ಮಂಗಳವಾರ, ಆಗಸ್ಟ್ 16, 2022
29 °C
ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಪ್ರತಿಭಟನೆ

ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗೇಪಲ್ಲಿ: ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಒತ್ತಾಯಿಸಿ ಮಾದಿಗ ಹೋರಾಟ ಸಮಿತಿ ಪದಾಧಿಕಾರಿಗಳು ಶುಕ್ರವಾರ ತಾಲ್ಲೂಕು ಕಚೇರಿ ಎದುರು ಪ್ರತಿಭಟಿಸಿದರು.

ಪಟ್ಟಣದ ಡಾ.ಎಚ್.ಎನ್.ವೃತ್ತದಿಂದ ಹೊರಟ ಮಾದಿಗ ಮೀಸಲಾತಿ ಹೋರಾಟ ಸಮಿತಿ ಮುಖಂಡರು, ಮುಖ್ಯರಸ್ತೆಯಲ್ಲಿ ತಮಟೆ ಚಳವಳಿ ಮೂಲಕ ಸದಾಶಿವ ಆಯೋಗ ವರದಿ ಜಾರಿ ಮಾಡದ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಹೋರಾಟ ಸಮಿತಿ ತಾಲ್ಲೂಕು ಅಧ್ಯಕ್ಷ ಗಣೇಶ್ ಮಾತನಾಡಿ, ‘ಅನೇಕ ದಶಕಗಳಿಂದ ಮಾದಿಗ ಸಮುದಾಯದವರು ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕವಾಗಿ ಹಿಂದುಳಿದಿದ್ದಾರೆ. ಎಲ್ಲ ಪರಿಶಿಷ್ಟರಿಗೂ ಸಮಾನ ಶಿಕ್ಷಣ, ಉದ್ಯೋಗ, ಆರ್ಥಿಕ ಸಮಾನತೆ, ಸಂಘಟನೆ, ಸ್ವಾತಂತ್ರ್ಯ ಹಾಗೂ ರಾಜಕೀಯ ಅಧಿಕಾರ ಸಿಗುವಂತೆ ಸಂವಿಧಾನದಲ್ಲಿ ಮೀಸಲಾತಿ ನೀಡಿದ್ದಾರೆ. ಆದರೆ ಮೀಸಲಾತಿಯನ್ನು ಸಮರ್ಪಕವಾಗಿ ಜಾರಿ ಮಾಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿವೆ’ ಎಂದು ಆರೋಪಿಸಿದರು.

ಆಡಳಿತರೂಢ ಸರ್ಕಾರಗಳು ಶಾಸನಸಭೆಗಳಲ್ಲಿ ವರದಿ ವಿಚಾರ ಮಾಡದೇ ಜಾಣಕುರುಡರಂತೆ ವರ್ತಿಸಿದ್ದಾರೆ. ಸರ್ಕಾರ ರಾಜ್ಯದಲ್ಲಿ ಒಳಮೀಸಲಾತಿ ಜಾರಿ ತರಬೇಕು ಎಂದು ಒತ್ತಾಯಿಸಿದರು.

ಮಾದಿಗ ಮೀಸಲಾತಿ ಹೋರಾಟ ಸಮಿತಿ ಉಪಾಧ್ಯಕ್ಷ ವೆಂಕಟರವಣಪ್ಪ, ಪ್ರಧಾನ ಕಾರ್ಯದರ್ಶಿ ಎಂ.ಸಿ.ಮಂಜುನಾಥ, ಕಾರ್ಯದರ್ಶಿ ಪೂಜಪ್ಪ, ಸಂಘಟನಾ ಕಾರ್ಯದರ್ಶಿ ನರಸಿಂಹಮೂರ್ತಿ, ಖಜಾಂಚಿ ಅಕ್ಕುಲಪ್ಪ, ಜೀವಿಕಾ ಸಂಘಟನೆಯ ತಾಲ್ಲೂಕು ಸಂಚಾಲಕ ನಾರಾಯಣಸ್ವಾಮಿ, ಸಂಘಟನಾ ಸಂಚಾಲಕ ನಾರಾಯಣಸ್ವಾಮಿ, ಆಂಜಿನಪ್ಪ, ನಾರಾಯಣಪ್ಪ, ನ್ಯಾಥಪ್ಪ, ವಿ.ವೆಂಕಟೇಶಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು