ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ವಿರೋಧ

ನ.2ಕ್ಕೆ ರೈತ, ದಲಿತ, ಕಾರ್ಮಿಕರ ಸಮಾವೇಶ
Last Updated 30 ಅಕ್ಟೋಬರ್ 2022, 4:47 IST
ಅಕ್ಷರ ಗಾತ್ರ

ಚಿಂತಾಮಣಿ: ನ.2 ರಂದು ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ವಿರೋಧಿಸಿ ಅದೇ ದಿನ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದಲ್ಲಿ ರೈತ, ದಲಿತ ಮತ್ತು ಕಾರ್ಮಿಕರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಘಟಕ ಅಧ್ಯಕ್ಷ ಜೆ.ಸಿ.ಬಯ್ಯಾರೆಡ್ಡಿ ತಿಳಿಸಿದರು.

ನಗರದ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಎಲ್ಲೆಡೆ ಬಲವಂತದ ಭೂಸ್ವಾಧೀನವನ್ನು ಸರ್ಕಾರ ನಿಲ್ಲಿಸಬೇಕು. ಉದ್ಯೋಗ ಸೃಷ್ಟಿ ನೆಪದಲ್ಲಿ ಫಲವತ್ತಾದ ಕೃಷಿ ಭೂಮಿ, ನೀರು, ವಿದ್ಯುತ್ ಅನ್ನು ಕಾರ್ಪೋರೇಟ್ ಕಂಪನಿಗಳಿಗೆ ಧಾರೆ ಎರೆಯಲು ನಡೆಸುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ವಿರೋಧಿಸಿ ಕರ್ನಾಟಕ ಸಂಯುಕ್ತ ಹೋರಾಟದ ಮೂಲಕ ಪ್ರತಿಭಟನೆ ನಡೆಸಲಾಗುವುದು’ ಎಂದು ತಿಳಿಸಿದರು.

‘ಸಂಕಷ್ಟದಲ್ಲಿರುವ ರೈತರಿಗೆ ನೆರವು ನೀಡಬೇಕು. ವಿದ್ಯುತ್
ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರದ ಮಸೂದೆಗೆ ಪೂರಕವಾಗಿ ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಕೈಬಿಡಬೇಕು. ರೈತರ ಜಮೀನುಗಳನ್ನು ಬಂಡವಾಳಗಾರರಿಗೆ ನೀಡುವ ಸಲುವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ನಿಲ್ಲಿಸಬೇಕು’ ಎಂದು ಒತ್ತಾಯಿಸಿದರು.

‘ದೇವನಹಳ್ಳಿ ತಾಲ್ಲೂಕಿನ ಚೆನ್ನರಾಯಪಟ್ಟಣ ಹೋಬಳಿಯಲ್ಲಿ 13 ಗ್ರಾಮಗಳ ರೈತರ 177 ಎಕರೆ ಭೂಸ್ವಾಧೀನ ಕೈಬಿಡಬೇಕು ಎಂದು 209 ದಿನಗಳಿಂದ ಹೋರಾಟ ಮಾಡುತ್ತಿದ್ದಾರೆ. ಆದರೆ ರಾಜ್ಯದ ಮುಖ್ಯಮಂತ್ರಿ, ಮಾಜಿ ಮುಖ್ಯ ಮಂತ್ರಿ, ಕೈಗಾರಿಕಾ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ರೈತರ ವಿರೋಧ ಕಟ್ಟಿಕೊಳ್ಳದೆ, ಬದಲವಂತವಾಗಿ ಭೂಸ್ವಾಧೀನ ಪಡಿಸಿಕೊಳ್ಳುವುದಿಲ್ಲ ಎಂದು ಹೇಳುತ್ತಿದ್ದಾರೆಯೇ ಹೊರತು ಪ್ರಕ್ರಿಯೆ ನಿಲ್ಲಿಸುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ’ ಎಂದು
ಆರೋಪಿಸಿದರು.

‘ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿ, ದೊಡ್ಡಬಳ್ಳಾಪುರ ತಾಲ್ಲೂಕಿನ 2-3 ಪ್ರದೇಶಗಳಲ್ಲಿ, ಚಿಂತಾಮಣಿ ತಾಲ್ಲೂಕಿನ ಮಸ್ತೇನಹಳ್ಳಿ ಸಮೀಪದಲ್ಲೂ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಒಂದೆಡೆ ರೈತರ ಭೂಮಿಯನ್ನು ಸರ್ಕಾರ ಕೈಗಾರಿಕೆ ಸ್ಥಾಪನೆ ನೆಪದಲ್ಲಿ ಬಲವಂತವಾಗಿ ಕಿತ್ತುಕೊಳ್ಳುತ್ತಿದೆ.
ಬಗರ್ ಹುಕುಂ ಭೂಮಿ ಮಂಜೂರು ಮಾಡಿ ರೈತರಿಗೆ ನೀಡಲು ಹಿಂದೇಟು ಹಾಕುತ್ತಿದೆ’ ಎಂದು
ಟೀಕಿಸಿದರು.

‘ಉತ್ತರ ಮತ್ತು ಬಾಂಬೆ ಕರ್ನಾಟಕದ ಭಾಗಗಳು ಹಿಂದುಳಿದಿವೆ. ಇಲ್ಲಿ ಕೈಗಾರಿಕಾ ಮತ್ತು ಶೈಕ್ಷಣಿಕ ಅಭಿವೃದ್ಧಿಯಾಗಬೇಕಿದೆ. ಈ ಅಸಮಾನತೆ ನಿವಾರಿಸಲು ಆ ಭಾಗಗಳಲ್ಲಿ ಕೃಷಿಗೆ ಯೋಗ್ಯವಲ್ಲದ ಭೂಮಿ ಸ್ವಾಧೀನಪಡಿಸಿಕೊಂಡು ಕೈಗಾರಿಕೆ ಸ್ಥಾಪಿಸಬೇಕು’ ಎಂದು ಅವರು ಒತ್ತಾಯಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥರೆಡ್ಡಿ, ತಾಲ್ಲೂಕು ಅಧ್ಯಕ್ಷ ಎಂ.ಎಸ್.ಆನಂದ್, ಕಾರ್ಯದರ್ಶಿ ಲಕ್ಷ್ಮೀನಾರಾಯಣರೆಡ್ಡಿ, ಜಿಲ್ಲಾ ಸಹಕಾರ್ಯದರ್ಶಿ ಹೇಮಚಂದ್ರ, ರಾಜಕುಮಾರ್, ನರಸಿಂಹಯ್ಯ
ಇದ್ದರು.

‘ಶ್ವೇತಪತ್ರ ಹೊರಡಿಸಿ’

‘ಈ ಹಿಂದೆ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶಗಳಿಂದ ಇದುವರೆಗೆ ಎಷ್ಟು ಬಂಡವಾಳ ಹೂಡಿಕೆಯಾಗಿದೆ. ಎಷ್ಟು ಮಂದಿ ಸ್ಥಳೀಯರಿಗೆ ಉದ್ಯೋಗ ದೊರೆತಿದೆ. ಸಮಾವೇಶ ನಡೆಸಲು ಎಷ್ಟು ಹಣ ಖರ್ಚು ಮಾಡಲಾಗಿದೆ ಎಂಬುದನ್ನು ಬಹಿರಂಗ ಪಡಿಸಬೇಕು. ಈ ಬಗ್ಗೆ ಶ್ವೇತಪತ್ರ ಹೊರಡಿಸಬೇಕು’ ಎಂದು ಜೆ.ಸಿ.ಬಯ್ಯಾರೆಡ್ಡಿ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT