ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭವನ ನಿರ್ಮಾಣ, ಅಧ್ಯಯನ ಕೇಂದ್ರ ಸ್ಥಾಪನೆ: ಡಾ.ಕೆ.ಸುಧಾಕರ್

ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನ ರಾಮ್ ಜಯಂತಿ ಕೊಡುಗೆ: ಸಚಿವ ಡಾ.ಕೆ.ಸುಧಾಕರ್
Last Updated 5 ಏಪ್ರಿಲ್ 2022, 4:20 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಮ್ ರಂತಹ ಮಹಾನ್ ನಾಯಕರ ಭವನಗಳನ್ನು ಜಿಲ್ಲಾ ಮಟ್ಟದಲ್ಲಿ ನಿರ್ಮಿಸಿ, ಅವರ ಹೆಸರಿನಲ್ಲಿ ಪ್ರತ್ಯೇಕವಾಗಿ ಅಧ್ಯಯನ ಕೇಂದ್ರಗಳನ್ನು ತೆರೆಯಲಾಗುವುದು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಗರದ ಜೈ ಭೀಮ್ ಪದವಿ ಬಾಲಕರ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ ಕುರಿತು ಜಿಲ್ಲೆ ದಲಿತ ಮುಖಂಡರೊಂದಿಗೆ ಸೋಮವಾರ ಏರ್ಪಡಿಸಿದ್ದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ ರಾಮ್ ಅವರ ಹೆಸರಿನಲ್ಲಿ ಜಿಲ್ಲಾ ಕೇಂದ್ರದಲ್ಲಿ ಅಧ್ಯಯನ ಕೇಂದ್ರಗಳನ್ನು ತೆರೆಯುವ ಮೂಲಕ ಅವರ ಆದರ್ಶಗಳು, ಆಶಯಗಳು ಮುಂದಿನ ಪೀಳಿಗೆಯವರಿಗೂ ಚಿರಸ್ಥಾಯಿಯಾಗಿ ಉಳಿಸಲಾಗುತ್ತದೆ. ಈ ನಿಟ್ಟಿನಲ್ಲಿ ಅವರ ಅಧ್ಯಯನ ಮಾಡುವುದುನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಅವರ ವಿಚಾರಧಾರೆಗಳನ್ನು ಅಳವಡಿಸಿಕೊಂಡು ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯಬೇಕಿದೆ’ ಎಂದರು.

‘ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಭವನ ನಿರ್ಮಾಣಕ್ಕಾಗಿ ಕನಿಷ್ಠ ಒಂದು ಎಕರೆ ಜಮೀನನ್ನು ನೀಡಬೇಕೆಂದು ಜಿಲ್ಲಾಡಳಿತಕ್ಕೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಅದರಂತೆ ಏಪ್ರಿಲ್ 14 ರಂದು ನಡೆಯುವ ಅಂಬೇಡ್ಕರ್ ಜಯಂತಿಯಂದು ಜಿಲ್ಲಾಡಳಿತವು ಜಮೀನನ್ನು ಗುರುತಿಸಿ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸುತ್ತದೆ’ ಎಂದರು.

‘ಡಾ.ಬಾಬು ಜಗಜೀವನ ರಾಮ್ಅವರ ಜಿಲ್ಲಾಮಟ್ಟದ ಭವನ ನಿರ್ಮಾಣಕ್ಕೆ ಸರ್ಕಾರ ಈಗಾಗಲೇ ಸುಮಾರು ₹3.50 ಕೋಟಿ ಅನುದಾನ ಬಿಡುಗಡೆಗೊಳಿಸಿದೆ. ಏಪ್ರಿಲ್ 5ರಂದು ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿ ಅತ್ಯಂತ ವಿಭಿನ್ನ ಹಾಗೂ ವಿನೂತನವಾಗಿ ಭವನ ನಿರ್ಮಿಸಲಾಗುವುದು’ ಎಂದು ಹೇಳಿದರು.

‘ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು ಏಪ್ರಿಲ್ 5ರಂದು ನಗರ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಎಂದಿನಂತೆ ಸಾಂಕೇತಿಕವಾಗಿ ಸರಳವಾಗಿ ಆಚರಿಸಲಾಗುತ್ತದೆ. ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯ ದಿನವನ್ನು ಸಂಭ್ರಮದಿಂದ ಆಚರಿಸಲಾಗುವುದು’ ಎಂದು ತಿಳಿಸಿದರು.

ಸಭೆಗೆ ಮುನ್ನಾ ಜೈ ಭೀಮ್ ಪದವಿ ಬಾಲಕರ ವಿದ್ಯಾರ್ಥಿ ನಿಲಯದ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಲಾಗುತ್ತದೆ. ವಿದ್ಯಾರ್ಥಿ ನಿಲಯದ ಆವರಣದಲ್ಲಿಸ್ವಚ್ಛತೆ ಕುರಿತು ಸ್ಥಳ ಪರಿಶೀಲನೆ ನಡೆಸಿ ಆವರಣದಲ್ಲಿಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಕರ್ನಾಟಕ ರಾಜ್ಯ ಮಾವು ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಕೆ.ವಿ.ನಾಗರಾಜು, ನಗರಸಭೆ ಅಧ್ಯಕ್ಷ ಆನಂದರೆಡ್ಡಿ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್, ಜಿಲ್ಲೆಯ ದಲಿತ ಮುಖಂಡರು, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT