ಸೋಮವಾರ, ನವೆಂಬರ್ 18, 2019
24 °C

ಶೀಘ್ರದಲ್ಲಿಯೇ ಬೃಹತ್ ಉದ್ಯೋಗ ಮೇಳ: ಸಚಿವ ಎಚ್.ನಾಗೇಶ್ ಭರವಸೆ

Published:
Updated:
Prajavani

ಚಿಕ್ಕಬಳ್ಳಾಪುರ: ‘ನಿರುದ್ಯೋಗ ನಿವಾರಣೆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಶೀಘ್ರದಲ್ಲಿಯೇ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುತ್ತದೆ’ ಎಂದು ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಎಚ್.ನಾಗೇಶ್ ಹೇಳಿದರು.

ತಾಲ್ಲೂಕಿನ ಮಂಡಿಕಲ್ಲು ಗ್ರಾಮದಲ್ಲಿ ನಿರ್ಮಿಸಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಸದ್ಯ ವಿದ್ಯಾವಂತರಲ್ಲಿ ಶೇ 70ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಕೆಲಸ ಸಿಗುತ್ತಿವೆ. ಓದಿದವರಿಗೆ ಉದ್ಯೋಗ ಸಿಗದಿದ್ದರೆ ಮಾನಸಿಕವಾಗಿ ಪರಿಣಾಮ ಬೀರುತ್ತದೆ. ಆದ್ದರಿಂದ, ಉದ್ಯೋಗಾವಕಾಶ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಮೇಳದಲ್ಲಿ 150 ಕಂಪೆನಿಗಳು ಭಾಗವಹಿಸಲಿವೆ’ ಎಂದು ತಿಳಿಸಿದರು.

‘ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜರ್ಮನ್‌ಗೆ ಕೈಗಾರಿಕೆ ತರಬೇತಿಗೆ ಕಳುಹಿಸಿ ಕೊಡಲಾಗುತ್ತದೆ. ಅಲ್ಲಿ ಉದ್ಯೋಗ ಸಿಗುವಂತಿದ್ದರೆ ಅಲ್ಲಿಯೇ ಕೈಗಾರಿಕೆಗಳನ್ನು ಅಭಿವೃದ್ಧಿ ಮಾಡುವ ಚಿಂತನೆ ನಡೆಸಿದ್ದೇವೆ. ಅಲ್ಲಿರುವ ಉತ್ತಮ ಅಂಶಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳಬೇಕಿದೆ’ ಎಂದರು.

‘ಚಿಕ್ಕಬಳ್ಳಾಪುರ ಜಿಲ್ಲೆ ಬೆಂಗಳೂರು ನಗರ ಹಾಗೂ ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಹಳ ಸಮೀಪವಿದೆ. ಆದ್ದರಿಂದ ಈ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ದಿಪಡಿಸಲು ಸಾಕಷ್ಟು ಅವಕಾಶಗಳಿವೆ. ನಾನು ಕೂಡ ಈ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಹಕಾರ ನೀಡುತ್ತೇನೆ’ ಎಂದು ಹೇಳಿದರು.

ಅನರ್ಹ ಶಾಸಕ ಡಾ.ಕೆ.ಸುಧಾಕರ್ ಮಾತನಾಡಿ, ‘ಈ ಹಿಂದೆ ಜಿಲ್ಲೆಗೆ ಮಂಜೂರಾದ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸಮ್ಮಿಶ್ರ ಸರ್ಕಾರದಲ್ಲಿ ಕನಕಪುರಕ್ಕೆ ವರ್ಗಾಯಿಸಲಾಗಿತ್ತು. ಅದನ್ನು ಪುನಃ ಬಿಜೆಪಿ ಸರ್ಕಾರ ಇತ್ತೀಚೆಗೆ ನಮ್ಮ ಜಿಲ್ಲೆಗೆ ಮಂಜೂರು ಮಾಡಿದೆ. ಶೀಘ್ರದಲ್ಲಿಯೇ ಕಾಲೇಜಿನ ಭೂಮಿಪೂಜೆ ನೆರವೇರಲಿದೆ. ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಶಿಕ್ಷಣ ನಗರಿ ಮಾಡುವ ಕನಸಿದೆ’ ಎಂದು ತಿಳಿಸಿದರು.

‘ನಮ್ಮ ಗ್ರಾಮೀಣ ಪ್ರದೇಶದ ರೈತರ ಮಕ್ಕಳಿಗೆ ಉದ್ಯೋಗ ಸಿಗುತ್ತಿಲ್ಲ. ನೀರಿನ ಅಭಾವ ಇರುವುದರಿಂದ ಕೈಗಾರಿಕೆಗಳು ಬರುತ್ತಿಲ್ಲ. ನಮ್ಮೆಲ್ಲರ ಹೋರಾಟದಿಂದ ಕೆ.ಸಿ ವ್ಯಾಲಿ, ಎಚ್.ಎನ್.ವ್ಯಾಲಿ ಯೋಜನೆಗಳು ಜಾರಿಗೆ ಬಂದಿವೆ. ಒಂದೇ ತಿಂಗಳಲ್ಲಿ ಕಂದವಾರ ಕೆರೆ ತುಂಬಲಾಗುತ್ತದೆ. ನೀರು ಬಂದ ಮೇಲೆ ಈ ಭಾಗದಲ್ಲಿ ಕೈಗಾರಿಕೆಗಳು ಬರುತ್ತವೆ’ ಎಂದರು.

‘ನಮ್ಮ ಜಿಲ್ಲೆ ಬೆಂಗಳೂರಿಗೆ ಅತ್ಯಂತ ಸಮೀಪ ಇದ್ದರೂ ಅಭಿವೃದ್ಧಿಯಿಂದ ವಂಚಿತವಾಗಿದೆ. ಬಡಜನರ ಜೀವನ ಮಟ್ಟ ಉತ್ತಮಗೊಳಿಸಬೇಕಾದರೆ ಅವರಿಗೆ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ, ಸಾಂಸ್ಕೃತಿಕವಾಗಿ ಮುಂದೆ ತಂದಾಗ ಮಾತ್ರ ಸಮ ಸಮಾಜ ನಿರ್ಮಿಸಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಯುವಕರ ಕೈಬಲಪಡಿಸುವ ಕೆಲಸ ಮಾಡಬೇಕು. ಐಟಿಐ ಮುಗಿಸಿದ ಕೂಡಲೇ ವಿದ್ಯಾರ್ಥಿಗಳಿಗೆ ಉದ್ಯೋಗ ಸಿಗಬೇಕಿದೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಹಂಗಾಮಿ ಅಧ್ಯಕ್ಷೆ ನಿರ್ಮಲಾ ಮುನಿರಾಜು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಸದಸ್ಯರಾದ ತಿರುಮಳಪ್ಪ, ಮೂರ್ತಿ, ಉಪ ವಿಭಾಗಾಧಿಕಾರಿ ರಘುನಂದನ್, ತಹಶೀಲ್ದಾರ್ ಕೆ.ನರಸಿಂಹಮೂರ್ತಿ, ಜಿಲ್ಲಾ ಉದ್ಯೋಗಾಧಿಕಾರಿ ಎಂ.ಪ್ರಸಾದ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತಾ, ಉಪಾಧ್ಯಕ್ಷ ಮುನಿರಾಜು, ಸದಸ್ಯ ರಾಮಕೃಷ್ಣಪ್ಪ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)