ಶನಿವಾರ, ಜುಲೈ 2, 2022
27 °C
ವಿದ್ಯಾವಂತರಿಗೆ ಕಿವಿಮಾತು

ಮತದಾನದ ಮಹತ್ವ ಅರಿಯಿರಿ: ಜಿಲ್ಲಾಧಿಕಾರಿ ಆರ್. ಲತಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಮತದಾನ ಎನ್ನುವುದು ಹಬ್ಬ ಇದ್ದಂತೆ. ಇಂದು ನಗರ ಪ್ರದೇಶಕ್ಕಿಂತ ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಮತದಾನ ಆಗುತ್ತಿದೆ. ವಿದ್ಯಾವಂತರು ಮತದಾನದ ಹಕ್ಕು ಹಾಗೂ ಮಹತ್ವವನ್ನು ಇತರರಿಗೆ ತಿಳಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ಲತಾ ಹೇಳಿದರು. 

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಮತದಾನ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ತನ್ನ ಹಕ್ಕಿನ ಜವಾಬ್ದಾರಿ ನಿಭಾಯಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಹೊಣೆಗಾರಿಕೆ ಅರಿತಾಗ ಮಾತ್ರ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಮತದಾನ ಸಂವಿಧಾನ ಬದ್ಧ ಹಕ್ಕಾಗಿದೆ. ಯಾರೂ ಈ ಅಧಿಕಾರದಿಂದ ವಂಚಿತ ಆಗಬಾರದು. ತಂತ್ರಜ್ಞಾನ ಬೆಳೆದಂತೆ ನಾವು ಅಭಿವೃದ್ಧಿಗೊಳ್ಳಬೇಕು. ನೂತನ ತಂತ್ರಜ್ಞಾನಕ್ಕೆ ತಕ್ಕಂತೆ ಹೊಂದಿಕೊಳ್ಳಬೇಕು. ಈ ಉದ್ದೇಶದಿಂದ ಅರ್ಹರು ವೋಟರ್ ಹೆಲ್ಪ್‌ಲೈನ್ ಮೊಬೈಲ್ ಆ್ಯಪ್ ಮೂಲಕ ನೋಂದಣಿಯಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಆಗಬಹುದು ಎಂದು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮತದಾರರ ಸಾಕ್ಷರತಾ ಸಂಘದ (ಇಎಲ್‌ಸಿ) ಮೂಲಕ ಜಿಲ್ಲೆಯ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಪ್ರಕ್ರಿಯೆ, ಉಪಯೋಗ, ಚುನಾವಣಾ ಪಾಲ್ಗೊಳ್ಳುವಿಕೆ ಹಾಗೂ ಹಕ್ಕನ್ನು ಚಲಾಯಿಸುವ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ. ಶಿವಶಂಕರ್ ಮಾತನಾಡಿ, ಮತದಾನವು ಅತ್ಯಮೂಲ್ಯವಾದುದು. ಅದನ್ನು ಪ್ರತಿಯೊಬ್ಬ ಅರ್ಹ ನಾಗರಿಕ ಪಡೆದುಕೊಳ್ಳಬೇಕು. ವಿವೇಚನೆಯಿಂದ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡುವ ಮನೋಭಾವ ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದು ಸಲಹೆ ನೀಡಿದರು.

ಚುನಾವಣಾ ಆಯೋಗವು ಜಿಲ್ಲಾ ಮಟ್ಟದ ಸ್ವೀಪ್ ಸಮಿತಿ ರಚಿಸಿ ಮತದಾರರಲ್ಲಿ ಜಾಗೃತಿ ಮೂಡಿಸುವಂತೆ ನಿರ್ದೇಶನ ನೀಡಿದೆ. ಅದರಂತೆ ಜಿಲ್ಲೆಯಲ್ಲಿ ಕಾರ್ಯ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದರು.

ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಭೈರಪ್ಪ ಶಿವಲಿಂಗ ನಾಯಿಕ ಮಾತನಾಡಿ, ದೇಶದಲ್ಲಿ ಪ್ರತಿಯೊಬ್ಬ ಮತದಾರರು ಸಹ ತನ್ನದೆ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ಹಾಗೂ ಕರ್ತವ್ಯ ಹೊಂದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಸಾಕ್ಷರತಾ ಪ್ರಮಾಣ ಹೆಚ್ಚಾಗುತ್ತಿದ್ದರೂ ಮತದಾನ ಪ್ರಮಾಣವು ಸಾಕ್ಷರತಾ ಪ್ರಮಾಣದ ಸರಾಸರಿಯಲ್ಲಿ ಹೆಚ್ಚಳವಾಗುತ್ತಿಲ್ಲ. ಇದು ಪ್ರಜಾಪ್ರಭುತ್ವದ ವ್ಯವಸ್ಥೆಗೆ ಒಳ್ಳೆಯ ಸೂಚಕವಲ್ಲ ಎಂದು ಹೇಳೀದರು. 

ಪ್ರಸ್ತುತ ದಿನಗಳಲ್ಲಿ ಮತದಾನದ ಕುರಿತು ಅರಿವು ಮೂಡಿಸುವ ಕಾರ್ಯವನ್ನು ಹೆಚ್ಚು ಮಾಡುವ ಅಗತ್ಯ ಇದೆ ಎಂದರು.

ಉಪ ವಿಭಾಗಾಧಿಕಾರಿ ಜಿ. ಸಂತೋಷ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್. ಅಮರೇಶ್, ತಹಶೀಲ್ದಾರ್ ಗಣಪತಿ ಶಾಸ್ತ್ರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿರಿದ್ದರು.

ರಾಷ್ಟ್ರೀಯ ಮತದಾನ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರಬಂಧ, ಭಿತ್ತಿಪತ್ರ ರಚನೆ ಹಾಗೂ ರಸಪ್ರಶ್ನೆ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು