ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಸಿ.ವ್ಯಾಲಿ: 3ನೇ ಹಂತದ ಶುದ್ಧೀಕರಣ; ಸಭೆ ಕರೆಯಲು ತೀರ್ಮಾನ

ಕೆ.ಸಿ.ವ್ಯಾಲಿ, ಎಚ್‌.ಎನ್.ವ್ಯಾಲಿ ನೀರಾವರಿ ಯೋಜನೆ; ಸಚಿವ ಬೋಸರಾಜು ಸಭೆ
Published 1 ಅಕ್ಟೋಬರ್ 2023, 12:38 IST
Last Updated 1 ಅಕ್ಟೋಬರ್ 2023, 12:38 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಕೆ.ಸಿ. ವ್ಯಾಲಿ ಮತ್ತು ಎಚ್.ಎನ್. ವ್ಯಾಲಿ ಯೋಜನೆ ನೀರನ್ನು ಮೂರು ಹಂತದಲ್ಲಿ ಶುದ್ಧೀಕರಿಸುವ ಕುರಿತು ಚರ್ಚಿಸಲು ಬೆಂಗಳೂರು ಜಲಮಂಡಳಿ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ. 

ವಿಧಾನಸೌಧದಲ್ಲಿ ಶನಿವಾರ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅಧ್ಯಕ್ಷತೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಣ್ಣ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. 

‘ಕೆ.ಸಿ ವ್ಯಾಲಿ ಮತ್ತು ಎಚ್.ಎನ್ ವ್ಯಾಲಿ ನೀರನ್ನು ಎರಡು ಹಂತದಲ್ಲಿ ಸಂಸ್ಕರಿಸಿ ಹರಿಸಲಾಗುತ್ತಿದೆ. ಈ ನೀರನ್ನು ಮೂರು ಹಂತದಲ್ಲಿ ಸಂಸ್ಕರಿಸಬೇಕು ಎನ್ನುವುದು ವ್ಯಾಲಿ ಯೋಜನೆಯ ಭಾಗದ ಜನರು ಹಾಗೂ ಜನಪ್ರತಿನಿಧಿಗಳ ಆಶಯವಾಗಿದೆ. ಈ ಬಗ್ಗೆ ಬೆಂಗಳೂರು ಜಲಮಂಡಳಿ ಉಸ್ತುವಾರಿ ಸಚಿವರ ಜೊತೆ ಸಮಾಲೋಚಿಸುವಂತೆ ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳ ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಚರ್ಚಿಸಲು ಮತ್ತೊಂದು ಸಭೆ ಆಯೋಜಿಸಲಾಗುವುದು ಎಂದು ಸಚಿವ ಬೋಸರಾಜು ತಿಳಿಸಿದರು.  

ಎಚ್.ಎನ್ ವ್ಯಾಲಿ ಏತ ನೀರಾವರಿ ಯೋಜನೆ ಅಡಿಯಲ್ಲಿ ಮೊದಲ ಹಂತದಲ್ಲಿ ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 65 ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಎರಡನೇ ಹಂತದಲ್ಲಿ ಬಾಗೇಪಲ್ಲಿ ತಾಲ್ಲೂಕಿನ 24 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಪ್ರಗತಿಯಲ್ಲಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಏತ ನೀರಾವರಿ ಕಾಮಗಾರಿ ಪ್ರಗತಿಯಲ್ಲಿದೆ. 38 ಕೆರೆಗಳನ್ನು ತುಂಬಿಸುವ ಈ ಯೋಜನೆಯ ಮೊದಲ ಹಂತವನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಸಚಿವರು ಸೂಚಿಸಿದರು. ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಸಚಿವರು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು. ಶೀಘ್ರ ಕಾಮಗಾರಿ ಪೂರ್ಣಗೊಳಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 243 ಎಂ.ಎಲ್.ಡಿ ನೀರನ್ನು ಮೊದಲನೇ ಹಂತದಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಯ 70 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯ ಟೆಂಡರ್ ಆಗಿದೆ. ಸರ್ವೆ ಕಾರ್ಯ ಮುಗಿದಿದೆ. ವಿನ್ಯಾಸ ತಯಾರಿಕಾ ಕಾರ್ಯ ಪ್ರಗತಿಯಲ್ಲಿದೆ. ಈ ಕಾಮಗಾರಿಯ ಪ್ರಾರಂಭಕ್ಕೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಕೆ.ಸಿ ವ್ಯಾಲಿ ಹಾಗೂ ಎಚ್.ಎನ್. ವ್ಯಾಲಿ ನೀರನ್ನು ಮೂರನೇ ಹಂತದಲ್ಲಿ ಸಂಸ್ಕರಿಸಬೇಕು ಎನ್ನುವುದು ಜನರ ಹಾಗೂ ಜನಪ್ರತಿನಿಧಿಗಳ ಆಶಯವಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿಯ ಉಸ್ತುವಾರಿಗಳಾದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಯಲ್ಲಿ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜನಪ್ರತಿನಿಧಿಗಳ ಸಭೆ ಆಯೋಜಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಸಲಹೆ ನೀಡಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಣ್ಣ ನೀರಾವರಿ ಸಚಿವರು, ಸಭೆ ಆಯೋಜಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶಾಸಕರಾದ ಶರತ್ ಬಚ್ಚೇಗೌಡ, ಶ್ರೀನಿವಾಸ್, ಧೀರಜ್ ಮುನಿರಾಜು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT