ಮಂಗಳವಾರ, ಮೇ 11, 2021
27 °C
ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ

ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸಿ: ಎಸ್. ಸುರೇಶ್ ಕುಮಾರ್ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ಆಗಬೇಕಿದೆ. ಮಕ್ಕಳ ಮನಸ್ಸು ಕುಗ್ಗುವಂತೆ ಮಾಡಬಾರದು ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

ನಗರದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಪೂರ್ವಸಿದ್ಧತೆ ಕುರಿತು ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಶಿಕ್ಷಣ ಇಲಾಖೆಗಳ ಉಪನಿರ್ದೇಶಕರು, ಡಯಟ್‍ ಪ್ರಾಂಶುಪಾಲರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಶನಿವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 

ಎರಡೂ ಜಿಲ್ಲೆಯ ಬಿಇಒಗಳಲ್ಲಿ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ. ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲು ನಾನಾ ರೀತಿಯ ಕಾರ್ಯಕ್ರಮವನ್ನು ಮಾಡಿದ್ದಾರೆ ಎಂದರು.

ಕೊರೊನಾ ಸೋಂಕಿನ ಕಾರಣದಿಂದ ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಕಳೆದ ವರ್ಷದಂತೆ ಈ ಬಾರಿಯೂ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಪರೀಕ್ಷೆಗಳನ್ನು ನಡೆಸಲಾಗುವುದು. ಕಳೆದ ವರ್ಷಕ್ಕಿಂತ ಈ ಬಾರಿ ಮಾರ್ಗಸೂಚಿಯನ್ನು ಯಾವ ರೀತಿ ಉತ್ತಮಪಡಿಸಬಹುದು ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಹೊಸ ಅಂಶಗಳನ್ನು ಸೇರಿಸಬೇಕಾ‌ ಎನ್ನುವ ಬಗ್ಗೆ ಗಮನವಹಿಸಿದ್ದೇವೆ ಎಂದರು.

ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಪರೀಕ್ಷೆಗಳನ್ನು ಮಾಡಬೇಕಾಗಿದೆ. ಶಿಕ್ಷಣ ಇಲಾಖೆಯೊಂದಿಗೆ ಇತರ ಇಲಾಖೆ ಅಧಿಕಾರಿಗಳ ಸಹಕಾರ, ಸಮನ್ವಯ ಕೋರಲಾಗಿದೆ. ಕಳೆದ ಬಾರಿಯೂ ಎಲ್ಲರ ಸಹಕಾರದಿಂದ ಪರೀಕ್ಷೆ ನಡೆಸಲಾಗಿತ್ತು ಎಂದು ಹೇಳಿದರು. 

ಈಗಾಗಲೇ ನಾನು 18 ಜಿಲ್ಲೆಗಳಲ್ಲಿ ಪರೀಕ್ಷಾ ಸಿದ್ಧತೆಯ ಕುರಿತು ಅಧಿಕಾರಿಗಳ ಜತೆ ಸಮಲೋಚಿಸಿದ್ದೇನೆ. ಈಗಾಗಲೇ ಪಠ್ಯಗಳ ಬೋಧನೆ ಪೂರ್ಣವಾಗಿದೆ. ಪರೀಕ್ಷೆಗೆ ಪಠ್ಯದಲ್ಲಿನ ಶೇ 30ರಷ್ಟು ವಿಷಯಗಳನ್ನು ಕಡಿತಗೊಳಿಸಿದ್ದೇವೆ. ಮಕ್ಕಳ ಮೇಲೆ ಒತ್ತಡ ಬೀರಬಾರದು ಮತ್ತು ಕಲಿಕೆಗೆ ತೊಂದರೆ ಆಗಬಾರದು ಎನ್ನುವುದೇ ನಮ್ಮ ಉದ್ದೇಶ ಎಂದರು.

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ‍ಪಿಯುಸಿ ಪರೀಕ್ಷೆ ನಡೆಸುವುದು ಸರ್ಕಾರಕ್ಕೆ ಪ್ರತಿಷ್ಠೆ ಅಲ್ಲ, ಕರ್ತವ್ಯ. ಯಾವುದೇ ಲೋಪ ಆಗದಂತೆ ಪರೀಕ್ಷೆಗಳನ್ನು ನಡೆಸಬೇಕಾಗಿದೆ. ವಿವಿಧ ರಾಜ್ಯಗಳಲ್ಲಿ ಅಜೀಂ ಪ್ರೇಂ ಜೀ ವಿಶ್ವವಿದ್ಯಾಲಯ ನಡೆಸಿದ ಸಮೀಕ್ಷೆಯಲ್ಲಿ ಈಗಾಗಲೇ ಶೇ 90ರಷ್ಟು ಪ್ರಾಥಮಿಕ ಶಾಲೆ ಮಕ್ಕಳು ಗಣಿತ ಮತ್ತು ಶೇ 80ರಷ್ಟು ಮಕ್ಕಳು ಭಾಷೆಯನ್ನು ಮರೆಯುತ್ತಿದ್ದಾರೆ ಎಂದು ಹೇಳಿದೆ. ಈ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಬೇಕು ಎಂದು ಹೇಳಿದರು. 

ಸುದ್ದಿಗೋಷ್ಠಿಗೂ ಮುನ್ನ ನಡೆದ ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ರಸಾದ್, ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಎಂ. ಜಯರಾಮರೆಡ್ಡಿ, ಡಿಡಿಪಿಯು ಗೀತಾ, ಡಯಟ್ ಪ್ರಾಂಶುಪಾಲ ಗಂಗಾಧರರೆಡ್ಡಿ, ಕೋಲಾರ ಜಿಲ್ಲೆಯ ಡಿಡಿಪಿಐ ಕೃಷ್ಣಮೂರ್ತಿ, ಡಯಟ್ ಪ್ರಾಂಶುಪಾಲ ಎಸ್.ಜಿ. ನಾಗೇಶ್ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು