲ್ಲಿ ಕೆರೆಯ ಪುನಶ್ಚೇತನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದಡಿ ಕೆರೆಯ ಹೂಳೆತ್ತಿ ಅವುಗಳಿಗೆ ಮರುಜೀವ ನೀಡಿ ಊರಿನವರಿಗೆ ವರ್ಗಾಯಿಸಲಾಗುತ್ತದೆ. ಈ ಮೂಲಕ ಕೆರೆಯ ಮಹತ್ವ, ಅಗತ್ಯ, ಕೆರೆ ಸಂರಕ್ಷಣೆಯ ಕುರಿತ ಜಾಗೃತಿಯನ್ನು ಮೂಡಿಸುವ ಅಪೂರ್ವ ಕೆಲಸವೊಂದನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ. ನಮ್ಮ ಗ್ರಾಮಗಳ ಜೀವನಾಡಿ ಕೆರೆಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ’ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಬಿ.ವಸಂತ್ ಮಾತನಾಡಿ, ‘ಅಂತರ್ಜಲ ಮಟ್ಟ ಕುಸಿತದ ಗಂಭೀರ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರು ಶಾಶ್ವತ ಪರಿಹಾರವೆಂಬಂತೆ 2016ರಲ್ಲಿ ‘ನಮ್ಮೂರು ನಮ್ಮ ಕೆರೆ’ ಯೋಜನೆ ಪ್ರಾರಂಭಿಸಿರುವರು. 4 ವರ್ಷಗಳಿಂದ ಕೆರೆಗಳ ಪುನಶ್ಚೇತನ ಕಾರ್ಯಕ್ರಮ ನಡೆಯುತ್ತಿದೆ. ಈ ಮಳೆಗಾಲದಲ್ಲಿ ಎಲ್ಲ ಕೆರೆಗಳು ತುಂಬಿವೆ. ಇದರಿಂದಾಗಿ ಬತ್ತಿ ಹೋಗಿದ್ದ ಅನೇಕ ಕೊಳವೆ ಬಾವಿಗಳೂ ಮರುಜೀವ ಪಡೆದುಕೊಂಡಿವೆ. ರೈತರು ಕೃಷಿ ಕಾರ್ಯ ಪ್ರಾರಂಭಿಸಿದ್ದಾರೆ. ಜಾನುವಾರು, ಪ್ರಾಣಿ, ಪಕ್ಷಿಗಳ ನೀರಿನ ಸಮಸ್ಯೆಯೂ ನಿವಾರಣೆಯಾಗಿದೆ’ ಎಂದು ಹೇಳಿದರು.

ಕೆರೆ ಸಮಿತಿ ಅಧ್ಯಕ್ಷ ಬೋದಗೂರು ವೆಂಕಟಸ್ವಾಮಿರೆಡ್ಡಿ, ಗ್ರಾಮ ಪಂಚಾಯಿತಿ ಪಿಡಿಒ ಕಾತ್ಯಾಯಿನಿ, ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಬೆಳ್ಳೂಟಿ ಸಂತೋಷ್, ರಮೇಶ್, ದೊಡ್ಡಮಾರಪ್ಪ, ವಿಶ್ವಾಸ್, ಅರುಣ, ಪ್ರಕಾಶ್, ಮುನಿಯಪ್ಪ, ಸುರೇಶ್, ಪ್ರಭಾಕರ್, ಕೃಷಿ ಅಧಿಕಾರಿ ಹರೀಶ್, ಮೇಲ್ವಿಚಾರಕಿ ಜ್ಯೋತಿ, ಸೇವಾ
ಪ್ರತಿನಿಧಿ ವೆಂಕಟಲಕ್ಷ್ಮಿ, ಮುನಿರತ್ನ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು