ಭಾನುವಾರ, ಜೂಲೈ 5, 2020
27 °C
ಜಿಲ್ಲೆಯಲ್ಲಿ ‘ಅಂತರ್ಜಲ ಚೇತನ’ ಯೋಜನೆಗೆ ಚಾಲನೆ ನೀಡಿದ ಗಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ

ಅಂತರ್ಜಲ ವೃದ್ಧಿಗೆ ರೈತರು ಕೈಜೋಡಿಸಿ: ಕೆ.ಎಸ್ ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಅಡಿಯ ’ಅಂತರ್ಜಲ ಚೇತನ‘ ಯೋಜನೆಯಲ್ಲಿ ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಹಾಗೂ ಎಫ್.ಇ.ಎಸ್ ಸಂಸ್ಥೆ ಸಹಯೋಗದಲ್ಲಿ ಕೈಗೆತ್ತಿಕೊಂಡ ಅಂತರ್ಜಲ ವೃದ್ಧಿ ಕಾಮಗಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ಮಂಗಳವಾರ ಚಾಲನೆ ನೀಡಿದರು.

ತಾಲ್ಲೂಕಿನ ಗವಿಗಾನಹಳ್ಳಿಯಲ್ಲಿ ಅಂತರ್ಜಲ ಚೇತನ ಹಾಗೂ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಸಚಿವರು, ಬಳಿಕ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅಂತರ್ಜಲ ಚೇತನ ಯೋಜನೆ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಈಶ್ವರಪ್ಪ, ’ಅಂತರ್ಜಲ ವೃದ್ಧಿಸುವ ನಿಟ್ಟಿನಲ್ಲಿ ನರೇಗಾ ಯೋಜನೆಯಡಿ ಬದು ನಿರ್ಮಾಣ ಕಾಮಗಾರಿಯನ್ನು ಇದೇ ಮೊದಲ ಬಾರಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಅಭಿಯಾನದ ಮಾದರಿಯಲ್ಲಿ ಕೈಗೆತ್ತಿಕೊಳ್ಳಲಾಗಿದೆ. ರೈತರು ಬದು ನಿರ್ಮಾಣಕ್ಕೆ ಒತ್ತು ನೀಡುವ ಮೂಲಕ ಅಂತರ್ಜಲ ಹೆಚ್ಚಳಕ್ಕೆ ಕೈಜೋಡಿಸಬೇಕು‘ ಎಂದು ಹೇಳಿದರು.

’ಅಂತರ್ಜಲ ಚೇತನ ಯೋಜನೆಯಿಂದ ಅಂತರ್ಜಲ ವೃದ್ಧಿಸುವ ಜತೆಗೆ ಗ್ರಾಮೀಣ ಭಾಗದ ಜನರಿಗೆ ಉದ್ಯೋಗಗಳು ಸಹ ದೊರೆಯಲಿವೆ. ನರೇಗಾ ಕೂಲಿ ಹಣವನ್ನು ಪ್ರತಿ ದಿನಕ್ಕೆ ₹249 ರಿಂದ ₹275ಕ್ಕೆ ಹೆಚ್ಚಿಸಲಾಗಿದೆ. ಕೆಲಸ ಮಾಡಲು ಬಯಸುವ ಪ್ರತಿಯೊಬ್ಬರಿಗೂ ಕೆಲಸ ನೀಡಲಾಗುತ್ತದೆ‘ ಎಂದು ತಿಳಿಸಿದರು.

’ನರೇಗಾ ಅನುಷ್ಠಾನದಲ್ಲಿ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಅಂತರ್ಜಲ ಚೇತನ ಯೋಜನೆಯಡಿ ನದಿ ಪುನಃಶ್ಚೇತನಕ್ಕಾಗಿ 5,760, ಜಲಾಮೃತ -ಜಲಾನಯನ ಅಭಿವೃದ್ಧಿಯಡಿ 2,129 ಹಾಗೂ ಜಲ ಸಂರಕ್ಷಣೆಯಡಿ 8,090 ಸೇರಿದಂತೆ 15,979 ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ‘ ಎಂದರು.

ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ’ಜಿಲ್ಲಾಡಳಿತದ ಪರಿಣಾಕಾರಿ ಕ್ರಮಗಳಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಗ್ರಹ ಮಾಡಲಾಗುತ್ತಿದೆ. ಇದು ಇದೇ ರೀತಿ ಮುಂದುವರೆಯಬೇಕಾದರೆ ನಾವೆಲ್ಲರೂ ಶಿಸ್ತು ಕಾಪಾಡಿಕೊಳ್ಳಬೇಕು‘ ಎಂದು ತಿಳಿಸಿದರು.

ಸಂಸದ ಬಿ.ಎನ್ ಬಚ್ಚೇಗೌಡ ಮಾತನಾಡಿ, ’ನಮ್ಮ ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಅಧಿಕಾರಿಗಳು ಶ್ರಮವಹಿಸುತ್ತಿರುವುದು ಶ್ಲಾಘನೀಯ. ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಅಧಿಕಾರಿಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು‘ ಎಂದು ಹೇಳಿದರು.

ಶಾಸಕ ಜೆ.ಕೆ ಕೃಷ್ಣಾರೆಡ್ಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತ ಅನಿರುದ್ಧ್ ಶ್ರವಣ್, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೆ.ಕೆ.ಮಿಥುನ್ ಕುಮಾರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು