ಭಾನುವಾರ, ಮಾರ್ಚ್ 29, 2020
19 °C
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಕೆ.ಗೋಪಾಲಯ್ಯ ಸೂಚನೆ

ಉಗ್ರಾಣ: ಸ್ಥಳ ನಿಗದಿಗೆ ಪ್ರಸ್ತಾವ ಸಲ್ಲಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ಜಿಲ್ಲೆಯಲ್ಲಿ ಸಗಟು ಉಗ್ರಾಣಗಳ ಕೊರತೆ ಇದ್ದರೆ, ಹೊಸ ಗೋದಾಮುಗಳ ನಿರ್ಮಾಣ ಮಾಡಲು ಸ್ಥಳ ನಿಗದಿಗೆ ಸರ್ಕಾರಕ್ಕೆ ಶೀಘ್ರವೇ ಪ್ರಸ್ತಾವ ಕಳುಹಿಸಿ’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ಅವರು ತಮ್ಮ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಶನಿವಾರ ನಡೆದ ಇಲಾಖೆಯ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಯಲ್ಲಿ ಮಾತನಾಡಿದ ಗೋಪಾಲಯ್ಯ, ‘ಸರ್ಕಾರದಿಂದ ವಿತರಣೆಯಾಗುವ ಆಹಾರ ಪದಾರ್ಥಗಳನ್ನು ಸಂರಕ್ಷಿಸಲು ಸೂಕ್ತ ಗೋದಾಮುಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ಕೊರತೆ ಇರುವ ಕಡೆಗಳಲ್ಲಿ ಹೊಸದಾಗಿ ಗೋದಾಮು ನಿರ್ಮಿಸಲು ಸ್ಥಳ ನಿಗದಿಪಡಿಸಲು ಜಿಲ್ಲಾಧಿಕಾರಿ ಅವರ ಮೂಲಕ ಪ್ರಸ್ತಾವ ಕಳುಹಿಸಿಕೊಡಬೇಕು’ ಎಂದು ಹೇಳಿದರು.

‘ಪಡಿತರ ವಿತರಣೆಗೆ ಬರುವ ಆಹಾರ ಪದಾರ್ಥಗಳು ಸಕಾಲಕ್ಕೆ ಸಮರ್ಪಕವಾಗಿ ಕಡುಬಡವರಿಗೆ ವಿತರಣೆ ಮಾಡಲೇಬೇಕು. ಇದರಿಂದ ಹೊಟ್ಟೆಪಾಡಿಗಾಗಿ ಕೆಲಸಕ್ಕೆ ಹೋಗುವ ಬಡವರಿಗೆ ಅನುಕೂಲವಾಗುತ್ತದೆ. ಆಹಾರ ಪದಾರ್ಥಗಳ ಗುಣಮಟ್ಟವನ್ನು ಕಾಯ್ದುಕೊಳ್ಳುವಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯವನ್ನು ನಿರ್ವಹಿಸಬೇಕು. ಜಿಲ್ಲೆಯಲ್ಲಿ ಹೊಸ ಪಡಿತರ ಚೀಟಿ ವಿತರಣೆ ಮಾಡುವ ಕಾರ್ಯ ಯುಗಾದಿ ಒಳಗೆ ಮುಗಿಸಬೇಕು. ಪಡಿತರ ಚೀಟಿಗಾಗಿ ಹೊಸದಾಗಿ ಬರುವ ಅರ್ಜಿಗಳ ಮಾಹಿತಿಯನ್ನು ತಿಂಗಳಲ್ಲಿ ಮೂರು ಬಾರಿ ಸರ್ಕಾರಕ್ಕೆ ಸಲ್ಲಿಸಬೇಕು’ ಎಂದು ತಿಳಿಸಿದರು.

‘ಪಡಿತರ ಚೀಟಿಗಳಿಗೆ ಈಗಾಗಲೇ ಹೊಂದಾಣಿಕೆಯಾಗಿರುವ ಆಧಾರ್ ಕಾರ್ಡ್‌ಗಳ ದೃಢೀಕರಣ (ಇ-ಕೆವೈಸಿ) ಪ್ರಕ್ರಿಯೆ ಪ್ರತಿ ನ್ಯಾಯಬೆಲೆ ಅಂಗಡಿಗಳಲ್ಲೂ ಜಾರಿಯಲ್ಲಿದ್ದು, ಉಚಿತವಾಗಿ ನಡೆಸಲಾಗುವುದು. ಈ ಬಗ್ಗೆ ಜನಸಾಮಾನ್ಯರಿಗೆ ತಿಳಿಯುವಂತೆ ಪ್ರತಿ ನ್ಯಾಯಬೆಲೆ ಅಂಗಡಿಗಳ ಮುಂಭಾಗದಲ್ಲಿ ನಾಮಫಲಕ ಹಾಕಿಸಬೇಕು. ಪಡಿತರದಾರರು ಆಧಾರ್‌ ಕಾರ್ಡ್‌ ಸಂಖ್ಯೆ ಜೋಡಣೆಯನ್ನು ಕಡ್ಡಾಯವಾಗಿ ಮಾಡಿಸಬೇಕು. ತಪ್ಪಿದ್ದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಸುಳ್ಳು ಮಾಹಿತಿ ನೀಡಿ ಬಿಪಿಎಲ್‌ ಕಾರ್ಡ್‌ ಪಡೆದು ಸರ್ಕಾರಕ್ಕೆ ವಂಚಿಸುತ್ತಿರುವವರಿಗೆ ಕಡಿವಾಣ ಹಾಕಲು ಅಧಿಕಾರಿಗಳು ಖುದ್ದಾಗಿ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ಮಾಡಿ, ತನಿಖೆ ಮಾಡಬೇಕು. ತನಿಖೆಯಲ್ಲಿ ಯಾವೊಬ್ಬ ಅರ್ಹ ಪಡಿತರದಾರನಿಗೂ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು. ಏಪ್ರಿಲ್ 30ರ ಒಳಗೆ ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿಂದ ಕಾರ್ಡ್‌ ಹಿಂಪಡೆಯಲು ಕ್ರಮಕೈಗೊಳ್ಳಬೇಕು’ ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಫೌಜಿಯಾ ತರನ್ನುಮ್, ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಸೋಮಶೇಖರಪ್ಪ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)