ಶನಿವಾರ, ಡಿಸೆಂಬರ್ 4, 2021
20 °C
ತಾಲ್ಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಸೂಚನೆ

ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ: ಸಚಿವ ಡಾ.ಕೆ.ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ಜಿಲ್ಲೆಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾಡಳಿತ ಮತ್ತು ಚುನಾಯಿತ ಪ್ರತಿನಿಧಿಗಳು ಸಕ್ರಿಯರಾಗಿ ಕಾರ್ಯ ನಿರ್ವಹಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತಾಲ್ಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ, ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಈವರೆಗೆ ತಾಲ್ಲೂಕಿನಲ್ಲಿ ಎಂಟು ಸಮುದಾಯ ಶಾಚೌಲಯಗಳನ್ನು ನಿರ್ಮಿಸಲಾಗಿದೆ. ವೈಯಕ್ತಿಕ ಶೌಚಾಲಯ ಇದ್ದರೂ ಜನ ಬಳಸುತ್ತಿಲ್ಲ ಎಂಬ ದೂರುಗಳಿವೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು. 

‘ಡಿಸೆಂಬರ್ ಅಂತ್ಯದೊಳಗೆ 23 ಪಂಚಾಯತಿಗಳಲ್ಲಿ ತಲಾ ಒಂದರಂತೆ ಸಮುದಾಯ ಶೌಚಾಲಯಗಳನ್ನು ಪೂರ್ಣಗೊಳಿಸಬೇಕು. ಜಾಗದ ಸಮಸ್ಯೆ ಇದ್ದರೆ ತಹಶೀಲ್ದಾರ್ ಅವರು ತಕ್ಷಣ ಬಗೆಹರಿಸಬೇಕು. ಸಂಬಂಧಿಸಿದ ಇಲಾಖೆಗಳೆಲ್ಲ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸಮನ್ವಯತೆ ಕೊರತೆಯಿಂದಲೇ ಅನೇಕ ಕಾರ್ಯಕ್ರಮ ನನೆಗುದಿಗೆ ಬಿದ್ದಿವೆ. ಇದು ಮರುಕಳಿಸಬಾರದು’ ಎಂದು ತಿಳಿಸಿದರು.

‘ಶಾಲೆಗಳಲ್ಲಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶೌಚಾಲಯ ನಿರ್ಮಿಸಬೇಕು. ಶುದ್ಧ ಕುಡಿಯುವ ನೀರು ಪೂರೈಕೆಗೆ ಕಡ್ಡಾಯವಾಗಿ ಕ್ರಮ ಕೈಗೊಳ್ಳಬೇಕು. ಆರ್‌ಐಡಿಎಫ್ ಯೋಜನೆ ಅಡಿ ಕಳೆದ ವರ್ಷ ಬಿಡುಗಡೆ ಮಾಡಿದ ಹಣ ಇನ್ನೂ ಬಳಕೆ ಮಾಡಿಲ್ಲ. ಇದಕ್ಕೆ ಏನು ಕಾರಣ? ತ್ವರಿತವಾಗಿ ಕೆಲಸ ಮುಗಿಸಬೇಕು’ ಎಂದರು.

‘ಪ್ರತಿ ಶಾಲೆಗೆ ಸೇರಿದ ಆಸ್ತಿ ಖಾತೆ ಮಾಡಿಸಿಕೊಳ್ಳಬೇಕು. ಬೇರೆ ಇಲಾಖೆ, ದಾನಿಗಳಿಂದ ಪಡೆದ ಜಮೀನುಗಳನ್ನು ಸಹ ಖಾತೆ ಮಾಡಿಸಿಕೊಳ್ಳಬೇಕು. ಇನ್ನೊಂದು ತಿಂಗಳಲ್ಲಿ ಈ ಪ್ರಕ್ರಿಯೆ ಮುಗಿಸಬೇಕು. ಶಾಲೆಗಳಲ್ಲಿ ಕಾಂಪೌಂಡ್, ಶೌಚಾಲಯ, ಆಟದ ಮೈದಾನ ಮತ್ತು ಮಳೆ ನೀರು ಸಂಗ್ರಹ ಕಾಮಗಾರಿ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಬಿ.ಫೌಜಿ಼ಯಾ ತರನ್ನಮ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಉಪಾಧ್ಯಕ್ಷೆ ಇಂದಿರಮ್ಮ ಅಣ್ಣಯ್ಯಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಸಿ.ರಾಜಾಕಾಂತ್, ಕೆ.ಎಂ.ಮುನೇಗೌಡ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.