ಚಿಕ್ಕಬಳ್ಳಾಪುರ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿ ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟಿಸಿದರು.
ನಗರದ ಒಕ್ಕಲಿಗರ ಕಲ್ಯಾಣ ಮಂಟಪದ ಬಳಿ ಸೇರಿದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಶಿಡ್ಲಘಟ್ಟ ವೃತ್ತದವರೆಗೆ ಮೆರವಣಿಗೆ ನಡೆಸಿದರು. ಬಿಜೆಪಿ, ಜೆಡಿಎಸ್ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾಜ್ಯಪಾಲರು ಕೇಂದ್ರ ಸರ್ಕಾರ ಕೈಗೊಂಬೆ ಎಂದು ಟೀಕಿಸಿದರು. ಬಿಜೆಪಿ ಗುಲಾಮ ಎಂದು ಬರೆದಿದ್ದ ರಾಜ್ಯಪಾಲರ ಭಾವಚಿತ್ರಕ್ಕೆ ಮಸಿ ಬಳಿದರು.
ಸಂವಿಧಾನ ರಕ್ಷಕರಿಂದಲೇ ಸಂವಿಧಾನ ವಿರೋಧಿ ನಡೆ, ಕಿಯೋನಿಕ್ಸ್ ಹಗರಣದಲ್ಲಿ ₹ 1,500 ಕೋಟಿ ಲೂಟಿ ಹೊಡೆದ ಬಿಜೆಪಿ, ಗುರು ರಾಘವೇಂದ್ರ ಬ್ಯಾಂಕ್ ಲೂಟಿ–ಹೀಗೆ ಬಿಜೆಪಿ ಆಡಳಿತದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಹಗರಣಗಳ ಫ್ಲೆಕ್ಸ್‌ಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು. ಯುವಕಾಂಗ್ರೆಸ್ ಕಾರ್ಯಕರ್ತರು ಅರೆ ಬೆತ್ತಲೆಯಾಗಿ ರಸ್ತೆಯಲ್ಲಿ ಕುಳಿತರು.
ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ರಾಜ್ಯಪಾಲರ ಸ್ಥಾನ ಗೌರವಯುತವಾದುದು. ಆದರೆ ಬಿಜೆಪಿಯು ಆ ಸ್ಥಾನದಿಂದ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದೆ. ರಾಜ್ಯಪಾಲರು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಕೈಗೊಂಬೆ ರೀತಿ ವರ್ತಿಸುತ್ತಿದ್ದಾರೆ ಎಂದು ದೂರಿದರು.
ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ ₹ 47 ಕೋಟಿ ಅವ್ಯವಹಾರ ಬಿಜೆಪಿ ಅವಧಿಯಲ್ಲಿ ನಡೆದಿದೆ. ಆ ಪಕ್ಷದ ಡಿ.ಎಸ್.ವೀರಯ್ಯ ಜೈಲು ಸೇರಿದ್ದಾರೆ. ಭೋವಿ ಅಭಿವೃದ್ಧಿ ನಿಗಮದಲ್ಲಿ ₹ 50 ಕೋಟಿ ಅವ್ಯವಹಾರ ನಡೆದಿದೆ. ಕಿಯೋನಿಕ್ಸ್‌ನಲ್ಲಿ ದೊಡ್ಡ ಹಗರಣ ನಡೆದಿದೆ. ಕೋವಿಡ್ ಸಮಯದಲ್ಲಿ ಡಾ.ಕೆ.ಸುಧಾಕರ್ ₹ 4 ಸಾವಿರ ಕೋಟಿ ಹಗರಣ ನಡೆಸಿದ್ದಾರೆ ಎಂದು ಆರೋಪಿಸಿದರು.
ತಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ. ಆದರೆ ನಮ್ಮ ತಟ್ಟೆಯಲ್ಲಿ ನೊಣ ಹುಡುಕುವ ಕೆಲಸ ಬಿಜೆಪಿ, ಜೆಡಿಎಸ್ ಮಾಡುತ್ತಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿಯ ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ ಮತ್ತಿತರರ ವಿರುದ್ಧವೂ ತನಿಖೆಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. ಆದರೆ ಆ ಯಾವುದರ ಬಗ್ಗೆಯೂ ಅವರು ಕ್ರಮವಹಿಸದೆ ಸಿದ್ದರಾಮಯ್ಯ ಅವರ ವಿರುದ್ಧ ದುರುದ್ದೇಶದಿಂದ ತನಿಖೆಗೆ ಅನುಮತಿ ನೀಡಿದ್ದಾರೆ ಎಂದರು.
ವಿಧಾನ ಪರಿಷತ್ ಸದಸ್ಯ ಎಂ.ಆರ್.ಸೀತಾರಾಮ್ ಮಾತನಾಡಿ, ಸಿದ್ದರಾಮಯ್ಯ ಅವರ 50 ವರ್ಷಗಳ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಇಲ್ಲ. ಅವರಿಗೆ ಮತ್ತು ಸರ್ಕಾರಕ್ಕೆ ಮುಜುಗರ ತರಬೇಕು ಎಂದುಅವರ ಮೇಲೆ ಆರೋಪ ಹೊರಿಸಲಾಗುತ್ತಿದೆ ಎಂದರು.
ಖಾಸಗಿ ವ್ಯಕ್ತಿಗಳು ದೂರು ನೀಡಿದ ತಕ್ಷಣವೇ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದಾರೆ. ಮುಖ್ಯಮಂತ್ರಿ ಅವರ ಬೆನ್ನಿಗೆ ನಾವು ನಿಲ್ಲುತ್ತೇವೆ. ಸಮಾಜದಲ್ಲಿ ಯಾವ ರೀತಿಯ ಸಮೀಕರಣ ಆಗುತ್ತಿದೆ ಎನ್ನುವುದು ಗೊತ್ತು. ಶೋಷಿತ ವರ್ಗದವರು ಅವರ ಬೆನ್ನಿಗೆ ಹೆಚ್ಚು ನಿಲ್ಲಬೇಕು ಎಂದು ಹೇಳಿದರು.
ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ, ಸಿದ್ದರಾಮಯ್ಯ ಅವರನ್ನು ತೇಜೋವಧೆ ಮಾಡಲು ಹೊರಟಿದ್ದಾರೆ. ಅವರು ಹಣ, ಆಸ್ತಿಗೆ ವ್ಯಾಮೋಹ ಪಟ್ಟವರಲ್ಲ. ಪ್ರಾಮಾಣಿಕ ವ್ಯಕ್ತಿ. ಆ ಕಾರಣದಿಂದಲೇ ಪಕ್ಷೇತರ ಶಾಸಕನಾದ ನಾನು ಬೆಂಬಲ ನೀಡಿದ್ದೇನೆ ಎಂದು ಹೇಳಿದರು.
ಸಿದ್ದರಾಮಯ್ಯ ಅವರ ಮೇಲಿನ ಈ ಷಡ್ಯಂತ್ರ ಖಂಡಿಸಿ ಶುಕ್ರವಾರ ಗೌರಿಬಿದನೂರಿನಲ್ಲಿ ಪ್ರತಿಭಟನೆ ಮಾಡುತ್ತೇನೆ ಎಂದರು.
ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಭದ್ರಗೊಳಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಆಪರೇಷನ್ ಕಮಲಕ್ಕೂ ಯತ್ನಿಸಿ ವಿಫಲರಾದರು. ದೇವರಾಜ ಅರಸು ಅವರ ನಂತರ ಹಿಂದುಳಿದ ವರ್ಗಗಳಿಗೆ ನ್ಯಾಯ ದೊರಕಿಸಿಕೊಡುತ್ತಿರುವುದು ಸಿದ್ದರಾಮಯ್ಯ ಎಂದು ಹೇಳಿದರು.
ಮಾಜಿ ಸಚಿವ ವಿ.ಮುನಿಯಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಮಾಜಿ ಶಾಸಕರಾದ ಎಸ್.ಎಂ.ಮುನಿಯಪ್ಪ, ಅನಸೂಯಮ್ಮ, ಮುಖಂಡರಾದ ನಂದಿ ಆಂಜನಪ್ಪ, ಪುಟ್ಟು ಆಂಜನಪ್ಪ, ರಾಜೀವ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದಯ್ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
‘ರಾಜಭವನ ಕೇಸರಿ ಭವನ ಮಾಡುತ್ತಿರುವ ಬಿಜೆಪಿ’
ಬಿಜೆಪಿ ಸಂವಿಧಾನ ವಿರುದ್ಧ ಕೆಲಸಗಳನ್ನು ಮಾಡುತ್ತಲೇ ಇದೆ. ರಾಜಭವನವನ್ನು ಕೇಸರಿ ಭವನ ಮಾಡುತ್ತಿದ್ದಾರೆ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ದೂರಿದರು. ಸಿದ್ದರಾಮಯ್ಯ ಅವರ ಪರವಾಗಿ ರಾಜ್ಯದಾದ್ಯಂತ ದೊಡ್ಡ ಮಟ್ಟದಲ್ಲಿ ಜನರು ನಿಂತಿದ್ದಾರೆ. ಮುಂದಿನ ದಿನಗಳಲ್ಲಿ ಹೋರಾಟ ಮತ್ತಷ್ಟು ಹೆಚ್ಚಲಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.