ಶನಿವಾರ, ಸೆಪ್ಟೆಂಬರ್ 25, 2021
22 °C

ಬೂತ್ ಮಟ್ಟದಲ್ಲಿ ಜೆಡಿಎಸ್ ಸಂಘಟಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಪದಾಧಿಕಾರಿಗಳು ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಬೇಕು. ಎರಡೂ ರಾಷ್ಟ್ರೀಯ ಪಕ್ಷಗಳ ವೈಫಲ್ಯಗಳನ್ನು ಜನರಿಗೆ ತಿಳಿಸಬೇಕು. ಎಚ್‌.ಡಿ.ಕುಮಾರಸ್ವಾಮಿ ಅವರ ಅಧಿಕಾರದ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿ ಹೇಳಬೇಕು ಎಂದು ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಹೇಳಿದರು.

ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಘಟಕದ ಪದಾಧಿಕಾರಿಗಳು ನಿಮ್ಮ ವ್ಯಾಪ್ತಿಯ ಬೂತ್ ಮಟ್ಟದಲ್ಲಿ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಬೇಕು ಎಂದರು. 

ಜಿಲ್ಲೆಯ ಆರೂ ತಾಲ್ಲೂಕು ಘಟಕಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಅನುಮೋದನೆಗಾಗಿ ರಾಜ್ಯ ಘಟಕಕ್ಕೆ ಕಳುಹಿಸಿದ್ದೆವು. ಆ ಹೆಸರುಗಳನ್ನು ರಾಜ್ಯ ಘಟಕ ಅನುಮೋದಿಸಿ ವಾಪಸ್ ಕಳುಹಿಸಿದೆ ಎಂದು ಹೇಳಿದರು.

ಕೊರೊನಾ ಮೂರನೇ ಅಲೆ ಮತ್ತು ಭೀಕರ ಪ್ರವಾಹ ರಾಜ್ಯದಲ್ಲಿ ತಲೆದೋರಿದೆ. ಜನರ ಸಂಕಷ್ಟಗಳನ್ನು ಕೇಳಲು ಸರ್ಕಾರವೇ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಬಿಜೆಪಿಯ ಆಂತರಿಕ ವಿಚಾರ. ಆದರೆ ಪ್ರವಾಹ ಮತ್ತು ಕೊರೊನಾ ಸಂಕಷ್ಟದ ಈ ಸಮಯದಲ್ಲಿ ಜವಾಬ್ದಾರಿ ನಿರ್ವಹಿಸಬೇಕಾದ ಸಚಿವ ಸಂಪುಟವೇ ಇಲ್ಲ. ಎಲ್ಲಿಯೂ ಏನನ್ನು ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.

ನೆರೆಯಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ಪರಿಹಾರ ದೊರೆತಿಲ್ಲ. ಜನರು ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ನೆಲೆ ಇಲ್ಲದೆ ಪರಿತಪಿಸುತ್ತಿದ್ದಾರೆ. ರಾಷ್ಟ್ರೀಯ ಪಕ್ಷಗಳು ಜನರ ನೆರವಿಗೆ ಧಾವಿಸುತ್ತಿಲ್ಲ ಎಂದರು.

ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುನೇಗೌಡ ಗೌಡ ಮಾತನಾಡಿ, ಪದಾಧಿಕಾರಿಗಳು ಪಕ್ಷದ ಪರ ಕೆಲಸ ಮಾಡಬೇಕು. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಳ್ಳಬೇಕು ಎಂದರು.

ಸಚಿವರ ನೇಮಕ ಸೇರಿದಂತೆ ವಿವಿಧ ವಿಚಾರಗಳಲ್ಲಿ ರಾಜ್ಯ ಸರ್ಕಾರ ಗೊಂದಲದ ಗೂಡಾಗಿದೆ. ಸರ್ಕಾರ ಎಷ್ಟು ದಿನ ಇರುತ್ತದೆಯೋ ಗೊತ್ತಿಲ್ಲ. ಕುಮಾರ ಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಈ ದೃಷ್ಟಿಯಿಂದ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. 

ಜಿಲ್ಲಾ ಉಸ್ತುವಾರಿ ರೋಷನ್ ಅಬ್ಬಾಸ್ ಮಾತನಾಡಿದರು. ನಗರಸಭೆ ಸದಸ್ಯ ಮಟಮಪ್ಪ, ಗೌರಿಬಿದನೂರು ತಾಲ್ಲೂಕು ಮುಖಂಡ ನರಸಿಂಹಮೂರ್ತಿ, ವೆಂಕಟೇಶ್ ಇತರರು ಗೋಷ್ಠಿಯಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.