ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರಕಾರ್ಮಿಕರ ಸುರಕ್ಷತೆಗೆ ಒತ್ತು ನೀಡಿ

ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿಕೊಂಡ ಬೆನ್ನಲ್ಲೇ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಡಾ.ಕೆ.ಸುಧಾಕರ್
Last Updated 10 ಏಪ್ರಿಲ್ 2020, 12:51 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಕೊರೊನಾ ವೈರಸ್‌ ಸೋಂಕಿನ ಭೀತಿಯ ನಡುವೆಯೂ ಬದ್ಧತೆಯಿಂದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪೌರಕಾರ್ಮಿಕರ ಆರೋಗ್ಯ ಕಾಪಾಡಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು’ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಸ್ಥಾನ ದೊರೆತ ಬೆನ್ನಲ್ಲೇ ಶುಕ್ರವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸುಧಾಕರ್ ಅವರು ಸಭೆಯಲ್ಲಿ ಕೋವಿಡ್-19 ನಿಯಂತ್ರಣ, ಕುಡಿಯುವ ನೀರು, ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಬರಪೀಡಿತ ತಾಲ್ಲೂಕುಗಳ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

‘ಪ್ರತಿಯೊಬ್ಬ ಪೌರ ಕಾರ್ಮಿಕರಿಗೆ ಕಡ್ಡಾಯವಾಗಿ ಮುಖಗವಸು, ಸ್ಯಾನಿಟೈಸರ್ ಮತ್ತು ಸುರಕ್ಷಾ ಸಲಕರಣೆಗಳನ್ನು ಒದಗಿಸುವ ಜತೆಗೆ ಊಟದ ವ್ಯವಸ್ಥೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಎಲ್ಲ ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಚುರುಕಾಗಿ ಕಾರ್ಯನಿರ್ವಹಿಸಿ ಅಭಿವೃದ್ಧಿಯ ವೇಗ ಹೆಚ್ಚಿಸಬೇಕು. ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಗೆ ಹಾಗೂ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು’ ಎಂದು ಹೇಳಿದರು.

‘ಗೌರಿಬಿದನೂರು, ಚಿಕ್ಕಬಳ್ಳಾಪುರ ಮತ್ತು ಶಿಡ್ಲಘಟ್ಟ ತಾಲ್ಲೂಕುಗಳನ್ನು ಕೇಂದ್ರ ಸರ್ಕಾರದ ಬರಪೀಡಿತ ತಾಲ್ಲೂಕುಗಳ ಮಾರ್ಗಸೂಚಿಗಳ ಅನ್ವಯ ಬರಪೀಡಿತ ಎಂದು ಘೋಷಣೆ ಮಾಡಿಲ್ಲ. ಇತ್ತೀಚೆಗೆ ನಡೆದ ಸಚಿವ ಸಂಪುಟದಲ್ಲಿ ಈ ತಾಲ್ಲೂಕುಗಳಿಗೆ ತಲಾ ₹ 1 ಕೋಟಿ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ ನಂತರ, ಮೊದಲ ಹಂತದಲ್ಲಿ ₹50 ಲಕ್ಷ ನೀಡಲು ರಾಜ್ಯ ಸರ್ಕಾರ ಒಪ್ಪಿದೆ’ ಎಂದು ತಿಳಿಸಿದರು.

‘ಲಾಕ್‌ಡೌನ್ ಮತ್ತು ಬರಗಾಲದ ಕಾರಣದಿಂದಾಗಿ ತರಕಾರಿ, ಹೂ, ಹಣ್ಣು ಮತ್ತು ದ್ರಾಕ್ಷಿ ಸೇರಿದಂತೆ ವಿವಿಧ ತೋಟಗಾರಿಕಾ ಬೆಳೆಗಾರರಿಗೆ ಆಗಿರುವ ನಷ್ಟದ ಪ್ರಮಾಣವನ್ನು ಅಂದಾಜಿಸಿ ನಾಲ್ಕೈದು ದಿನಗಳ ಒಳಗಾಗಿ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಬೇಕು’ ಎಂದು ಸಚಿವರು ತೋಟಗಾರಿಕೆ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.

‘ಜಿಲ್ಲೆಯಲ್ಲಿ ಕುಡಿಯವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಅಗತ್ಯವಿದ್ದಲ್ಲಿ ರೈತರ ಖಾಸಗಿ ಕೊಳವೆ ಬಾವಿಗಳನ್ನು ಬಳಸಿಕೊಳ್ಳಬೇಕು. ಒಂದು ವೇಳೆ ಖಾಸಗಿ ಕೊಳವೆ ಬಾವಿಗಳು ಲಭ್ಯ ಇರದಿದ್ದರೆ ಖಾಸಗಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಬೇಕು. ಪ್ರತಿ ಟ್ಯಾಂಕರ್‌ಗೆ ಕಡ್ಡಾಯವಾಗಿ ಜಿಪಿಎಸ್ ಉಪಕರಣ ಅಳವಡಿಸಬೇಕು’ ಎಂದು ಹೇಳಿದರು.

‘ಸರ್ಕಾರ ಉಚಿತವಾಗಿ ಪೂರೈಸುವ ಪಡಿತರ ಧಾನ್ಯಗಳನ್ನು ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಸಮರ್ಪಕವಾಗಿ ವಿತರಿಸಬೇಕು. ಕೆಲ ಅಂಗಡಿಗಳಲ್ಲಿ ಜನರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಅಂತಹ ಅಂಗಡಿಗಳ ಪರವಾನಗಿ ರದ್ದು ಮಾಡಲು ಕ್ರಮ ಕೈಗೊಳ್ಳಬೇಕು’ ಎಂದು ಸುಧಾಕರ್ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT