ಚಿಕ್ಕಬಳ್ಳಾಪುರ: ಜಿಲ್ಲೆಯ ವಿವಿಧ ಹಂತದ ನ್ಯಾಯಾಲಯಗಳಲ್ಲಿ ಬಾಕಿ ಇರುವ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ವಕೀಲರು ಮತ್ತು ಕಕ್ಷಿದಾರರ ಪರಸ್ಪರ ಸಹಕಾರದೊಂದಿಗೆ ಸೆಪ್ಟೆಂಬರ್ 14ರಂದು ನಡೆಯಲಿರುವ ರಾಷ್ಟ್ರೀಯ ಮೆಗಾ ಅದಾಲತ್‌ನಲ್ಲಿ ರಾಜಿ ಮೂಲಕ ಇತ್ಯರ್ಥ ಪಡಿಸಿಕೊಳ್ಳಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಹಾಗೂ ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರಾದ ನೇರಳೆ ವೀರಭದ್ರಯ್ಯ ಭವಾನಿ ತಿಳಿಸಿದ್ದಾರೆ.
ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ನಿರಂತರವಾಗಿ ರಾಜಿ ಪಂಚಾಯಿತಿ ಮೂಲಕ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದರು.
ವಿಶೇಷವಾಗಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಿ ಸಾವಿರಾರು ಪ್ರಕರಣ ಇತ್ಯರ್ಥಪಡಿಸಲಾಗುತ್ತಿದೆ. ಈ ಬಾರಿ ಅದಾಲತ್‌ನಲ್ಲಿ ಜಿಲ್ಲಾ ನ್ಯಾಯಾಲಯ ಸೇರಿದಂತೆ ವಿವಿಧ ಹಂತದ ನ್ಯಾಯಾಲಯಗಳಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮು, ಜಿಲ್ಲಾ ಗ್ರಾಹಕರ ಪರಿಹಾರ ಆಯೋಗದಲ್ಲಿನ ಪ್ರಕರಣ, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಿಸಿದ ಪ್ರಕರಣ, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಪ್ರಕರಣ, ವಿಚ್ಛೇಧನ ಹೊರತುಪಡಿಸಿ ವೈವಾಹಿಕ ಕುಟುಂಬ ನ್ಯಾಯಾಲಯದ ಪ್ರಕರಣಗಳನ್ನು ಕಕ್ಷಿದಾರರು ಹಾಗೂ ವಕೀಲರ ಸಹಕಾರದೊಂದಿಗೆ ಇತ್ಯರ್ಥಪಡಿಸಲಾಗುವುದು ಎಂದರು.
ಸದ್ಯ ಜಿಲ್ಲೆಯಲ್ಲಿ ಒಟ್ಟು 1030 ಪ್ರಕರಣಗಳು ಬಾಕಿ ಇವೆ. ಜೊತೆಗೆ 1,173 ಪ್ರಕರಣ ಗುರುತಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ಅದಾಲತ್‌ನಲ್ಲಿ ವಿಲೇವಾರಿ ಮಾಡುವ ಗುರಿ ಹೊಂದಲಾಗಿದೆ ಎಂದರು.
ಈ ವೇಳೆ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.