ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೊಲ್ಲರಹಟ್ಟಿಗೆ ಸಂಸದರ ಪ್ರವೇಶ ನಿರಾಕರಣೆ: ಜಾತಿ ನಿಂದನೆ ಪ್ರಕರಣ ದಾಖಲಿಸಲು ಆಗ್ರಹ

ಪ್ರವೇಶ ನಿರಾಕರಣೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರ ಪ್ರತಿಭಟನೆ
Last Updated 18 ಸೆಪ್ಟೆಂಬರ್ 2019, 12:14 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿಗೆ ಸಂಸದ ಎ.ನಾರಾಯಣಸ್ವಾಮಿ ಅವರನ್ನು ಪ್ರವೇಶಿಸಲು ನಿರಾಕರಿಸಿದವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ಭವನದದಿಂದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಕೆಲ ಹೊತ್ತು ರಸ್ತೆ ತಡೆ ನಡೆಸಿದರು.

ಈ ವೇಳೆ ಮಾತನಾಡಿದ ಸಮಿತಿಯ ರಾಜ್ಯ ಘಟಕದ ಸಂಚಾಲಕ ಬಿ.ಎನ್.ಗಂಗಾಧರಪ್ಪ, ‘ಪೆಮ್ಮನಹಳ್ಳಿ ಗ್ರಾಮಸ್ಥರಿಗೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸಂಸದ ನಾರಾಯಣಸ್ವಾಮಿ ಅವರು ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಸಂಸದರನ್ನು ತಡೆದು, ದಲಿತರು ಎಂಬ ನೆಪ ಒಡ್ಡಿ ಗ್ರಾಮದ ಪ್ರವೇಶಕ್ಕೆ ನಿರಾಕರಿಸಿರುವುದು ಅಮಾನವೀಯ ಮತ್ತು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ದಲಿತರು ಗ್ರಾಮ ಪ್ರವೇಶ ಮಾಡಿದರೆ ದೇವರಿಗೆ ಮೈಲಿಗೆ ಆಗುತ್ತದೆ ಎಂದು ಪೂರ್ವಜರಿಂದ ಆಚರಿಸಿಕೊಂಡು ಬಂದ ಅಸ್ಪೃಶ್ಯತೆಯ ಮೌಢ್ಯ ಆಚರಣೆಯನ್ನು ಇಂದಿಗೂ ಮುಂದುವರಿಸಿಕೊಂಡು ಬಂದಿರುವುದು ಅಕ್ಷಮ್ಯ. ಇಂತಹ ಅನಿಷ್ಟ ಪದ್ಧತಿಯನ್ನು ಆಚರಿಸಿದ ಮುಖಂಡರ ಮೇಲೆ ಜಾತಿ ನಿಂದನೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿ, ಗ್ರಾಮದಿಂದ ಗಡಿಪಾರು ಮಾಡಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯದಲ್ಲಿ ಇಂದಿಗೂ ಅಸ್ಪೃಶ್ಯತೆ ಜೀವಂತವಾಗಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ದಲಿತರ ಮೇಲಿನ ಶೋಷಣೆ, ಅಸ್ಪೃಶ್ಯತೆ ಆಚರಣೆ ಮಾಡುವುದು ಶಿಕ್ಷಾರ್ಹ ಅಪರಾಧ ಎಂದೂ ತಿಳಿದಾಗಲೂ ಇಂತಹ ನೀಚ ಕೆಲಸ ನಡೆದಿರುವುದು ಖಂಡನೀಯ’ ಎಂದು ಹೇಳಿದರು.

‘ಸರ್ಕಾರ ಮತ್ತು ಜಿಲ್ಲಾಡಳಿತ ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಗೊಲ್ಲರಹಟ್ಟಿ ಗ್ರಾಮಕ್ಕೆ ಸಾಮೂಹಿಕವಾಗಿ ಪ್ರವೇಶ ಮಾಡಬೇಕಾಗುತ್ತದೆ. ಇದರಿಂದ ಮುಂದೆ ನಡೆಯುವ ಅನಾಹುತಗಳಿಗೆ ಸರ್ಕಾರ ಹಾಗೂ ಅಧಿಕಾರಿಗಳೇ ಹೊಣೆ ಹೊರಬೇಕು’ ಎಂದು ಎಚ್ಚರಿಕೆ ನೀಡಿದರು.

ದಲಿತ ಮುಖಂಡರಾದ ಡಿ.ಎಂ.ನರಸಿಂಹಯ್ಯ, ಎಂ.ಪೆದ್ದಣ್ಣ, ಕೋಡಿಗಲ್ ರಮೇಶ್, ನಾರಾಯಣಸ್ವಾಮಿ, ಎಂ.ಕೇಶವ, ಎನ್.ಶ್ರೀನಿವಾಸ್, ವಿ.ಮಂಜುನಾಥ್, ವರದನಹಳ್ಳಿ ವೆಂಕಟೇಶ್, ಜಿ.ಸಿ.ವೆಂಕಟೇಶ್, ಕಡೇಹಳ್ಳಿ ಕದಿರಪ್ಪ, ಅರುಣ್‍ಕುಮಾರ್, ವೆಂಕಟರಮಣಪ್ಪ, ಪಿ.ಸಿ.ವೆಂಕಟೇಶ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT