ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಥರಸ್‌ ಅತ್ಯಾಚಾರಿಗಳಿಗೆ ಗಲ್ಲಿಗೇರಿಸಲು ಒತ್ತಾಯ

ಎಸ್ಪಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿದ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು
Last Updated 12 ಅಕ್ಟೋಬರ್ 2020, 14:51 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಉತ್ತರಪ್ರದೇಶದಲ್ಲಿ ದಲಿತ ಹೆಣ್ಣು ಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಸೋಮವಾರ ಎಸ್ಪಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ ಎಸ್ಪಿ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್‌ ಮಾತನಾಡಿ, ‘ಉತ್ತರಪ್ರದೇಶದ ಹಾಥರಸ್‌ನಲ್ಲಿ ಯುವತಿಯ ಅತ್ಯಾಚಾರ, ಕೊಲೆ ಮಾಡಿದ ಆರೋಪಿಗಳನ್ನು ನೇಣಿಗೆ ಏರಿಸಬೇಕು. ಇಂತಹ ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು’ ಎಂದು ಹೇಳಿದರು.

‘ಉತ್ತರಪ್ರದೇಶದಲ್ಲಿ ಪದೇ ಪದೇ ಪ್ರಜಾಪ್ರಭುತ್ವದ ಕಗ್ಗೊಲೆ, ಮಾನವ ಹಕ್ಕುಗಳ ಹರಣ, ಪರಿಶಿಷ್ಟರ ಮೇಲೆ ದೌರ್ಜನ್ಯ ಪ್ರಕರಣ ನಡೆಯುತ್ತಿದ್ದರೂ, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲವಾಗಿರುವ ಆದಿತ್ಯ ನಾಥ್ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸಬೇಕು. ಆರೋಪಿಗಳಿಗೆ ಬೆಂಬಲವಾಗಿ ನಿಂತಿರುವ ಪೊಲೀಸರು, ಅಧಿಕಾರಿಗಳನ್ನು ಅಮಾನತುಗೊಳಿಸಬೇಕು’ ಎಂದು ಒತ್ತಾಯಿಸಿದರು.

‘ಹೆಣ್ಣು ಮಕ್ಕಳನ್ನು ರಕ್ಷಿಸಿ ಎಂದು ಕರೆ ಕೊಡುವ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶ ಘಟನೆ ಕುರಿತು ಈವರೆಗೆ ತುಟಿ ಬಿಚ್ಚಿಲ್ಲ. ಇದು ಅತ್ಯಾಚಾರಿಗಳ ಪಾಲಿಗೆ ಬೆಂಬಲ ಸಿಕ್ಕಂತಾಗಿದೆ. ಉತ್ತರಪ್ರದೇಶದಲ್ಲಿ ಗೋರಕ್ಷಣೆಗೆ ನೀಡುವ ಒತ್ತು ಪರಿಶಿಷ್ಟ ಹೆಣ್ಣುಮಕ್ಕಳ ರಕ್ಷಣೆಗೆ ನೀಡುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಸಮಿತಿ ರಾಜ್ಯ ಘಟಕದ ಸಂಚಾಲಕ ವಿಜಯ ನರಸಿಂಹ ಮಾತನಾಡಿ, ‘ಉತ್ತರಪ್ರದೇಶದಲ್ಲಿ ಜಾತಿ, ಅಧಿಕಾರ ದುರ್ಬಳಕೆ ಮಾಡಿಕೊಂಡು ದಲಿತ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗುತ್ತಿರುವವರಿಗೆ ಅಲ್ಲಿನ ಸರ್ಕಾರ ರಕ್ಷಣೆ ನೀಡುತ್ತಿದೆ. ರಾಮ ಮಂದಿರ ನಿರ್ಮಾಣ ಮಾಡುವ ಸಂಕಲ್ಪ ತೊಟ್ಟಿರುವ ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಿರುವುದು ದುರಂತ’ ಎಂದು ಹೇಳಿದರು.

‘ಉತ್ತರ ಪ್ರದೇಶದಲ್ಲಿ ಮಹಿಳೆಯರು, ದಲಿತರು, ಅಲ್ಪಸಂಖ್ಯಾತ, ಹಿಂದುಳಿದ ಜನ ಸಮುದಾಯಗಳ ಮಾನ, ಪ್ರಾಣ ಹಾಗೂ ನಾಗರಿಕ ಹಕ್ಕು, ಸ್ವಾತಂತ್ರ್ಯವನ್ನು ರಕ್ಷಿಸಲು ವಿಫಲವಾಗಿದೆ. ಹೀಗಾಗಿ, ರಾಷ್ಟ್ರಪತಿಗಳು ಯೋಗಿ ಆದಿತ್ಯನಾಥ ಅವರ ನೇತೃತ್ವದ ಬಿಜೆಪಿ ಸರ್ಕಾರವನ್ನು ಕೂಡಲೇ ವಜಾ ಮಾಡಬೇಕು’ ಎಂದು ಆಗ್ರಹಿಸಿದರು.

‘ಈ ಹಿಂದೆಯೂ ಸಾಕಷ್ಟು ಅತ್ಯಾಚಾರ ಪ್ರಕರಣಗಳು ನಡೆದಿದ್ದರೂ ಆರೋಪಿಗಳ ಪರವಾಗಿ ಸರ್ಕಾರ ನಿಂತ ಕಾರಣ ಸಂತ್ರಸ್ತರಿಗೆ ನ್ಯಾಯ ಸಿಕ್ಕಿಲ್ಲ. ಹಾಥರಸ್‌ ಪ್ರಕರಣದ ಅತ್ಯಾಚಾರಿಗಳಿಗೆ ನಿರ್ಭಯಾ ಪ್ರಕರಣದ ಮಾದರಿಯಲ್ಲಿ ಗಲ್ಲು ಶಿಕ್ಷೆ ವಿಧಿಸಬೇಕು. ಸಂತಸ್ತ್ರರ ಕುಟುಂಬಗಳಿಗೆ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.

ವಿಭಾಗೀಯ ಸಂಚಾಲಕ ಎನ್.ಶ್ರೀನಿವಾಸ್, ಜಿಲ್ಲಾ ಘಟಕದ ಸಂಘಟನಾ ಸಂಚಾಲಕರಾದ ಕೆ.ವಿ.ವೆಂಕಟೇಶ್‌, ವಿ.ಅಮರ್, ಗೊರಮಡಗು ನಾರಾಯಣಸ್ವಾಮಿ, ನವೀದ್, ತಿಪ್ಪೇನಹಳ್ಳಿ ನಾರಾಯಣ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT