ವ್ಯವಹಾರದಲ್ಲಿ ಕನ್ನಡ ಬಳಕೆಯಿಂದ ಭಾಷೆ ಉಳಿವು

ಶಿಡ್ಲಘಟ್ಟ: ಕನ್ನಡ ನಾಡು, ನುಡಿಯ ರಕ್ಷಣೆ ಹಾಗೂ ಗಡಿಭಾಗಗಳ ರಕ್ಷಣೆ ಪ್ರತಿಯೊಬ್ಬ ಯುವಕರ ಆದ್ಯ ಕರ್ತವ್ಯವಾಗಿದೆ ಎಂದು ಶಾಸಕ ವಿ.ಮುನಿಯಪ್ಪ ಹೇಳಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 66ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ನೆರೆ ರಾಜ್ಯಗಳಿಗೆ ಹೋದರೆ ಅಲ್ಲಿನ ಸ್ಥಳೀಯ ಭಾಷೆಯಲ್ಲಿಯೆ ವ್ಯವಹರಿಸಬೇಕಾಗುತ್ತದೆ. ಪ್ರಾಚೀನ ಭಾಷೆಯಾದ ಕನ್ನಡವನ್ನು ನಮ್ಮ ರಾಜ್ಯದ ಗಡಿ ಭಾಗಗಳಲ್ಲಿ ಉಳಿಸಿಕೊಳ್ಳಲು ಹೋರಾಟದ ಹಾದಿ ಹಿಡಿದಿರುವುದು ನಿಜಕ್ಕೂ ಶೋಚನೀಯ ಸಂಗತಿಯಾಗಿದೆ ಎಂದರು.
ವರ್ಷಕ್ಕೊಮ್ಮೆ ರಾಜ್ಯೋತ್ಸವದ ಹೆಸರಿನಲ್ಲಿ ಹಬ್ಬ ಆಚರಿಸಿದ ಮಾತ್ರಕ್ಕೆ ಭಾಷೆ ಉಳಿಯುವುದಿಲ್ಲ. ಬದಲಿಗೆ ಪ್ರತಿಯೊಬ್ಬರೂ ಕನ್ನಡ ಭಾಷೆಯನ್ನು ಮಾತನಾಡುವುದು ಸೇರಿದಂತೆ ಮಾತೃಭಾಷೆಯಲ್ಲಿ ವ್ಯವಹರಿಸಿದಾಗ ಮಾತ್ರ ಭಾಷೆ ಉಳಿಯುತ್ತದೆ ಎಂದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳು ಸೇರಿದಂತೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ನಡೆದ ಕ್ರೀಡಾಕೂಟದಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ನೌಕರರನ್ನು ಸನ್ಮಾನಿಸಲಾಯಿತು.
ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಆಂಜನೇಯಲು, ಶಿರಸ್ತೇದಾರ್ ಕೆ.ಎನ್.ಮಂಜುನಾಥ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಹಾಜರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.