ಗುರುವಾರ , ಜನವರಿ 28, 2021
15 °C
ಗೌರಿಬಿದನೂರು-ಚಿಕ್ಕಬಳ್ಳಾಪುರ ರಸ್ತೆ ಜೂನ್‌ ವೇಳೆಗೆ ಪೂರ್ಣ: ಸಚಿವ ಸುಧಾಕರ್‌

₹30 ಕೋಟಿ ವೆಚ್ಚದಲ್ಲಿ ಹೆದ್ದಾರಿ ಕಾಮಗಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಅರ್ಧಕ್ಕೆ ನಿಂತಿರುವ ರಾಷ್ಟ್ರೀಯ ಹೆದ್ದಾರಿ-234ರ ಚಿಕ್ಕಬಳ್ಳಾಪುರ-ಗೌರಿಬಿದನೂರು ರಸ್ತೆಯನ್ನು ₹30 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿ, ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದರು.

‘ಗೌರಿಬಿದನೂರಿನಿಂದ ಚಿಕ್ಕಬಳ್ಳಾಪುರದ 56 ಕಿ.ಮೀ. ಮಾರ್ಗದ ರಸ್ತೆ ಕಾಮಗಾರಿ ಅಭಿವೃದ್ಧಿಯನ್ನು ಈ ಹಿಂದೆ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರ ದಿವಾಳಿಯಾಗಿದ್ದೇನೆ ಎಂದು ಘೋಷಿಸಿಕೊಂಡ ಕಾರಣ ಕಾಮಗಾರಿ ಸ್ಥಗಿತಗೊಂಡಿತು. ಪ್ರಸ್ತುತ ಈ ಕಾಮಗಾರಿ ಅಭಿವೃದ್ಧಿಗಾಗಿ ₹13 ಕೋಟಿ ಇದ್ದು, ಇನ್ನೂ ಹೆಚ್ಚುವರಿಯಾಗಿ ₹17 ಕೋಟಿ ಅನುದಾನ ಬೇಕಾಗಿದೆ. ಈ ಹಣವನ್ನು ಹೆದ್ದಾರಿ ಪ್ರಾಧಿಕಾರವು ಕೊಡುವುದಾಗಿ ಒಪ್ಪಿಕೊಂಡಿದ್ದು, ಎರಡೂ ಸೇರಿ ಒಟ್ಟು ₹30 ಕೋಟಿ ವೆಚ್ಚದಲ್ಲಿ ಮುಂದಿನ ಮೇ ಇಲ್ಲವೇ ಜೂನ್ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದು ತಿಳಿಸಿದರು.

‘ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ ಸುಮಾರು ₹77 ಕೋಟಿ ವೆಚ್ಚದಲ್ಲಿ ಗೌರಿಬಿದನೂರಿನ ದಂಡಿಗಾನಹಳ್ಳಿ ಕೆರೆಯಿಂದ ಸುಮಾರು 63 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಯೋಜನೆಗೆ ಕ್ರಮ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ 40 ಹಳ್ಳಿಗಳಿಗೆ ಮತ್ತು ಎರಡನೇ ಹಂತದಲ್ಲಿ 23 ಗ್ರಾಮಗಳಿಗೆ ನೀರು ಒದಗಿಸಲಾಗುತ್ತದೆ. ಅದೇ ರೀತಿ ಮಂಡಿಕಲ್ಲು ಹೋಬಳಿ ಗ್ರಾಮಗಳಿಗೆ ಬೂದಗುಂಡ್ಲ ಕೆರೆಯಿಂದ ನೀರು ಒದಗಿಸಲು ₹40-50 ಕೋಟಿ ಅನುದಾನ ಬೇಕಾಗಿದ್ದು, ಬೃಹತ್ ನೀರಾವರಿ ಇಲಾಖೆ ಅನುದಾನ ಕೊಡುವುದಾಗಿ ಭರವಸೆ ನೀಡಿದೆ’ ಎಂದರು.

‘ಯದಾರ್ಲಹಳ್ಳಿ ಕೆರೆಯಿಂದ 13 ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಲು ₹13 ಕೋಟಿ ಅನುದಾನ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಮನವಿ ಮಾಡಲಾಗಿದೆ’ ಎಂದು ಅವರು ಹೇಳಿದರು.

‘ಬ್ರಿಟನ್‌ನಿಂದ ಬಂದ ಎಲ್ಲರಿಗೂ ಆರ್‍ಟಿಪಿಸಿಆರ್ ಪರೀಕ್ಷೆ ಮಾಡಲಾಗಿದೆ. ಯಾರಿಗೂ ಪಾಸಿಟಿವ್ ಬಂದಿಲ್ಲ. ಹಾಗಾಗಿ ಯಾರೂ ರೂಪಾಂತರಗೊಂಡ ಕೊರೊನಾ ವೈರಸ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು