ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಕಾರ್ಮಿಕ ಸಂಘಟನೆಗಳ ಮುಷ್ಕರ ಇಂದು

ಜಿಲ್ಲಾ ಬಂದ್‌ಗೆ ಅನುಮತಿ ನಿರಾಕರಿಸಿದ ಪೊಲೀಸರು, ಆಟೊ, ಬಸ್‌ ಸಂಚಾರಕ್ಕಿಲ್ಲ ತಡೆ, ಬಿಗಿ ಪೊಲೀಸ್‌ ಬಂದೋ ಬಸ್ತ್
Last Updated 7 ಜನವರಿ 2020, 15:49 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರದ ರೈತ, ಕಾರ್ಮಿಕ ಮತ್ತು ಜನ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತು ನೌಕರರ ಸಂಘಗಳು ಬುಧವಾರ (ಜ. 8) ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದು, ಜಿಲ್ಲೆಯಲ್ಲೂ ವಿವಿಧ ಸಂಘಟನೆಗಳು ಮುಷ್ಕರ ಬೆಂಬಲಿಸಿ ಬಂದ್‌ ನಡೆಸಲು ಉದ್ದೇಶಿಸಿವೆ.

ಸಿಪಿಎಂ, ಸಿಐಟಿಯು, ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಜನವಾದಿ ಮಹಿಳಾ ಸಂಘಟನೆ ಜಿಲ್ಲೆಯಲ್ಲಿ ಬುಧವಾರ ಜಿಲ್ಲಾ ಬಂದ್‌ ನಡೆಸಲು ತೀರ್ಮಾನಿಸಿ ಈಗಾಗಲೇ ಪ್ರಚಾರ ಕೂಡ ನಡೆಸಿವೆ. ಆದರೆ ಬಂದ್‌ ನಡೆಸಲು ಪೊಲೀಸ್‌ ಇಲಾಖೆ ಅನುಮತಿ ನಿರಾಕರಿಸಿದೆ.

ಮುಷ್ಕರದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿಲ್ಲ. ಜತೆಗೆ, ಹೋಟೆಲ್‌ಗಳು, ವಾಣಿಜ್ಯ ಉದ್ಯಮವೂ ಮುಷ್ಕರಕ್ಕೆ ಪೂರಕವಾಗಿ ಸ್ಪಂದಿಸಿಲ್ಲ. ಕೆಎಸ್‌ಆರ್‌ಟಿಸಿ ಬಸ್‌, ಆಟೊಗಳ ಸಂಚಾರವೂ ಇರಲಿದೆ. ಹೀಗಾಗಿ ಮುಷ್ಕರ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ನಗರದಲ್ಲಿ ಮಂಗಳವಾರ ಬಂದ್‌ ಬಗ್ಗೆ ಪ್ರಚಾರ ನಡೆಸಿದ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘದ ರಾಜ್ಯ ಸಮಿತಿ ಸದಸ್ಯ ಎಂ.ಪಿ.ಮುನಿವೆಂಕಟಪ್ಪ ಮಾತನಾಡಿ, ‘ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳು ತಮ್ಮ ವೈಫಲ್ಯಗಳ ವಿರುದ್ಧ ನಡೆಯುತ್ತಿರುವ ಬಂದ್ ವಿಫಲಗೊಳಿಸಲು ಪೊಲೀಸರನ್ನು ಬಳಸಿಕೊಳ್ಳುತ್ತಿವೆ. ಬಂದ್‌ ಹತ್ತಿಕ್ಕುವ ಸರ್ಕಾರಗಳ ಧೋರಣೆಗಳನ್ನು ಖಂಡಿಸುತ್ತೇವೆ. ಬುಧವಾರ ನಡೆಯುವ ಬಂದ್‌ಗೆ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಸಹಕರಿಸಬೇಕು’ ಎಂದು ಹೇಳಿದರು.

ಸಿಐಟಿಯು ಜಿಲ್ಲಾ ಘಟಕದ ಕಾರ್ಯದರ್ಶಿ ಬಿ.ಎನ್.ಮುನಿಕೃಷ್ಣಪ್ಪ ಮಾತನಾಡಿ, ‘ಜಿಲ್ಲಾ ಕೇಂದ್ರದಲ್ಲಿ ಬುಧವಾರ ಬೆಳಿಗ್ಗೆ ಬೈಕ್ ರ್‍ಯಾಲಿ, ಮೆರವಣಿಗೆ ಮೂಲಕ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುವುದು. ಜಿಲ್ಲೆಯ ವರ್ತಕರು, ಹೋಟೆಲ್ ಮಾಲೀಕರು ಸ್ವಯಂ ಪ್ರೇರಿತರಾಗಿ ಮುಷ್ಕರಕ್ಕೆ ಬೆಂಬಲ ನೀಡಬೇಕು. ಕೂಲಿ, ಕಾರ್ಮಿಕ ಸಂಘಟನೆಗಳು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT