ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುದ್ಧ ನೀರು, ನೈರ್ಮಲ್ಯಕ್ಕೆ ಒತ್ತುನೀಡಿ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Last Updated 21 ಮಾರ್ಚ್ 2020, 14:37 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಮಾರಣಾಂತಿಕ ಕೋವಿಡ್‌–19 ಸೇರಿದಂತೆ ಅನೇಕ ಸಾಂಕ್ರಾಮಿಕ ರೋಗಗಳು ಹರಡುತ್ತಿರುವ ಕಾರಣ ಜಿಲ್ಲೆಯಲ್ಲಿ ಅಧಿಕಾರಿಗಳು ಶುದ್ಧ ಕುಡಿಯುವ ನೀರು ಪೂರೈಸಲು ಮತ್ತು ನೈರ್ಮಲ್ಯ ಕಾಪಾಡಿಕೊಳ್ಳಲು ಒತ್ತು ನೀಡಿ ಕೆಲಸ ಮಾಡಬೇಕು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಗ್ರಾಮೀಣ ಪ್ರದೇಶಗಳಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸುವ ಮೂಲಕ ಶುಚಿತ್ವ ಕಾಪಾಡಿಕೊಳ್ಳಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತುರ್ತಾಗಿ ಗಮನ ಹರಿಸಬೇಕು’ ಎಂದು ತಾಕೀತು ಮಾಡಿದರು.

‘ಈಗಾಗಲೇ ರಾಜ್ಯದಲ್ಲಿ ಕೋವಿಡ್‌ ಜತೆಗೆ ಕಾಲರಾ, ಮಲೇರಿಯಾ, ಮಂಗನಕಾಯಿಲೆ ಸೇರಿದಂತೆ ಅನೇಕ ಸಾಂಕ್ರಾಮಿಕ ರೋಗಗಳು ಹರಡುತ್ತಿವೆ. ಇವುಗಳನ್ನು ತಡೆಗಟ್ಟುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು’ ಎಂದು ತಿಳಿಸಿದರು.

‘ಕೊರೊನಾ ವೈರಸ್‌ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ತುರ್ತಾಗಿ ಮೂರನೇ ಹಂತದಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವ ಅಗತ್ಯವಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಆಶಾ ಕಾರ್ಯಕರ್ತೆಯರ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಮನೆಗೆ ಅರಿವು ಮೂಡಿಸುವ ಕೆಲಸ ಮಾಡಬೇಕು. ಸಮಾಜದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಬೇಕು’ ಎಂದು ಹೇಳಿದರು.

‘ಸರ್ಕಾರ ಪ್ರತಿಬಂಧಕಾಜ್ಞೆ ತೆರವುಗೊಳಿಸುವ ವರೆಗೆ ಜಿಲ್ಲೆಯಲ್ಲಿ ಸಭೆ, ಸಮಾರಂಭ, ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳನ್ನು ನಿಷೇಧಿಸಬೇಕು. ಸಾಮಾಜಿಕ ಅಂತರದ ಬಗ್ಗೆ ಜನರಲ್ಲಿ ತಿಳುವಳಿಕೆ ಮೂಡಿಸುವ ಕೆಲಸ ಮಾಡಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು ಏನಾದರೂ ಕೊರತೆ, ಸಮಸ್ಯೆಗಳು ಇದ್ದರೆ ನನ್ನ ಗಮನಕ್ಕೆ ತರಬೇಕು’ ಎಂದು ಸೂಚಿಸಿದರು.

‘ಮಾರ್ಚ್‌ನಲ್ಲಿಯೇ ಬೇಸಿಗೆ ತಾಪಮಾನ ಹೆಚ್ಚುತ್ತಿದೆ. ಆದ್ದರಿಂದ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ನೀರಿನ ಸಮಸ್ಯೆ ತಲೆದೋರಿದ ಕಡೆಗಳಲ್ಲಿ ಆದ್ಯತೆ ಮೇರೆಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಪೂರೈಕೆ ಮಾಡಬೇಕು. ಖಾಸಗಿ ಕೊಳವೆ ಬಾವಿ ಲಭ್ಯವಿರದ ಪ್ರದೇಶಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಟ್ಯಾಂಕರ್ ನೀರು ಪೂರೈಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು, ಜಿಲ್ಲಾಧಿಕಾರಿ ಆರ್.ಲತಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಉಪ ವಿಭಾಗಾಧಿಕಾರಿ ರಘುನಂದನ್ ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT